ನವದೆಹಲಿ:ಒಂದು ರಾಷ್ಟ್ರ ಒಂದು ಚುನಾವಣೆ ವರದಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ ಸಮಿತಿ ಸರ್ಕಾರಕ್ಕೆ ಈ ವರದಿ ಸಲ್ಲಿಕೆ ಮಾಡಿತ್ತು. ಒಂದು ರಾಷ್ಟ್ರ, ಒಂದು ಚುನಾವಣೆ ಮಾಡುವ ಉದ್ದೇಶ ಎಂದರೆ, ಏಕಕಾಲಕ್ಕೆ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗಳನ್ನು ನಡೆಸುವುದಾಗಿದೆ. ಇದರಿಂದ ಸಮಯ, ಹಣ ಮತ್ತು ವರ್ಷದ ಎಲ್ಲ ಸಮಯದಲ್ಲಿ ಚುನಾವಣೆಗಳನ್ನು ನಡೆಯುವುದನ್ನು ತಪ್ಪಿಸುವ ಉದ್ದೇಶದಿಂದ ಈ ನೀತಿ ತರಲು ಕೇಂದ್ರ ಸರ್ಕಾರ ಮುಂದಾಗಿದೆ.
ಪ್ರಧಾನಿ ಮೋದಿ ಅವರ ಈ ಮಹತ್ವಾಕಾಂಕ್ಷಿ ನೀತಿಯನ್ನು ಜಾರಿಗೆ ತರುವ ನಿಟ್ಟಿನಲ್ಲಿ ಕಳೆದ ಸೆಪ್ಟೆಂಬರ್ನಲ್ಲಿ ಸಮಿತಿ ರಚನೆ ಮಾಡಲಾಗಿತ್ತು. 39 ರಾಜಕೀಯ ಪಕ್ಷಗಳು, ಅರ್ಥಶಾಸ್ತ್ರಜ್ಞರು ಮತ್ತು ಭಾರತದ ಚುನಾವಣಾ ಆಯೋಗದೊಂದಿಗೆ ಸಮಿತಿ ಸಮಾಲೋಚನೆ ನಡೆಸಿ ವರದಿ ತಯಾರಿಸಿದೆ. “ಸಮಿತಿ ವರದಿಯಲ್ಲಿ ಏಕಕಾಲದಲ್ಲಿ ಚುನಾವಣೆ ನಡೆಸಬೇಕು ಎಂಬ ಸರ್ವಾನುಮತದ ಅಭಿಪ್ರಾಯವನ್ನು ಹೊಂದಿದೆ” ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಲ್ಲಿಸಿದ ವರದಿಯಲ್ಲಿ ಹೇಳಲಾಗಿದೆ. ಅಲ್ಲದೆ, 100 ದಿನಗಳ ನಂತರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳೊಂದಿಗೆ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳನ್ನು ಸಹ ನಡೆಸಬಹುದು ಎಂದು ವರದಿಯಲ್ಲಿ ಹೇಳಲಾಗಿದೆ.
ಇದು ಕಾರ್ಯಸಾಧುವಲ್ಲ ಎಂದ ಖರ್ಗೆ:ಪ್ರಜಾಪ್ರಭುತ್ವದಲ್ಲಿ 'ಒಂದು ರಾಷ್ಟ್ರ, ಒಂದು ಚುನಾವಣೆ' ಕಾರ್ಯಸಾಧುವಲ್ಲ. ಈ ಪ್ರಸ್ತಾಪವನ್ನು ನಾನು ವಿರೋಧಿಸುತ್ತೇನೆ. ಪ್ರಜಾಪ್ರಭುತ್ವ ಉಳಿಯಲು ಅಗತ್ಯವಿದ್ದಾಗ ಚುನಾವಣೆಗಳನ್ನು ನಡೆಸಬೇಕಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.
‘ಒಂದು ರಾಷ್ಟ್ರ, ಒಂದು ಚುನಾವಣೆ’ ಕುರಿತ ಉನ್ನತ ಮಟ್ಟದ ಸಮಿತಿಯ ಶಿಫಾರಸುಗಳನ್ನು ಅಂಗೀಕರಿಸಿದ ಕೇಂದ್ರ ಸಚಿವ ಸಂಪುಟದ ನಿರ್ಧಾರದ ಕುರಿತು ಪ್ರತಿಕ್ರಿಯಿಸಿದ ಅವರು, "ನಾವು ಇದರೊಂದಿಗೆ ನಿಲ್ಲುವುದಿಲ್ಲ. ಪ್ರಜಾಪ್ರಭುತ್ವದಲ್ಲಿ ಒಂದು ರಾಷ್ಟ್ರ ಒಂದು ಚುನಾವಣೆ ಕೆಲಸ ಮಾಡಲು ಸಾಧ್ಯವಿಲ್ಲ" ಎಂದರು.