ನವದೆಹಲಿ: ಹರಿಯಾಣ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವ ನಿಟ್ಟಿನಲ್ಲಿ ಕುಸ್ತಿಪಟು ವಿನೇಶ್ ಫೋಗಟ್ ತಯಾರಿ ನಡೆಸುತ್ತಿದ್ದಾರೆ ಎಂಬ ಊಹಾಪೋಗಳ ನಡುವೆ ಇಂದು ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾದರು. ಈ ಸಂದರ್ಭದಲ್ಲಿ ಮತ್ತೋರ್ವ ಕುಸ್ತಿಪಟು ಭಜರಂಗ್ ಪುನಿಯಾ ಜೊತೆಗಿದ್ದರು. ಈ ಮೂಲಕ ಫೋಗಟ್ ರಾಜಕೀಯ ಅಖಾಡಕ್ಕಿಳಿಯುವ ಸ್ಪಷ್ಟ ಸೂಚನೆ ನೀಡಿದ್ದಾರೆ.
ಫೋಗಟ್ ಮತ್ತು ಪೂನಿಯಾ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆಯೇ ಎಂಬ ಪ್ರಶ್ನೆಗೆ ಮಂಗಳವಾರ ಪ್ರತಿಕ್ರಿಯಿಸಿದ್ದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗು ಹರಿಯಾಣ ಕಾಂಗ್ರೆಸ್ ಉಸ್ತುವಾರಿ ದೀಪಕ್ ಬಬಾರಿಯಾ, ಇಬ್ಬರೂ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಪಕ್ಷದಲ್ಲಿ ಚರ್ಚೆ ನಡೆಯುತ್ತಿದೆ. ಗುರುವಾರ ಇದಕ್ಕೆಲ್ಲ ಉತ್ತರ ಸಿಗಲಿದೆ ಎಂದು ಹೇಳಿದ್ದರು.
ಇದಕ್ಕೆ ಪೂರಕವೆಂಬಂತೆ ಇಂದು ರಾಹುಲ್ ಗಾಂಧಿ ಜೊತೆಗೆ ವಿನೇಶ್ ಫೋಗಟ್ ಮತ್ತು ಭಜರಂಗ್ ಪೂನಿಯಾ ಅವರ ಫೋಟೋವನ್ನು ಕಾಂಗ್ರೆಸ್ ಅಧಿಕೃತ 'ಎಕ್ಸ್' ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.
2023ರಲ್ಲಿ ಭಾರತೀಯ ಕುಸ್ತಿ ಫೆಡರೇಷನ್ ಮುಖ್ಯಸ್ಥ ಹಾಗು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ನಡೆದ ಪ್ರತಿಭಟನೆಯಲ್ಲಿ ಪೂನಿಯಾ ಮತ್ತು ಫೋಗಟ್ ಸಕ್ರಿಯವಾಗಿ ಭಾಗಿಯಾಗಿದ್ದರು.