ಸೋನಿಪತ್ (ಹರಿಯಾಣ): ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಗರಣದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಾತ್ರವಿದೆ ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ. ಅಷ್ಟೇ ಅಲ್ಲ ಇಂದು ಜನಪ್ರತಿನಿಧಿಗಳ ಕೋರ್ಟ್ ಸಿಎಂ ವಿರುದ್ಧ ತನಿಖೆಗೆ ಆದೇಶಿಸಿದೆ ಎಂಬ ವಿಚಾರದ ಬಗ್ಗೆ ಪ್ರಧಾನಿ ಮೋದಿ ಮಾತನಾಡಿ ಗಮನ ಸೆಳೆದಿದ್ದಾರೆ. ಕಾಂಗ್ರೆಸ್ ಸಂಪೂರ್ಣವಾಗಿ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಹರಿಯಾಣ ವಿಧಾನಸಭೆ ಚುನಾವಣೆಯ ಪ್ರಚಾರ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.
ಹರಿಯಾಣದ ಸೋನಿಪತ್‌ನಲ್ಲಿ ರ‍್ಯಾಲಿ ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಪಕ್ಷದ ವೈಫಲ್ಯಗಳನ್ನು ಎತ್ತಿ ತೋರಿಸಿದರಲ್ಲದೇ, ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವತಃ ಮುಡಾ ಹಗರಣದಲ್ಲಿ ಭಾಗಿಯಾಗಿರುವ ಬಗ್ಗೆ ಗಮನ ಸೆಳೆದಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದು ಒಂದೂವರೆ ವರ್ಷಗಳಷ್ಟೇ ಕಳೆದಿದೆ. ಅಷ್ಟರಲ್ಲೇ ಅಲ್ಲಿನ ಮುಖ್ಯಮಂತ್ರಿ ಭೂ ಹಗರಣದ ಆರೋಪ ಎದುರಿಸುತ್ತಿದ್ದಾರೆ. ರಾಜ್ಯಪಾಲರು ನೀಡಿದ್ದ ಪ್ರಾಸಿಕೂಷನ್ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ. ಪ್ರಕರಣದಲ್ಲಿ ಸೂಕ್ತ ತನಿಖೆ ಅಗತ್ಯ ಎಂದು ನ್ಯಾಯಾಲಯ ಹೇಳಿದೆ ಎಂದು ಮೋದಿ ದೇಶದ ಜನರ ಗಮನಕ್ಕೆ ತರುವ ಪ್ರಯತ್ನ ಮಾಡಿದ್ದಾರೆ. ಈ ಮೂಲಕ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಅಷ್ಟೇ ಅಲ್ಲ ಕರ್ನಾಟಕ ಸರ್ಕಾರ ದಲಿತರಿಗೆ ಮೀಸಲಾದ ಹಣವನ್ನು ನುಂಗಿ ನೀರು ಕುಡಿದಿದೆ. ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರು ದಲಿತ ಸಮಾಜದಿಂದ ಬಂದವರು, ಇಷ್ಟಿದ್ದರೂ ದಲಿತರ ಹಣದಲ್ಲಿ ಭ್ರಷ್ಟಾಚಾರ ಮಾಡಲಾಗಿದೆ ಎಂದು ಪಿಎಂ ಮೋದಿ ಆರೋಪಿಸಿದ್ದಾರೆ.
ಕಾಂಗ್ರೆಸ್ ವಿರುದ್ಧ ಮೋದಿ ಟೀಕಾಪ್ರಹಾರ: ಹತ್ತು ವರ್ಷಗಳ ಹಿಂದೆ ಇಲ್ಲಿ ಕಾಂಗ್ರೆಸ್ ಸರಕಾರವಿದ್ದಾಗ ರೈತರ ಭೂಮಿಯನ್ನು ಲೂಟಿ ಮಾಡಿತ್ತು. ಈ ಹಿಂದೆ ಆಡಳಿತ ನಡೆಸಿದ ಕಾಂಗ್ರೆಸ್ ಹರಿಯಾಣವನ್ನು ದಲಾಲರಿಗೆ ಹಸ್ತಾಂತರಿಸಿತ್ತು ಎಂದು ಮೋದಿ ಆರೋಪಿಸಿದ್ದಾರೆ. ಕಾಂಗ್ರೆಸ್ ಯಾವಾಗಲೂ ಎಸ್‌ಸಿ - ಎಸ್‌ಟಿ ಮತ್ತು ಒಬಿಸಿಗಳನ್ನು ದೂರ ಇಟ್ಟಿದೆ. ಕಾಂಗ್ರೆಸ್ ಸರ್ಕಾರದಿಂದ ದೂರವಿದ್ದಾಗಲೆಲ್ಲ ಬಡವರು, ಎಸ್‌ಸಿ, ಎಸ್‌ಟಿ ಒಬಿಸಿಗಳ ಹಕ್ಕುಗಳ ಬಗ್ಗೆ ಮಾತನಾಡುತ್ತದೆ. ಆದರೆ ಅಧಿಕಾರಕ್ಕೆ ಬರುತ್ತಿದ್ದಂತೆ ಅವರ ಹಕ್ಕುಗಳನ್ನು ಕಸಿದುಕೊಳ್ಳುತ್ತದೆ ಎಂದು ಆರೋಪಿಸಿದರು.