ಹೈದರಾಬಾದ್ (ತೆಲಂಗಾಣ): ಪ್ರಧಾನಿ ನರೇಂದ್ರ ಮೋದಿ ಮೀಸಲಾತಿಗೆ ವಿರುದ್ಧವಾಗಿದ್ದು, ಜನರ ಮೀಸಲಾತಿ ಕೋಟಾವನ್ನು ಕಸಿದುಕೊಳ್ಳಲು ಬಯಸುತ್ತಿದ್ದಾರೆ. ಮೋದಿಯವರು ಸಾರ್ವಜನಿಕ ವಲಯವನ್ನು ಖಾಸಗೀಕರಣಗೊಳಿಸಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ತೆಲಂಗಾಣದ ಆದಿಲಾಬಾದ್ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಭಾನುವಾರ ಚುನಾವಣಾ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಪ್ರಸ್ತುತ ಸಾರ್ವತ್ರಿಕ ಚುನಾವಣೆ ಎರಡು ಸಿದ್ಧಾಂತಗಳ ನಡುವೆ ನಡೆಯುತ್ತಿದೆ. ಇದರಲ್ಲಿ ಕಾಂಗ್ರೆಸ್ ಸಂವಿಧಾನವನ್ನು ರಕ್ಷಿಸಲು ಪ್ರಯತ್ನಿಸುತ್ತಿದೆ. ಮತ್ತೊಂದೆಡೆ, ಬಿಜೆಪಿ-ಆರ್‌ಎಸ್‌ಎಸ್ ಸಂವಿಧಾನ ಮತ್ತು ಜನರ ಹಕ್ಕುಗಳನ್ನು ಕೊನೆಗೊಳಿಸಲು ಪ್ರಯತ್ನಿಸುತ್ತಿದೆ ಎಂದರು.
ನರೇಂದ್ರ ಮೋದಿ ಜಿ ಮೀಸಲಾತಿಗೆ ವಿರುದ್ಧವಾಗಿದ್ದಾರೆ. ಅವರು ನಿಮ್ಮಿಂದ (ಜನರಿಂದ) ಮೀಸಲಾತಿಯನ್ನು ಕಸಿದುಕೊಳ್ಳಲು ಬಯಸುತ್ತಾರೆ. ದೇಶದ ಮುಂದಿರುವ ದೊಡ್ಡ ವಿಷಯವೆಂದರೆ ಮೀಸಲಾತಿ ಮಿತಿಯನ್ನು ಶೇ.50ಕ್ಕಿಂತ ಹೆಚ್ಚಿಸುವುದು. ಕಾಂಗ್ರೆಸ್ ಕೇಂದ್ರ ಸರ್ಕಾರ ಮೀಸಲಾತಿಯನ್ನು ಹೆಚ್ಚಿಸುತ್ತದೆ ಎಂದು ತನ್ನ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ ಎಂದು ರಾಹುಲ್ ಹೇಳಿದರು.
ಮೋದಿಯವರು ಸಾರ್ವಜನಿಕ ವಲಯವನ್ನು ಖಾಸಗೀಕರಣಗೊಳಿಸಿದ್ದಾರೆ ಎಂದು ಆರೋಪಿಸಿದ ರಾಹುಲ್ ಗಾಂಧಿ, ಬಿಜೆಪಿ ನೇತೃತ್ವದ ಸರ್ಕಾರ ಜಾರಿಗೆ ತಂದಿರುವ ಗುತ್ತಿಗೆ ವ್ಯವಸ್ಥೆಯು ಮೀಸಲಾತಿಯನ್ನೇ ತೆಗೆದುಹಾಕುವಂತಿದೆ. ಆದರೆ, ನಾವು ಸರ್ಕಾರಿ ಕಚೇರಿಗಳು ಮತ್ತು ಸಾರ್ವಜನಿಕ ವಲಯಗಳಲ್ಲಿನ ಗುತ್ತಿಗೆ ವ್ಯವಸ್ಥೆಯನ್ನು ತೆಗೆದುಹಾಕುತ್ತೇವೆ. ಶಾಶ್ವತ ಉದ್ಯೋಗಗಳನ್ನು ಒದಗಿಸುತ್ತೇವೆ ಎಂದು ತಿಳಿಸಿದ್ದಾರೆ.