ಅಂಬಾಲಾ (ಹರಿಯಾಣ):ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ರೈತರ ವಿರುದ್ಧ ಅಂಬಾಲಾ ಜಿಲ್ಲೆಯ ಪೊಲೀಸರು ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ. ರಾಜ್ಯದ ಗಡಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಭಾಗಿಯಾಗಿರುವ ರೈತ ಮುಖಂಡರ ವಿರುದ್ಧ ಪೊಲೀಸರು ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಕ್ರಮ ಕೈಗೊಂಡಿದ್ದಾರೆ. ಅಪರಾಧ ಚಟುವಟಿಕೆಗಳನ್ನು ತಡೆಯಲು ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಆಡಳಿತ ಮಂಡಳಿಯಿಂದ ಈ ಕ್ರಮ ಕೈಗೊಳ್ಳಲಾಗುತ್ತಿದೆ.
ಫೆಬ್ರವರಿ 13ರಿಂದ 'ದೆಹಲಿ ಚಲೋ' ಮೆರವಣಿಗೆಗೆ ಸಂಬಂಧಿಸಿದಂತೆ ಹರಿಯಾಣದ ಗಡಿಯಲ್ಲಿ ಹಾಕಲಾದ ಬ್ಯಾರಿಕೇಡ್‌ಗಳನ್ನು ಕಿತ್ತೊಗೆಯಲು ಪ್ರತಿಭಟನಾಕಾರರು ನಿರಂತರವಾಗಿ ಪ್ರಯತ್ನ ಮಾಡುತ್ತಿದ್ದಾರೆ ಎಂದು ಅಂಬಾಲಾ ಪೊಲೀಸರು ಗುರುವಾರ ತಿಳಿಸಿದ್ದಾರೆ. ಈ ವೇಳೆ, ಪ್ರತಿಭಟನಾಕಾರರು ಅಧಿಕಾರಿಗಳು ಹಾಗೂ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿ ಗಲಾಟೆ ಸೃಷ್ಟಿಸಿ ಕಾನೂನು ಸುವ್ಯವಸ್ಥೆ ಹದಗೆಡಿಸಲು ಯತ್ನಿಸುತ್ತಿದ್ದಾರೆ. ಈ ವೇಳೆಯಲ್ಲಿ ಕಿಡಿಗೇಡಿಗಳಿಂದ ಸರ್ಕಾರಿ ಹಾಗೂ ಖಾಸಗಿ ಆಸ್ತಿಗೆ ಸಾಕಷ್ಟು ಹಾನಿ ಉಂಟಾಗಿದೆ. ಈ ಚಳವಳಿಯಲ್ಲಿ ಸುಮಾರು 30 ಪೊಲೀಸರು ಗಾಯಗೊಂಡಿದ್ದಾರೆ. ಒಬ್ಬ ಪೊಲೀಸ್ ಪೇದೆಗೆ ಮೆದುಳಿನ ರಕ್ತಸ್ರಾವವಾಗಿದ್ದು, ಇಬ್ಬರು ಪೊಲೀಸರು ಸಾವನ್ನಪ್ಪಿದ್ದಾರೆ.
ಶಾಂತಿ ಕದಡಲು ನಿರಂತರವಾಗಿ ಪೋಸ್ಟ್: ಈ ಆಂದೋಲನದಲ್ಲಿ ಹಲವು ರೈತ ಮುಖಂಡರು ಸಕ್ರಿಯ ಪಾತ್ರ ವಹಿಸುತ್ತಿದ್ದು, ಕಾನೂನು ಸುವ್ಯವಸ್ಥೆ ಹದಗೆಡಿಸುವ ಕೆಲಸ ಮಾಡುತ್ತಿದ್ದು, ಸಾಮಾಜಿಕ ಜಾಲತಾಣಗಳಾದ ಫೇಸ್‌ಬುಕ್, ವಾಟ್ಸ್‌ಆ್ಯಪ್, ಇನ್‌ಸ್ಟಾಗ್ರಾಂ, ಟೆಲಿಗ್ರಾಂ ಮೂಲಕ ಪ್ರಚೋದನಕಾರಿ ಭಾಷಣ ಮಾಡುತ್ತಾ ನಿರಂತರವಾಗಿ ಅಪಪ್ರಚಾರ ಮಾಡುತ್ತಿದ್ದಾರೆ. ಶಾಂತಿ ಕದಡಲು ನಿರಂತರವಾಗಿ ಪೋಸ್ಟ್ಗಳನ್ನು ಹಾಕಲಾಗುತ್ತಿದೆ ಎಂದು ಅಂಬಾಲಾ ಪೊಲೀಸರು ತಿಳಿಸಿದ್ದಾರೆ.
ಅಪರಾಧ ಚಟುವಟಿಕೆ ತಡೆಗೆ ಕ್ರಮ:ಅಂಬಾಲಾ ಪೊಲೀಸರ ಪ್ರಕಾರ, "ಅಪರಾಧ ಚಟುವಟಿಕೆಗಳನ್ನು ತಡೆಗಟ್ಟಲು ಮತ್ತು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ, ರೈತ ಸಂಘಟನೆಗಳ ಪದಾಧಿಕಾರಿಗಳ ಗೃಹಬಂಧನದ ಕ್ರಮವನ್ನು ಆಡಳಿತವು ರಾಷ್ಟ್ರೀಯ ಭದ್ರತಾ ಕಾಯಿದೆ 1980 ರ ಸೆಕ್ಷನ್ 2 (3) ರ ಅಡಿ ಜಾರಿಗೊಳಿಸಲು ಮುಂದಾಗಿದೆ. ಜೊತೆಗೆ ಆಂದೋಲನದ ಸಮಯದಲ್ಲಿ ಇದರಿಂದ ಶಾಂತಿ ಸುವ್ಯವಸ್ಥೆ ಕಾಪಾಡಿಕೊಳ್ಳಬಹುದು. ಯಾವುದೇ ರೀತಿ ಸಾಮಾಜಿಕ ಸಾಮರಸ್ಯ ಕದಡಬಾರದು" ಎಂದು ಎಚ್ಚರಿಕೆ ಸಂದೇಶ ನೀಡಿದ್ದಾರೆ.