ನವದೆಹಲಿ:ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದಾಳಿಯನ್ನು ವಿರೋಧಿಸಿ ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್‌ಎಸ್‌ಎಸ್) ಸೇರಿದಂತೆ ವಿವಿಧ ಸಂಘಟನೆಗಳು ದೆಹಲಿಯ ವಿವಿಧ ಭಾಗಗಳಲ್ಲಿ ಸೋಮವಾರ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸುವ ಮೂಲಕ ಸಮಸ್ಯೆಯ ಬಗ್ಗೆ ಗಮನ ಸೆಳೆದವು.
ನೆರೆಯ ದೇಶದಲ್ಲಿ ಹಿಂದೂಗಳು ಮತ್ತು ಇತರ ಅಲ್ಪಸಂಖ್ಯಾತ ಸಮುದಾಯಗಳ ಮೇಲೆ ಅಲ್ಲಿನ ಮತಾಂಧರು ನಡೆಸುತ್ತಿರುವ ದೌರ್ಬಲ್ಯ, ದಾಳಿಯ ವಿರುದ್ಧ 'ದೆಹಲಿಯ ನಾಗರಿಕ ಸಮಾಜ'ದ ನೇತೃತ್ವದಲ್ಲಿ ಬಾಂಗ್ಲಾದೇಶ ರಾಯಭಾರ ಕಚೇರಿಗೆ ಮೆರವಣಿಗೆ ನಡೆಸಲಾಯಿತು.
ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ದೆಹಲಿ ಘಟಕ ತಿಳಿಸಿದಂತೆ, ಪ್ರತಿಭಟನಾ ಮೆರವಣಿಗೆಯಲ್ಲಿ 200ಕ್ಕೂ ಹೆಚ್ಚು ಸಾಮಾಜಿಕ, ಸಾಂಸ್ಕೃತಿಕ ಮತ್ತು ಧಾರ್ಮಿಕ ಸಂಘಟನೆಗಳ ಪ್ರತಿನಿಧಿಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.
"ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯದ ಬಗ್ಗೆ ಗಮನ ಸೆಳೆಯಲು, ದೆಹಲಿಯ ನಾಗರಿಕ ಸಮಾಜವು ಸೋಮವಾರ ರಾಷ್ಟ್ರ ರಾಜಧಾನಿಯ ಎಲ್ಲಾ ಜಿಲ್ಲೆಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿತು. ನಂತರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿತು" ಎಂದು ಪ್ರತಿಭಟನೆಯ ಸಂಘಟಕರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರವನ್ನು ನಿಲ್ಲಿಸಲು ಮತ್ತು ಅವರಿಗೆ ಸುರಕ್ಷತೆ ಒದಗಿಸಲು ತಕ್ಷಣದ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಪತ್ರದಲ್ಲಿ ಒತ್ತಾಯಿಸಿದ್ದಾರೆ.
ಇಸ್ಕಾನ್ನ ಚಿನ್ಮಯಿ ಕೃಷ್ಣ ದಾಸ್ ಅವರ ಮೇಲೆ ದೇಶದ್ರೋಹದ ಆರೋಪ ಹೊರಿಸಿ ಅನ್ಯಾಯವಾಗಿ ಜೈಲಿನಲ್ಲಿ ಬಂಧಿಸಿಡಲಾಗಿದೆ. ಅವರನ್ನು ಬಿಡುಗಡೆ ಮಾಡಿಸಲು ಭಾರತ ಸರ್ಕಾರ ಕ್ರಮ ವಹಿಸಬೇಕು. ಹಿಂದುಗಳು ಸೇರಿದಂತೆ ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ದಾಳಿಗಳಿಗೆ ಕಡಿವಾಣ ಹಾಕಬೇಕಿದೆ. ಇದರ ವಿರುದ್ಧ ಅಂತಾರಾಷ್ಟ್ರೀಯ ಮಟ್ಟದ ಬೆಂಬಲ ಪಡೆಯಬೇಕು ಎಂದು ಒತ್ತಾಯಿಸಲಾಗಿದೆ.
ಇದನ್ನೂ ಓದಿ:ವಯನಾಡ್ ದುರಂತದಲ್ಲಿ ಇಡೀ ಕುಟುಂಬ, ಅಪಘಾತದಲ್ಲಿ ಭಾವಿ ಪತಿಯನ್ನೂ ಕಳೆದುಕೊಂಡ ಯುವತಿಗೆ ಸಿಕ್ತು ಸರ್ಕಾರಿ ಉದ್ಯೋಗ