ನವದೆಹಲಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಚುನಾವಣಾ ಬಾಂಡ್‌ಗಳ ವಿವರಗಳನ್ನು ಕೇಂದ್ರ ಚುನಾವಣಾ ಆಯೋಗಕ್ಕೆ ಸಲ್ಲಿಸಿದೆ. ವರದಿಗಳ ಪ್ರಕಾರ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 2018 ರಿಂದ ಸುಮಾರು ಮೂವತ್ತು ಕಂತುಗಳಲ್ಲಿ 16,518 ಕೋಟಿ ರೂ.ಗಳ ಚುನಾವಣಾ ಬಾಂಡ್ಗಳನ್ನು ವಿತರಿಸಿದೆ. ಈಗ ಬ್ಯಾಂಕ್ ಡೇಟಾವನ್ನು ಆಯೋಗಕ್ಕೆ ಒದಗಿಸಿರುವುದರಿಂದ, ಕೇಂದ್ರ ಚುನಾವಣಾ ಆಯೋಗವು ಮಾರ್ಚ್ 15 ರಂದು ಸಂಜೆ 5 ಗಂಟೆಯೊಳಗೆ ಈ ವಿವರಗಳನ್ನು ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಲಭ್ಯವಾಗುವಂತೆ ಮಾಡಬೇಕಾಗಿದೆ. ಈ ತಿಂಗಳ ಕೊನೆಯಲ್ಲಿ ಚುನಾವಣಾ ಆಯೋಗವು ಲೋಕಸಭಾ ಚುನಾವಣೆಯ ವೇಳಾಪಟ್ಟಿ ಪ್ರಕಟಿಸಲಿದೆ ಎಂಬ ವರದಿಗಳ ನಡುವೆ ಈ ಬೆಳೆವಣೀಗೆ ಹೆಚ್ಚಿನ ಮಹತ್ವವನ್ನು ಪಡೆದುಕೊಂಡಿದೆ.
ನಿನ್ನೆ ಚುನಾವಣಾ ಬಾಂಡ್‌ಗಳ ವಿವರಗಳನ್ನು ಬಹಿರಂಗಪಡಿಸಲು ಜೂನ್ 30 ರವರೆಗೆ ಸಮಯ ವಿಸ್ತರಿಸುವಂತೆ ಕೋರಿ ಎಸ್‌ಬಿಐ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಐವರು ನ್ಯಾಯಾಧೀಶರ ಸಂವಿಧಾನ ಪೀಠ ವಜಾಗೊಳಿಸಿತ್ತು. ಮಂಗಳವಾರ (ಮಾರ್ಚ್ 12) ಎಲ್ಲಾ ದಾನಿಗಳ ವಿವರಗಳನ್ನು ಬಹಿರಂಗಪಡಿಸುವಂತೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಗೆ(SBI) ಸುಪ್ರೀಂ ಕೋರ್ಟ್ ಸೂಚನೆ ನೀಡಿತ್ತು. ಜೊತೆಗೆ ಮಾರ್ಚ್ 15ರ ಸಂಜೆ 5 ಗಂಟೆಯೊಳಗೆ ಚುನಾವಣಾ ಬಾಂಡ್‌ಗಳ ಮಾಹಿತಿ ಸಂಗ್ರಹಿಸಿ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸುವಂತೆ ಭಾರತ ಚುನಾವಣಾ ಆಯೋಗಕ್ಕೆ ಸುಪ್ರೀಂ ಸೂಚನೆ ನೀಡಿತ್ತು.
ಈ ಹಿಂದೆ ಸುಪ್ರೀಂ ಕೋರ್ಟ್ ತನ್ನ ಫೆಬ್ರವರಿ 15 ರ ಆದೇಶದಲ್ಲಿ ಕೇಂದ್ರ ಸರ್ಕಾರದ ಚುನಾವಣಾ ಬಾಂಡ್ ಯೋಜನೆಯನ್ನು ರದ್ದುಪಡಿಸಿ, ಚುನಾವಣೆಯ ಸಮಯದಲ್ಲಿ ಅನಾಮಧೇಯ ರಾಜಕೀಯ ದೇಣಿಗೆಯನ್ನು ಅನುಮತಿಸುವುದು ಅಸಂವಿಧಾನಿಕ ಎಂದು ಹೇಳಿತ್ತು. ಈ ತೀರ್ಪು ಎನ್ಡಿಎ ಸರ್ಕಾರಕ್ಕೆ ಹಿನ್ನಡೆ ಎಂದು ವ್ಯಾಖ್ಯಾನಿಸಲಾಗಿತ್ತು.