ನವದೆಹಲಿ: ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರಿಗೆ ನೀಡಲಾದ ನಿರೀಕ್ಷಣಾ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ಬುಧವಾರ ನಿರಾಕರಿಸಿತು. ಇದೇ ವೇಳೆ, ಕರ್ನಾಟಕ ಹೈಕೋರ್ಟ್ ಆದೇಶ ಪ್ರಶ್ನಿಸಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯ ಕುರಿತು ಭವಾನಿ ರೇವಣ್ಣರಿಗೆ ನೋಟಿಸ್ ಜಾರಿ ಮಾಡಿತು.
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಕೇಳಿ ಬಂದಿರುವ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯ ಅಪಹರಣ ಆರೋಪ ಸಂಬಂಧ ಭವಾನಿ ರೇವಣ್ಣ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಈ ಪ್ರಕರಣದಲ್ಲಿ ಜೂನ್ 18ರಂದು ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ಈ ಆದೇಶ ಪ್ರಶ್ನಿಸಿ ಕರ್ನಾಟಕ ಸರ್ಕಾರ, ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದೆ.
ಈ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಉಜ್ಜಲ್ ಭುಯಾನ್ ಅವರನ್ನೊಳಗೊಂಡ ಪೀಠ ಇಂದು ನಡೆಸಿತು. ಕರ್ನಾಟಕ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡದ (ಎಸ್‌ಐಟಿ) ಪರ ಹಿರಿಯ ವಕೀಲ ಕಪಿಲ್ ಸಿಬಲ್ ಹಾಜರಾಗಿದ್ದರು.