ನವದೆಹಲಿ:ವಿರೋಧ ಪಕ್ಷದ ನಾಯಕ (ಎಲ್ಒಪಿ) ರಾಹುಲ್ ಗಾಂಧಿ ವಿರುದ್ಧ ದಾಖಲಾದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ವಿಚಾರಣಾ ನ್ಯಾಯಾಲಯದಲ್ಲಿನ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ ತಡೆಹಿಡಿದಿದೆ. ಬಿಜೆಪಿ ಸದಸ್ಯರು ಸುಳ್ಳುಗಾರರು ಮತ್ತು ಅವರು ಅಧಿಕಾರದ ಅಮಲಿನಲ್ಲಿದ್ದಾರೆ ಎಂಬ ಆರೋಪ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು 'ಕೊಲೆ ಆರೋಪಿ' ಎಂದು ಕರೆದಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಾಗಿದೆ.
ಜಾರ್ಖಂಡ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದ ರಾಹುಲ್:2018 ರಲ್ಲಿ ಬಿಜೆಪಿ ಕಾರ್ಯಕರ್ತ ನವೀನ್ ಝಾ ಎಂಬುವರು ತಮ್ಮ ವಿರುದ್ಧ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸುವಂತೆ ಕೋರಿ ರಾಹುಲ್ ಗಾಂಧಿ ಜಾರ್ಖಂಡ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಜಾರ್ಖಂಡ್ ಹೈಕೋರ್ಟ್ ಅವರ ಅರ್ಜಿಯನ್ನು ತಿರಸ್ಕರಿಸಿತ್ತು. ಜಾರ್ಖಂಡ್ ಹೈಕೋರ್ಟ್ನ ಈ ಆದೇಶ ಪ್ರಶ್ನಿಸಿ ರಾಹುಲ್ ಗಾಂಧಿ ಸುಪ್ರೀಂ ಕೋರ್ಟ್ಗೆ ಸಲ್ಲಿಸಿದ್ದ ವಿಶೇಷ ರಿಟ್ ಅರ್ಜಿಯನ್ನು ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರ ನ್ಯಾಯಪೀಠ ವಿಚಾರಣೆ ನಡೆಸಿತು.
ರಾಹುಲ್ ಪರ ಅಭಿಷೇಕ್ ಮನು ಸಿಂಘ್ವಿ ವಾದ ಮಂಡನೆ:ರಾಹುಲ್ ಗಾಂಧಿ ಪರ ಹಾಜರಾದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ಅನ್ಯಾಯಕ್ಕೊಳಗಾದ ವ್ಯಕ್ತಿ ಮಾತ್ರ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಬಹುದು ಮತ್ತು ವಿಷಯಕ್ಕೆ ಸಂಬಂಧಪಡದವರು ದೂರು ದಾಖಲಿಸಲು ಸಾಧ್ಯವಿಲ್ಲ ಎಂದು ಹಲವಾರು ಬಾರಿ ನ್ಯಾಯಾಲಯಗಳು ತೀರ್ಪು ನೀಡಿವೆ ಎಂದು ಹೇಳಿದರು.