ಚೆನ್ನೈ/ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ ಕುರಿತು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ನೀಡಿದ ವಿವಾದಾತ್ಮಕ ಹೇಳಿಕೆಗೆ ತೀವ್ರ ಖಂಡನೆ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಅವರು ಕ್ಷಮೆ ಕೋರಿದ್ದಾರೆ. ತಮ್ಮ ಮಾತುಗಳನ್ನು ಹಿಂಪಡೆದುಕೊಳ್ಳುವುದಾಗಿ ಹೇಳಿದ್ದಾರೆ.
ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದೇನು?: ಶೋಭಾ ಕರಂದ್ಲಾಜೆ ನಿನ್ನೆ ಮಾಧ್ಯಮಗಳೊಂದಿಗೆ ಮಾತನಾಡುತ್ತಾ, ತಮಿಳುನಾಡಿನಿಂದ ಬಂದು ಬೆಂಗಳೂರಿನಲ್ಲಿ ಬಾಂಬ್ ಹಾಕಿ ಹೋಗುತ್ತಾರೆ ಎಂದು ಗಂಭೀರ ಆರೋಪ ಮಾಡಿದ್ದರು. ''ವ್ಯಕ್ತಿಯೋರ್ವ ತಮಿಳುನಾಡಿನಿಂದ ಬಂದು ಬೆಂಗಳೂರಿನ ಕೆಫೆಯಲ್ಲಿ ಬಾಂಬ್ ಇಟ್ಟು ತೆರಳಿದ್ದಾನೆ. ಮತ್ತೋರ್ವ ದೆಹಲಿಯಿಂದ ಬಂದು ವಿಧಾನಸೌಧದಲ್ಲಿ ಪಾಕ್ ಪರವಾಗಿ ಘೋಷಣೆ ಕೂಗಿದ್ದಾನೆ. ಇನ್ನೋರ್ವ ಕೇರಳದಿಂದ ಬಂದು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ಮಾಡಿದ್ದಾನೆ" ಎಂದು ಕಿಡಿಕಾರಿದ್ದರು.
ಖಂಡನೆ:ಈ ಹೇಳಿಕೆಗೆ ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಸೇರಿದಂತೆ ಹಲವರು ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲೂ ಭಾರಿ ವಿರೋಧ ವ್ಯಕ್ತವಾಗಿದೆ. ''ಶಾಂತಿ, ಸೌಹಾರ್ದತೆ ಮತ್ತು ರಾಷ್ಟ್ರೀಯ ಐಕ್ಯತೆಗೆ ಧಕ್ಕೆ ಉಂಟು ಮಾಡಿರುವ ಶೋಭಾ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸುತ್ತೇನೆ. ಪ್ರಧಾನಿಯಿಂದ ಹಿಡಿದು ಸಚಿವರವರೆಗೆ ಬಿಜೆಪಿಯ ಎಲ್ಲರೂ ಈ ಕೊಳಕು ವಿಭಜನೆ ರಾಜಕಾರಣ ಮಾಡುವುದನ್ನು ನಿಲ್ಲಿಸಬೇಕು. ಚುನಾವಣೆ ಆಯೋಗ ಈ ದ್ವೇಷದ ಭಾಷಣವನ್ನು ಗಮನಿಸಬೇಕು ಮತ್ತು ತಕ್ಷಣವೇ ಕಠಿಣ ಕ್ರಮವನ್ನು ಪ್ರಾರಂಭಿಸಬೇಕು'' ಎಂದು ಸ್ಟಾಲಿನ್ ಆಗ್ರಹಿಸಿದ್ದಾರೆ. ಜೊತೆಗೆ, ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸಚಿವರ ಪರವಾಗಿ ಕ್ಷಮೆ ಯಾಚಿಸಬೇಕು ಎಂದು ಕೆಲವು ನೆಟ್ಟಿಗರು ಒತ್ತಾಯಿಸಿದ್ದಾರೆ.