ಕರ್ನಾಟಕ

karnataka

ETV Bharat / bharat

ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ 2 ಕಡೆ ಗುಂಡಿನ ಚಕಮಕಿ: ಯೋಧ ಹುತಾತ್ಮ, ನಾಲ್ವರು ಉಗ್ರರ ಬೇಟೆ - Kulgam encounter

ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಎರಡು ಪ್ರತ್ಯೇಕ ಸ್ಥಳದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ. ಇದರಲ್ಲಿ ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ಇದೇ ವೇಳೆ, ನಾಲ್ವರು ಉಗ್ರರನ್ನು ಭದ್ರತಾ ಪಡೆಗಳು ಬೇಟೆಯಾಡಿವೆ.

terrorists attack
ಸಾಂದರ್ಭಿಕ ಚಿತ್ರ (ETV Bharat)

By ETV Bharat Karnataka Team

Published : Jul 6, 2024, 3:41 PM IST

Updated : Jul 6, 2024, 10:56 PM IST

ಶ್ರೀನಗರ (ಜಮ್ಮು ಮತ್ತು ಕಾಶ್ಮೀರ): ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಗುಂಡಿನ ಸದ್ದು ಕೇಳಿ ಬಂದಿದೆ. ಕುಲ್ಗಾಮ್ ಜಿಲ್ಲೆಯಲ್ಲಿ ಇಂದು ಎರಡು ಕಡೆ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಕಾಳಗ ನಡೆದಿದೆ. ಇದರಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದರೆ, ನಾಲ್ವರು ಉಗ್ರರನ್ನು ಸದೆಬಡಿಯುವಲ್ಲಿ ಭದ್ರತಾ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.

ಕುಲ್ಗಾಮ್ ಜಿಲ್ಲೆಯ ಮೊಡೆರ್ಗಾಮ್ ಗ್ರಾಮದಲ್ಲಿ ಮೊದಲಿಗೆ ಅಪರಿಚಿತ ಭಯೋತ್ಪಾದಕರ ಚಲನವಲನಗಳ ಬಗ್ಗೆ ಭದ್ರತಾ ಸಿಬ್ಬಂದಿಗೆ ಮಾಹಿತಿ ಲಭ್ಯವಾಗಿದೆ. ಅಂತೆಯೇ, ಜಮ್ಮು ಮತ್ತು ಕಾಶ್ಮೀರ ಪೊಲೀಸರು, ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಮತ್ತು ಸೇನೆಯು ಜಂಟಿ ಕಾರ್ಯಾಚರಣೆ ಆರಂಭಿಸಿವೆ. ಇಡೀ ಪ್ರದೇಶವನ್ನು ಭದ್ರತಾ ಪಡೆಗಳು ಸುತ್ತುವರೆದಿದ್ದವು. ಈ ಕಾರ್ಯಾಚರಣೆ ವೇಳೆ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಓರ್ವ ಸೇನಾ ಸಿಬ್ಬಂದಿ ಗಾಯಗೊಂಡಿದ್ದರು. ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ, ಗಂಭೀರ ಸ್ಥಿತಿಯಲ್ಲಿದ್ದ ಯೋಧ ಕೊನೆಯುಸಿರೆಳೆದಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮತ್ತೊಂದೆಡೆ, ಇದೇ ಕುಲ್ಗಾಮ್ ಜಿಲ್ಲೆಯ ಫ್ರಿಸಲ್ ಚಿನ್ನಿಗಮ್ ಪ್ರದೇಶದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ಮಧ್ಯೆ ಗುಂಡಿನ ಚಕಮಕಿ ಜರುಗಿದೆ. ಈ ಎನ್‌ಕೌಂಟರ್‌ನಲ್ಲಿ ನಾಲ್ವರು ಭಯೋತ್ಪಾದಕರ ಬೇಟೆಯಾಡಲಾಗಿದೆ. ಭಾರೀ ಗುಂಡಿನ ದಾಳಿಯ ಹಿನ್ನೆಲೆಯಲ್ಲಿ ಶವಗಳನ್ನು ಹೊರತೆಗೆಯಲು ಸಾಧ್ಯವಾಗಲಿಲ್ಲ. ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ ಎಂದು ಕಾಶ್ಮೀರ ಐಜಿಪಿ ವಿ.ಕೆ.ಬರ್ಡಿ ಶನಿವಾರ ಸಂಜೆ ತಿಳಿಸಿದ್ಧಾರೆ.

ಜೂನ್ 26 ರಂದು ದೋಡಾ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಆರು ಗಂಟೆಗಳಿಗೂ ಹೆಚ್ಚು ಕಾಲ ಗುಂಡಿನ ಚಕಮಕಿ ನಡೆದಿತ್ತು. ಇದರಲ್ಲಿ ಪಾಕಿಸ್ತಾನ ಮೂಲದ ಜೈಶ್-ಎ-ಮೊಹಮ್ಮದ್ (ಜೆಇಎಂ) ಸಂಘಟನೆಗೆ ಸೇರಿದ ಶಂಕಿತ ಮೂವರು ಭಯೋತ್ಪಾದಕರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿದ್ದವು. ಈ ಗುಂಡಿನ ಚಕಮಕಿಯಲ್ಲಿ ಓರ್ವ ಪೊಲೀಸ್ ಸಿಬ್ಬಂದಿ ಸಹ ಗಾಯಗೊಂಡಿದ್ದರು.

ಇದಕ್ಕೂ ಮುನ್ನ ಜೂನ್ 11 ಮತ್ತು 12ರಂದು ಭಯೋತ್ಪಾದಕರು ಅವಳಿ ದಾಳಿಗಳನ್ನು ನಡೆಸಿದ್ದರು. ನಂತರ ಪೊಲೀಸ್, ಸೇನೆ ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಜಂಟಿ ತಂಡವು ಶೋಧ ಕಾರ್ಯಾಚರಣೆ ಆರಂಭಿಸಿತ್ತು. ಈ ವೇಳೆ, ಗುಂಡಿನ ಚಕಮಕಿ ನಡೆದಿತ್ತು. ಜೂನ್ 11ರಂದು ನಡೆದ ದಾಳಿಯಲ್ಲಿ ಆರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದರು. ಮರು ದಿನವೇ ನಡೆದ ಭಯೋತ್ಪಾದಕರೊಂದಿಗಿನ ಗುಂಡಿನ ಚಕಮಕಿಯಲ್ಲಿ ಪೊಲೀಸ್ ಗಾಯಗೊಂಡಿದ್ದರು.

ಇದನ್ನೂ ಓದಿ:ಜಮ್ಮು- ಕಾಶ್ಮೀರದಲ್ಲಿ ಭಾರೀ ಮಳೆ: ಅಮರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ

Last Updated : Jul 6, 2024, 10:56 PM IST

ABOUT THE AUTHOR

...view details