ನವದೆಹಲಿ:ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ 6 ತಿಂಗಳಿನಿಂದ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಆಮ್ ಆದ್ಮಿ ಪಕ್ಷದ ಸಂಸದ ಸಂಜಯ್ ಸಿಂಗ್ ಅವರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತು. ಇದಕ್ಕೆ ಜಾರಿ ನಿರ್ದೇಶನಾಲಯ (ಇಡಿ) ಯಾವುದೇ ತಕರಾರು ಸಲ್ಲಿಸಿಲ್ಲ. ಇದೇ ಪ್ರಕರಣದಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಬಂಧನವಾದ ಕೆಲವೇ ದಿನಗಳಲ್ಲಿ ಸಂಜಯ್ ಸಿಂಗ್ ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ಜಾರಿ ನಿರ್ದೇಶನಾಲಯವನ್ನು ಪ್ರತಿನಿಧಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ.ರಾಜು ಅವರು, ಸಿಂಗ್ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಿದರೆ ಇಡಿಗೆ ಯಾವುದೇ ಅಭ್ಯಂತರವಿಲ್ಲ ಎಂದು ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ, ದೀಪಂಕರ್ ದತ್ತಾ ಮತ್ತು ಪಿ.ಬಿ.ವರಾಲೆ ಅವರಿದ್ದ ತ್ರಿಸದಸ್ಯ ಪೀಠದ ಮುಂದೆ ತಿಳಿಸಿದರು.
ಇದೇ ವೇಳೆ ರಾಜಕೀಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬಹುದು ಎಂದು ಕೋರ್ಟ್ ವೇಳೆ ಸ್ಪಷ್ಟಪಡಿಸಿದೆ. ಪ್ರಕರಣವು ಇನ್ನೂ ವಿಚಾರಣೆಯ ಹಂತದಲ್ಲಿರುವ ಕಾರಣ, ಅವರ ಅನರ್ಹತೆಯ ಬಗ್ಗೆ ಯಾವುದೇ ನಿರ್ಧಾರಕ್ಕೆ ಬರಲಾಗಲ್ಲ ಎಂದಿದೆ.