ನವದೆಹಲಿ: ಕೇಂದ್ರದಿಂದ ಬರ ಪರಿಹಾರ ಬಿಡುಗಡೆ ಕೋರಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿ, ಎರಡು ವಾರಗಳಲ್ಲಿ ಪ್ರತಿಕ್ರಿಯಿಸುವಂತೆ ಸೂಚಿಸಿದೆ. ಇದರ ಜತೆಗೆ ಕರ್ನಾಟಕದ ಅರ್ಜಿ ವಿಚಾರಣೆ ನಡೆಸುತ್ತಿರುವ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಲು ಪೈಪೋಟಿ ನಡೆಸದಂತೆ ಕೇಂದ್ರ ಮತ್ತು ವಿವಿಧ ರಾಜ್ಯ ಸರ್ಕಾರಗಳಿಗೂ ತಿಳಿಸಿದೆ.
ಕೇಂದ್ರದ ಪರ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ರಾಜ್ಯ ಸರ್ಕಾರವು ಈ ವಿಚಾರವಾಗಿ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ. ಒಂದು ಹಂತದಲ್ಲಿ ಸಮಸ್ಯೆಯನ್ನು ಪರಿಹರಿಸಬಹುದಿತ್ತು ಎಂದು ಹೇಳಿದರು. "ಈ ಮಾತುಕತೆ ಸಮಸ್ಯೆಯನ್ನು ಪರಿಹರಿಸುತ್ತವೆಯೇ?" ಎಂದು ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ಸಂದೀಪ್ ಮೆಹ್ತಾ ಅವರನ್ನೊಳಗೊಂಡ ನ್ಯಾಯಪೀಠ ಪ್ರಶ್ನಿಸಿತು. ವಿವಿಧ ರಾಜ್ಯ ಸರ್ಕಾರಗಳು ನ್ಯಾಯಾಲಯದ ಮೊರೆ ಹೋಗುವುದನ್ನು ನ್ಯಾಯಾಲಯ ಗಮನಿಸುತ್ತಿದೆ. ಎರಡು ವಾರಗಳಲ್ಲಿ ಈ ಸಂಬಂಧ ಪ್ರತಿಕ್ರಿಯೆ ನೀಡಬೇಕು ಎಂದು ನ್ಯಾಯಪೀಠ ಮೆಹ್ತಾ ಅವರಿಗೆ ಸೂಚಿಸಿತು.
ಕರ್ನಾಟಕ ಸರ್ಕಾರದ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್, "ಕಾನೂನಿನ ಪ್ರಕಾರ ಈ ವಿಷಯವನ್ನು ಒಂದು ತಿಂಗಳೊಳಗೆ ಇತ್ಯರ್ಥಪಡಿಸಬೇಕಾಗಿತ್ತು. ಆದರೆ ಅದು 2023ರ ಡಿಸೆಂಬರ್ನಲ್ಲಿ ಕೊನೆಗೊಂಡಿತು. ಕಾನೂನು ಇಲ್ಲಿದೆ, ಈ ವೇಳೆ ನಾವು ವಿವಾದಕ್ಕೆ ಇಳಿಯಬಾರದು" ಎಂದು ಹೇಳಿದರು.
ಸಂಕ್ಷಿಪ್ತ ವಿಚಾರಣೆ ನಡೆಸಿದ ನ್ಯಾಯಪೀಠ, ಕರ್ನಾಟಕ ಸರ್ಕಾರದ ಮನವಿಯ ಮೇರೆಗೆ ಕೇಂದ್ರಕ್ಕೆ ನೋಟಿಸ್ ನೀಡಲು ನಿರ್ಧರಿಸಿತು. ಆದರೆ ತುಷಾರ್ ಮೆಹ್ತಾ, ಈ ವಿಷಯದಲ್ಲಿ ನೋಟಿಸ್ ನೀಡದಂತೆ ನ್ಯಾಯಪೀಠಕ್ಕೆ ಮನವಿ ಮಾಡಿದರು. ಕೇಂದ್ರವನ್ನು ಪ್ರತಿನಿಧಿಸುವ ಅಟಾರ್ನಿ ಜನರಲ್ ಆರ್ ವೆಂಕಟರಮಣಿ, ನಾವು ಹಿಂತಿರುಗಿ ಬಂದು ಈ ಕುರಿತು ಪ್ರತಿಕ್ರಿಯೆ ನೀಡುತ್ತೇವೆ ಎಂದು ಪೀಠಕ್ಕೆ ತಿಳಿಸಿದರು.