ನವದೆಹಲಿ: ಪದ್ಮ ಪ್ರಶಸ್ತಿ 2025ಕ್ಕಾಗಿ ಆನ್‌ಲೈನ್ ನಾಮ ನಿರ್ದೇಶನ/ಶಿಫಾರಸು ಪ್ರಕ್ರಿಯೆ ಬುಧವಾರದಿಂದ ಪ್ರಾರಂಭವಾಗಿದೆ. ಸೆಪ್ಟೆಂಬರ್ 15 ಕೊನೆಯ ದಿನಾಂಕವಾಗಿದೆ. ಪದ್ಮ ವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ, ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಾಗಿವೆ. 1954 ರಲ್ಲಿ ಈ ಪ್ತಶಸ್ತಿಗಳನ್ನು ನೀಡಲು ಆರಂಭಿಸಲಾಗಿದ್ದು, ಪ್ರತಿ ವರ್ಷ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಘೋಷಿಸಲಾಗುತ್ತದೆ. 'ವಿಶಿಷ್ಟ ಕೆಲಸವನ್ನು' ಗುರುತಿಸುವುದು ಪದ್ಮ ಪ್ರಶಸ್ತಿಗಳ ಆಶಯವಾಗಿದೆ. ಕಲೆ, ಸಾಹಿತ್ಯ, ಶಿಕ್ಷಣ, ಕ್ರೀಡೆ, ವೈದ್ಯಕೀಯ, ಸಮಾಜ ಕಾರ್ಯ, ವಿಜ್ಞಾನ ಮತ್ತು ಎಂಜಿನಿಯರಿಂಗ್, ಸಾರ್ವಜನಿಕ ವ್ಯವಹಾರಗಳು, ನಾಗರಿಕ ಸೇವೆಗಳಂತಹ ಎಲ್ಲ ಕ್ಷೇತ್ರಗಳಲ್ಲಿನ ವಿಶಿಷ್ಟ ಮತ್ತು ಅಸಾಧಾರಣ ಸಾಧನೆಗಳು ಹಾಗೂ ಸೇವೆಗಳಿಗಾಗಿ ಈ ಪ್ರಶಸ್ತಿ ನೀಡಲಾಗುತ್ತದೆ.
ಸಮುದಾಯ, ಉದ್ಯೋಗ, ಸ್ಥಾನ ಅಥವಾ ಲಿಂಗದ ಭೇದವಿಲ್ಲದ ಎಲ್ಲ ವ್ಯಕ್ತಿಗಳು ಈ ಪ್ರಶಸ್ತಿಗಳಿಗೆ ಅರ್ಹರಾಗಿರುತ್ತಾರೆ. ಆದಾಗ್ಯೂ, ವೈದ್ಯರು ಮತ್ತು ವಿಜ್ಞಾನಿಗಳನ್ನು ಹೊರತುಪಡಿಸಿ ಪಿಎಸ್ಯುಗಳಲ್ಲಿ ಕೆಲಸ ಮಾಡುವವರು ಸೇರಿದಂತೆ ಸರ್ಕಾರಿ ನೌಕರರು ಪದ್ಮ ಪ್ರಶಸ್ತಿಗಳಿಗೆ ಅರ್ಹರಲ್ಲ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಪದ್ಮ ಪ್ರಶಸ್ತಿಗಳನ್ನು 'ಜನರ ಪದ್ಮ'ವನ್ನಾಗಿ ಮಾಡಲು ಬದ್ಧವಾಗಿದೆ ಎಂದು ಸಮರ್ಥಿಸಿಕೊಂಡಿದೆ.