ಪೆದ್ದಪಲ್ಲಿ (ಆಂಧ್ರಪ್ರದೇಶ):ಕಲುಷಿತ ನೀರು ಮತ್ತು ಆಹಾರ ಸೇವನೆಯಿಂದ ಒಡಿಶಾ ಮೂಲದ ಮೂವರು ವಲಸೆ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಪೆದ್ದಪಲ್ಲಿ ಜಿಲ್ಲೆಯಲ್ಲಿ ನಡೆದಿದೆ. ಇನ್ನೂ ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ.
ಎಂಎಸ್‌ಆರ್ ಇಟ್ಟಿಗೆ ಭಟ್ಟಿಯಲ್ಲಿ ಕೆಲಸ ಮಾಡುತ್ತಿದ್ದ ಒಟ್ಟು 19 ಕಾರ್ಮಿಕರು ಕಲುಷಿತ ನೀರು, ಆಹಾರ ಸೇವಿಸಿ ಅಸ್ವಸ್ಥಗೊಂಡಿದ್ದಾರೆ. ಪರಿಸ್ಥಿತಿಯ ಗಂಭೀರತೆ ಅರಿತು, ಅವರನ್ನು ಕರೀಂನಗರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ, ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ. ಉಳಿದ 16 ಕಾರ್ಮಿಕರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರಲ್ಲಿ ನಾಲ್ವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಇಟ್ಟಿಗೆ ಭಟ್ಟಿ ಮಾಲೀಕರ ನಿರ್ಲಕ್ಷ್ಯದಿಂದ ಕಾರ್ಮಿಕರು ಅನಾರೋಗ್ಯಕ್ಕೆ ತುತ್ತಾಗಿದ್ದಾರೆ. ಮಾಲೀಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಇತರ ಕಾರ್ಮಿಕರು ಆಗ್ರಹಿಸಿದ್ದಾರೆ. ಈ ಘಟನೆಯ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುತ್ತಿದ್ದಾರೆ.