ಲಖನೌ, ಉತ್ತರಪ್ರದೇಶ: ರಾಜ್ಯದಲ್ಲಿ ಮಾಫಿಯಾಗಳು ಮತ್ತು ಅಪರಾಧಿಗಳ ವಿರುದ್ಧ ಕ್ರಮ ತೀವ್ರಗೊಳಿಸಲಾಗುವುದು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಖಡಕ್ ಸಂದೇಶ ರವಾನಿಸಿದ್ದಾರೆ. ಪ್ರತಿಯೊಬ್ಬ ಬಡ, ಶೋಷಿತ, ತುಳಿತಕ್ಕೊಳಗಾದ ಮತ್ತು ವಂಚಿತ ವ್ಯಕ್ತಿಯ ಹಿತಾಸಕ್ತಿಗಳನ್ನು ಕಾಪಾಡುವುದು ನಮ್ಮ ಜವಾಬ್ದಾರಿಯಾಗಿದೆ. ಭೂಮಾಫಿಯಾ ಅಥವಾ ಇತರ ಯಾವುದೇ ಮಾಫಿಯಾ ಆಗಿರಲಿ, ಕ್ರಮ ಕೈಗೊಳ್ಳಲಾಗುವುದು ಎಂದು ಗುರುವಾರ ತಡರಾತ್ರಿ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಹೇಳಿದರು.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ 2024ರ ಲೋಕಸಭೆ ಚುನಾವಣೆಯ ನಂತರ ಮೊದಲ ಬಾರಿಗೆ ಕಾನೂನು ಮತ್ತು ಸುವ್ಯವಸ್ಥೆ ಪರಿಶೀಲನಾ ಸಭೆ ನಡೆಸಿದರು. ಈ ವೇಳೆ ಸಂವಹನ, ಸಮನ್ವಯ ಮತ್ತು ಜನರ ವಿಶ್ವಾಸ ಗಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜನತಾ ದರ್ಶನ ಕಾರ್ಯಕ್ರಮಗಳನ್ನು ಜಿಲ್ಲೆ, ವಲಯ ಮಟ್ಟದಲ್ಲಿ ತ್ವರಿತವಾಗಿ ಪ್ರಾರಂಭಿಸಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದರು. ಭ್ರಷ್ಟಾಚಾರದ ವಿರುದ್ಧ ಶೂನ್ಯ-ಸಹಿಷ್ಣು ನೀತಿಗೆ ಅನುಗುಣವಾಗಿ, ರಾಜ್ಯ ಸಚಿವಾಲಯದಿಂದ ಬ್ಲಾಕ್ ಮಟ್ಟದವರೆಗೆ ಅನೈತಿಕ ವಹಿವಾಟುಗಳನ್ನು ಗುರಿಯಾಗಿಟ್ಟುಕೊಂಡು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕು ಹಾಗೂ ಸರ್ಕಾರ ಇದಕ್ಕೆ ಬದ್ಧವಾಗಿದೆ ಎಂದು ಅವರು ಪ್ರತಿಪಾದಿಸಿದರು.
ಎಲ್ಲ ಜಿಲ್ಲೆಗಳ ಪೊಲೀಸ್ ಆಯುಕ್ತರು, ವಿಭಾಗೀಯ ಆಯುಕ್ತರು, ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಕಾನೂನು ಮತ್ತು ಸುವ್ಯವಸ್ಥೆಯನ್ನು ಸಿಎಂ ಯೋಗಿ ಆದಿತ್ಯನಾಥ್ ಪರಿಶೀಲಿಸಿದರು. ಇನ್ನು ವಿಐಪಿ ಸಂಸ್ಕೃತಿಯನ್ನು ಪ್ರಚಾರ ಮಾಡಬಾರದು, ಸರಕಾರಿ ಹಾಗೂ ಖಾಸಗಿ ವಾಹನಗಳಲ್ಲಿ ಹೂಟರ್ ಹಾಗೂ ಹಾರ್ನ್‌ಗಳನ್ನು ಬಳಸದಂತೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಹಬ್ಬಗಳಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದರು. ಹೊಸ ಸಂಪ್ರದಾಯಗಳಿಗೆ ಯಾವುದೇ ಪ್ರೋತ್ಸಾಹ ನೀಡಬಾರದು ಎಂದು ಅವರು ಖಡಕ್ ಸಂದೇಶ ರವಾನಿಸಿದರು.