ಲಖನೌ (ಉತ್ತರಪ್ರದೇಶ):ದೆಹಲಿ ಗದ್ದುಗೆಗೆ ಬುನಾದಿ ಹಾಕಿಕೊಡುವ ರಾಜ್ಯವಾದ ಉತ್ತರಪ್ರದೇಶದಲ್ಲಿ ಬಿಜೆಪಿಗೆ ಭಾರೀ ಹಿನ್ನಡೆಯಾಗಿದೆ. ಇದು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಕಂಗೆಡೆಸಿದ್ದಲ್ಲದೇ, ತೀವ್ರ ಅಸಮಾಧಾನಕ್ಕೂ ಕಾರಣವಾಗಿದೆ. ಸರ್ಕಾರದ ಮಟ್ಟದಲ್ಲಿ ಆದ ಲೋಪಗಳ ಬಗ್ಗೆ ಅಧಿಕಾರಿಗಳ ಚಳಿ ಬಿಡಿಸಲು ಹಿರಿಯ ಅಧಿಕಾರಿಗಳ ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ. ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ವಹಿಸಿದವರಿಗೆ ಶಿಕ್ಷೆ ವಿಧಿಸಲೂ ಸಜ್ಜಾಗಿದ್ದಾರೆ ಎಂದು ತಿಳಿದುಬಂದಿದೆ.
ಎಲ್ಲಾ ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳನ್ನು ಕರೆಸಿ ಇಲಾಖಾ ಪರಿಶೀಲನೆ ನಡೆಸಲಿದ್ದಾರೆ. ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು ಮತ್ತು ಪ್ರಧಾನ ಕಾರ್ಯದರ್ಶಿಗಳನ್ನೂ ಸಭೆಗೆ ಕರೆದಿದ್ದಾರೆ. ಲೋಕಸಭಾ ಚುನಾವಣಾ ಫಲಿತಾಂಶದ ನಂತರ ಮೊದಲ ಪ್ರಮುಖ ಸಭೆ ಇದಾಗಿದೆ. ಇತ್ತ ಬುಲಂದ್‌ಶಹರ್‌ನಲ್ಲಿ ಆಹಾರ ಧಾನ್ಯ ವಿತರಿಸುವಲ್ಲಿ ನಿರ್ಲಕ್ಷ್ಯ ತೋರಿದ ಅಧಿಕಾರಿಗಳನ್ನು ಸರ್ಕಾರ ಅಮಾನತುಗೊಳಿಸಿ ಆದೇಶಿಸಿದೆ.
ಸಿಟ್ಟಿನಲ್ಲಿರುವ ಸಿಎಂ ಯೋಗಿ:ರಾಜ್ಯದಲ್ಲಿ ಅಭಿವೃದ್ಧಿ ಪರ್ವವೇ ತಂದಿದ್ದರೂ, ಪಕ್ಷಕ್ಕೆ ತೀವ್ರ ಆಘಾತ ನೀಡುವ ಫಲಿತಾಂಶ ಬಂದಿರುವುದು ಸಿಎಂ ಯೋಗಿ ಅವರ ಕೋಪಕ್ಕೆ ಕಾರಣವಾಗಿದೆ. ಸರ್ಕಾರದ ಯೋಜನೆಗಳನ್ನು ಜನರಿಗೆ ಮುಟ್ಟಿಸುವಲ್ಲಿ ಅಧಿಕಾರಿಗಳು ಎಡವಿದ್ದಾರೆ ಎಂಬುದು ಅವರ ಅಸಮಾಧಾನಕ್ಕೆ ಕಾರಣವಾಗಿದೆ. ಹೀಗಾಗಿ ಅಧಿಕಾರಿಗಳನ್ನು ಹದ್ದುಬಸ್ತಿನಲ್ಲಿಡಲು ಸಭೆಯಲ್ಲಿ ವಿಭಿನ್ನವಾಗಿ ವರ್ತಿಸಲಿದ್ದಾರೆ ಎಂದು ಹೇಳಲಾಗಿದೆ.
ಇನ್ನು, ಬಿಜೆಪಿ ಕಾರ್ಯಕರ್ತರ ಅಹವಾಲುಗಳಿಗೆ ಅಧಿಕಾರಿಗಳು ಗಮನ ಹರಿಸುತ್ತಿಲ್ಲ ಎಂಬ ಮಾತುಗಳು ಸರ್ಕಾರದ ಮಟ್ಟದಲ್ಲಿ ನಿರಂತರವಾಗಿ ಕೇಳಿ ಬರುತ್ತಿವೆ. ಪಕ್ಷದ ಕಾರ್ಯಕರ್ತರು ಕೂಡ ಅಧಿಕಾರಿಗಳ ಅವ್ಯವಹಾರದ ಬಗ್ಗೆ ಸರ್ಕಾರಕ್ಕೆ ಈಗಾಗಲೇ ದೂರುಗಳನ್ನು ಸಲ್ಲಿಸಿದ್ದಾರೆ.