ಜೈಪುರ(ರಾಜಸ್ಥಾನ):ಬಾಂಗ್ಲಾದೇಶದಲ್ಲಿ ಹಿಂದೂಗಳು ಮತ್ತು ಇತರ ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಹಿರಿಯ ಕಾಂಗ್ರೆಸ್ ನಾಯಕ ಅಶೋಕ್ ಗೆಹ್ಲೋಟ್, ಈ ವಿಷಯದಲ್ಲಿ ಕೇಂದ್ರ ಸರ್ಕಾರವು ಢಾಕಾ ಮೇಲೆ ಒತ್ತಡ ಹೇರುತ್ತಿಲ್ಲ ಎಂದು ಆರೋಪಿಸಿದ್ದಾರೆ. ಶೇಖ್ ಹಸೀನಾ ಅವರನ್ನು ಬಾಂಗ್ಲಾದೇಶದಿಂದ ಹೊರಹಾಕಿದ ನಂತರ ಅಲ್ಲಿ ಅಲ್ಪಸಂಖ್ಯಾತರ ವಿರುದ್ಧ ನಡೆಯುತ್ತಿರುವ 'ದೌರ್ಜನ್ಯಗಳನ್ನು' ತಡೆಯಲು ರಾಜತಾಂತ್ರಿಕ ಕ್ರಮಗಳನ್ನು ತೆಗೆದುಕೊಳ್ಳುವಂತೆ ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಗೆಹ್ಲೋಟ್ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಈ ವಿಚಾರದಲ್ಲಿ ಕೇಂದ್ರ ಸರ್ಕಾರದ ಮೌನವನ್ನು ಅವರು ಪ್ರಶ್ನಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, "ಬಾಂಗ್ಲಾದೇಶದಲ್ಲಿ ಕ್ಷಿಪ್ರ ದಂಗೆಯ ನಂತರ ನಡೆದ ಹಿಂಸಾಚಾರದಲ್ಲಿ 23 ಹಿಂದೂಗಳು ಸಾವನ್ನಪ್ಪಿದ್ದಾರೆ ಮತ್ತು 152 ದೇವಾಲಯಗಳನ್ನು ಧ್ವಂಸಗೊಳಿಸಲಾಗಿದೆ. ಇಷ್ಟೆಲ್ಲ ಆಗುತ್ತಿದ್ದರೂ ಭಾರತ ಸರ್ಕಾರವು ಈ ಬಗ್ಗೆ ಯಾವುದೇ ಪ್ರಮುಖ ಜಾಗತಿಕ ವೇದಿಕೆಗಳಲ್ಲಿ ಹೇಳಿಕೆ ನೀಡದಿರುವುದು ಅಥವಾ ಬಾಂಗ್ಲಾದೇಶದ ಮೇಲೆ ಒತ್ತಡ ಹೇರದೆ ಇರುವುದು ದುರದೃಷ್ಟಕರ. ಬಾಂಗ್ಲಾದೇಶದಲ್ಲಿ ಹಿಂದೂಗಳು ಮತ್ತು ಇತರ ಅಲ್ಪಸಂಖ್ಯಾತರ ವಿರುದ್ಧ ನಡೆಯುತ್ತಿರುವ ದೌರ್ಜನ್ಯಗಳನ್ನು ತಡೆಯಲು ಭಾರತ ಸರ್ಕಾರ ರಾಜತಾಂತ್ರಿಕ ಕ್ರಮಗಳನ್ನು ತೆಗೆದುಕೊಳ್ಳಬೇಕು" ಎಂದು ಅವರು ಹೇಳಿದರು.
ಆಗಸ್ಟ್ 5 ರಂದು, ವಿದ್ಯಾರ್ಥಿ ನೇತೃತ್ವದ ಆಂದೋಲನದ ಭಾಗವಾಗಿ ಹಲವಾರು ವಾರಗಳ ಕಾಲ ನಡೆದ ಪ್ರತಿಭಟನೆ ಮತ್ತು ಘರ್ಷಣೆಗಳ ನಂತರ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರನ್ನು ಪದಚ್ಯುತಗೊಳಿಸಲಾಯಿತು. 76 ವರ್ಷದ ಹಸೀನಾ ಆಗಸ್ಟ್ 5 ರಂದು ಭಾರತಕ್ಕೆ ಪಲಾಯನ ಮಾಡಿದರು ಮತ್ತು ನೊಬೆಲ್ ಪ್ರಶಸ್ತಿ ವಿಜೇತ ಮುಹಮ್ಮದ್ ಯೂನುಸ್ ನೇತೃತ್ವದಲ್ಲಿ ಮಧ್ಯಂತರ ಸರ್ಕಾರವನ್ನು ರಚಿಸಲಾಯಿತು. ಅಂದಿನಿಂದ, ಅಲ್ಪಸಂಖ್ಯಾತರು, ವಿಶೇಷವಾಗಿ ಹಿಂದೂಗಳು ಮತ್ತು ಅವರ ಪೂಜಾ ಸ್ಥಳಗಳ ಮೇಲೆ ಹಲವಾರು ದಾಳಿಗಳು ನಡೆಯುತ್ತಿರುವ ಬಗ್ಗೆ ವರದಿಗಳು ಬಂದಿವೆ.