ಬೆಂಗಳೂರು:ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್, ಎಂಜಿನಿಯರಿಂಗ್ ಸೇರಿದಂತೆ ಎಲ್ಲ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ಸಂಬಂಧಿಸಿದಂತೆ ಮೊದಲ ಸುತ್ತಿನ ಅಣಕು ಸೀಟು ಹಂಚಿಕೆ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇಂದು ಸಂಜೆ ಪ್ರಕಟಿಸಿದೆ.
ಕೆಇಎ ವೆಬ್ಸೈಟ್ನಲ್ಲಿ ಅಣಕು ಫಲಿತಾಂಶ ಲಭ್ಯವಿದೆ. ಅದನ್ನು ನೋಡಿದ ನಂತರ ಅಗತ್ಯವಿದ್ದರೆ ಆಗಸ್ಟ್ 27ರ ಬೆಳಗ್ಗೆ 11 ಗಂಟೆ ವರೆಗೆ ಅಭ್ಯರ್ಥಿಗಳು ತಮ್ಮ ಇಚ್ಛೆಯನುಸಾರ ಕಾಲೇಜು/ಕೋರ್ಸ್ಗಳನ್ನು ಬದಲಿಸಿಕೊಳ್ಳಬಹುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ನಿಗದಿಯಂತೆ ಮೊದಲ ಸುತ್ತಿನ ನೈಜ ಸೀಟು ಹಂಚಿಕೆ ಫಲಿತಾಂಶವನ್ನು ಸೆ.1ರಂದು ಪ್ರಕಟಿಸಲಾಗುವುದು. ಆಗಸ್ಟ್ 22ರ ಸಂಜೆ 5 ಗಂಟೆವರೆಗೆ ಆದ್ಯತಾ ಕ್ರಮದಲ್ಲಿ ದಾಖಲಿಸಿರುವ ಇಚ್ಛೆ/ಆಯ್ಕೆಗಳನ್ನು ಪರಿಗಣಿಸಿ, ಮೆರಿಟ್ ಮತ್ತು ರೋಸ್ಟರ್ ಪದ್ಧತಿ ಅನುಸಾರ ಅಣಕು ಸೀಟು ಹಂಚಿಕೆ ಮಾಡಲಾಗಿದೆ ಎಂದು ನಿರ್ದೇಶಕರು ವಿವರಿಸಿದ್ದಾರೆ.
ಆರ್ಕಿಟೆಕ್ಚರ್, ಯೋಗ ಮತ್ತು ನ್ಯಾಚುರೋಪತಿ, ಕೃಷಿ ವಿಜ್ಞಾನ, ವೆಟರಿನರಿ, ಬಿಎಸ್‌ಸಿ (ನರ್ಸಿಂಗ್), ಬಿ-ಫಾರ್ಮ, ಫಾರ್ಮ್-ಡಿ ಇತ್ಯಾದಿ ಕೋರ್ಸುಗಳ ಸೀಟು ಹಂಚಿಕೆಯನ್ನು ಮಾಡಲಾಗಿದೆ. ಇಲ್ಲಿಯವರೆಗೆ ಇಚ್ಛೆ/ಆಯ್ಕೆಗಳನ್ನು ದಾಖಲಿಸದೇ ಇರುವ ಅರ್ಹ ಅಭ್ಯರ್ಥಿಗಳು ಇಷ್ಟವಿದ್ದಲ್ಲಿ ಆಗಸ್ಟ್ 27ರ ಬೆಳಗ್ಗೆ 11 ಗಂಟೆಯೊಳಗೆ ಮೊದಲನೇ ಸುತ್ತಿನ ಸೀಟು ಹಂಚಿಕೆಗೆ ಕಾಲೇಜು ಮತ್ತು ಕೋರ್ಸ್ಗಳ ಆಯ್ಕೆಗಾಗಿ ಆದ್ಯತಾ ಕ್ರಮದಲ್ಲಿ ದಾಖಲಿಸಬಹುದು ಎಂದು ಮಾಹಿತಿ ನೀಡಿದ್ದಾರೆ.
ಅಭ್ಯರ್ಥಿಗಳು ಕೇಳಬಹುದಾದ ಪುನರಾವರ್ತಿತ ಪ್ರಶ್ನೆಗಳನ್ನು ಕ್ರೋಢೀಕರಿಸಿ ಪ್ರಾಧಿಕಾರದ ವೆಬ್ಸೈಟ್ನಲ್ಲಿ ಉತ್ತರಗಳನ್ನು ಪ್ರಕಟಿಸಲಾಗಿದೆ. ಅಭ್ಯರ್ಥಿಗಳು ಅದನ್ನು ಓದಿಕೊಳ್ಳಬಹುದಾಗಿದೆ. ಹೆಚ್ಚಿನ ವಿವರಗಳಿಗಾಗಿ ಅಭ್ಯರ್ಥಿಗಳು ಪ್ರಾಧಿಕಾರದ ವೆಬ್‌ಸೈಟ್ http://kea.kar.nic.in ಗೆ ಭೇಟಿ ನೀಡಬಹುದು ಎಂದು ಹೆಚ್.ಪ್ರಸನ್ನ ತಿಳಿಸಿದ್ದಾರೆ.
ಇದನ್ನೂ ಓದಿ:RRB ನೇಮಕಾತಿ: 14,298 ತಾಂತ್ರಿಕ ಹುದ್ದೆಗಳ ಭರ್ತಿಗೆ ಅರ್ಜಿಗೆ ಆಹ್ವಾನ - Railway Recruitment Board