ಡಾಲಿ ಧನಂಜಯ್ ಅಭಿನಯದ ಬಹುನಿರೀಕ್ಷಿತ 'ಕೋಟಿ' ಸಿನಿಮಾ ಬಿಡುಗಡೆಗೆ ದಿನಗಣನೆ ಶುರುವಾಗಿದೆ. ಈಗಾಗಲೇ ಟ್ರೇಲರ್ ಮತ್ತು ಹಾಡುಗಳು ಟ್ರೆಂಡ್ ಆಗಿದ್ದು, ಟಿಕೆಟ್ ಬುಕಿಂಗ್ ಕೂಡ ಓಪನ್ ಆಗುತ್ತಿದೆ. ಅದಕ್ಕೂ ಮುನ್ನ ಚಿತ್ರತಂಡವು ಸಿನಿರಸಿಕರಿಗಾಗಿ ಎರಡು ಪೇಯ್ಡ್ ಪ್ರೀಮಿಯರ್ ಶೋಗಳನ್ನು ಆಯೋಜಿಸಲು ಮುಂದಾಗಿದೆ.
ಚಿತ್ರದ ಬರಹಗಾರ, ನಿರ್ದೇಶಕ ಪರಮ್ ಕಿರುತೆರೆಯಲ್ಲಿ ಬಹುದೊಡ್ಡ ಹೆಸರು ಗಳಿಸಿದವರು. ದಶಕಗಳ ಕಾಲ ಕಲರ್ಸ್ ಕನ್ನಡವನ್ನು ಯಶಸ್ವಿಯಾಗಿ ಮುನ್ನಡೆಸಿದ್ದ ಇವರು, ಈಗ ನಿರ್ದೇಶನದ ಟೋಪಿ ಧರಿಸಿದ್ದಾರೆ. 'ಕೋಟಿ' ತಂಡವು ಬಹುಸಕ್ರಿಯವಾಗಿ ಸಿನಿಮಾ ಪ್ರಚಾರದಲ್ಲಿ ತೊಡಗಿಕೊಂಡಿದ್ದು, ಬಸ್, ಮೆಟ್ರೋ, ಟಿವಿ, ಯೂಟ್ಯೂಬ್ ಹಾಗೂ ಇನ್ಸ್ಟಾಗ್ರಾಂ ಸೇರಿ ಎಲ್ಲೆಡೆಯೂ ಸದ್ದು ಮಾಡುತ್ತಿದೆ.
ಇತ್ತೀಚೆಗೆ ಅದ್ಧೂರಿಯಾಗಿ ನಡೆದ ಪ್ರೀರಿಲೀಸ್ ಕಾರ್ಯಕ್ರಮಕ್ಕೆ ಕಿಚ್ಚ ಸುದೀಪ್ ಆಗಮಿಸಿ, ಸಿನಿ ತಂಡಕ್ಕೆ ಶುಭ ಹಾರೈಸಿದ್ದರು. ಇದೇ ವೇದಿಕೆಯಲ್ಲಿ ಚಿತ್ರತಂಡವು ಅಭಿನಯ ಚಕ್ರವರ್ತಿಗೆ ಕೋಟಿಯ ಮೊದಲ ಟಿಕೆಟ್ ನೀಡಿತ್ತು. ಸಿನಿಮಾ ತಂಡ ಇಂದು (ಬುಧವಾರ) ಟೆಲಿವಿಷನ್ ಮತ್ತು ಸಿನಿಮಾ ತಾರೆಯರಿಗೆ ವಿಶೇಷ ಪ್ರೀಮಿಯರ್ ಶೋಗಳನ್ನು ಆಯೋಜಿಸಿದೆ. ದೊಡ್ಡ ಸಂಖ್ಯೆಯಲ್ಲಿ ತಾರೆಯರು ಸೇರುವ ನಿರೀಕ್ಷೆ ಇದೆ. ಇದರ ಜೊತೆಗೆ ಸಿನಿರಸಿಕರಿಗಾಗಿ ಎರಡು ಪೇಯ್ಡ್ ಪ್ರೀಮಿಯರ್ ಶೋಗಳನ್ನೂ ಆಯೋಜನೆ ಮಾಡಲಾಗುತ್ತಿದೆ.
ಗುರುವಾರ ಮೈಸೂರಿನಲ್ಲಿ ಪೇಯ್ಡ್ ಪ್ರೀಮಿಯರ್ ಶೋಗಳಿದ್ದು, ಧನಂಜಯ್ ಮತ್ತು ಚಿತ್ರತಂಡ ಮೈಸೂರಿನ ಅಭಿಮಾನಿಗಳ ಜೊತೆ ಸಿನಿಮಾ ವೀಕ್ಷಿಸಲಿದ್ದಾರೆ. ಕೋಟಿ ಸಿನಿಮಾ ಶುಕ್ರವಾರದಂದು ರಾಜ್ಯಾದ್ಯಂತ 200ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ನಂತರದ ದಿನಗಳಲ್ಲಿ ಅಮೆರಿಕ, ಇಂಗ್ಲೆಂಡ್, ಯುರೋಪ್ ಮತ್ತು ಗಲ್ಫ್ ದೇಶಗಳಲ್ಲೂ ರಿಲೀಸ್ ಆಗುತ್ತಿದೆ. ವರ್ಷದ ಮೊದಲಾರ್ಧದಲ್ಲಿ ಯಾವುದೇ ದೊಡ್ಡ ಗೆಲುವು ಕಾಣದೇ, ಕಂಗೆಟ್ಟಿರುವ ಕನ್ನಡ ಇಂಡಸ್ಟ್ರಿಗೆ ಅಪ್ಪಟ ಕನ್ನಡ ಮಣ್ಣಿನ ಕಥೆಯಾದ 'ಕೋಟಿ' ಗೆಲ್ಲುವ ಭರವಸೆ ಮೂಡಿಸಿದೆ.
ಚಿತ್ರದ ತಾರಾಗಣದಲ್ಲಿ ಡಾಲಿ ಧನಂಜಯ್ ಜೊತೆ ನಾಯಕಿಯಾಗಿ ಮೋಕ್ಷಾ ಕುಶಾಲ್ ಮತ್ತು ಖಳನಾಯಕನಾಗಿ ರಮೇಶ್ ಇಂದಿರಾ ಇದ್ದಾರೆ. ಉಳಿದಂತೆ ಹಿರಿಯ ನಟರಾದ ರಂಗಾಯಣ ರಘು, ತಾರಾ, ಸರ್ದಾರ್ ಸತ್ಯ ಜೊತೆಗೆ ಪೃಥ್ವಿ ಶಾಮನೂರು, ತನುಜಾ ವೆಂಕಟೇಶ್, ಅಭಿಷೇಕ್ ಶ್ರೀಕಾಂತ್, ವಿಜಯ್ ಶೋಭರಾಜ್ ಪವೂರ್ ಮುಂತಾದವರು ಅಭಿನಯಿಸಿದ್ದಾರೆ.
ಐದು ಹಾಡುಗಳಿದ್ದು, ವಾಸುಕಿ ವೈಭವ್ ರಾಗ ಸಂಯೋಜಿಸಿದ್ದಾರೆ. ಯೋಗರಾಜ್ ಭಟ್ ಮತ್ತು ವಾಸುಕಿ ವೈಭವ್ ಸಾಹಿತ್ಯ ರಚಿಸಿದ್ದಾರೆ. ಹಿನ್ನೆಲೆ ಸಂಗೀತದ ಜವಾಬ್ದಾರಿಯನ್ನು '777 ಚಾರ್ಲಿ' ಖ್ಯಾತಿಯ ನೊಬಿನ್ ಪೌಲ್ ಹೊತ್ತಿದ್ದಾರೆ. 'ಕಾಂತಾರ' ಸಿನಿಮಾದಿಂದ ಪ್ರಶಂಸೆ ಗಳಿಸಿದ್ದ ಪ್ರತೀಕ್ ಶೆಟ್ಟಿ ಅವರ ಸಂಕಲನವಿದ್ದು, ಟೆಲಿವಿಷನ್‌ನ ಖ್ಯಾತ ಛಾಯಾಗ್ರಾಹಕ ಅರುಣ್ ಅವರು ಕ್ಯಾಮರಾಮನ್ ಆಗಿದ್ದಾರೆ. ಜಿಯೋ ಸ್ಟುಡಿಯೋಸ್ ಅವರು ನಿರ್ಮಾಣ ಮಾಡಿದ್ದಾರೆ.
ಇದನ್ನೂ ಓದಿ:'ಕೋಟಿ': ಡಾಲಿ ವೃತ್ತಿಜೀವನದಲ್ಲೇ ಅತಿ ಹೆಚ್ಚು ದಿನಗಳ ಕಾಲ ಚಿತ್ರೀಕರಿಸಿದ ಚಿತ್ರ - Kotee Movie