ಬೆಂಗಳೂರು: ಚಿತ್ರದುರ್ಗದ ಯುವಕ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಎರಡನೇ ಆರೋಪಿ ನಟ ದರ್ಶನ್ ತೂಗುದೀಪ ಅವರು ಮನೆ ಊಟಕ್ಕೆ ವ್ಯವಸ್ಥೆ ಮಾಡುವುದಕ್ಕೆ ಅವಕಾಶ ಕಲ್ಪಿಸುವಂತೆ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಇಂದು ಅರ್ಜಿ ಸಲ್ಲಿಕೆಯಾಗಿದ್ದು, ವಿಚಾರಣೆಗೆ ಇನ್ನಷ್ಟೇ ದಿನ ನಿಗದಿಯಾಗಬೇಕಿದೆ.
ಕಾರಾಗೃಹದಲ್ಲಿ ನೀಡುತ್ತಿರುವ ಆಹಾರ ಅರ್ಜಿದಾರರಿಗೆ ಸೂಕ್ತ ರೀತಿಯಲ್ಲಿ ಜೀರ್ಣವಾಗುತ್ತಿಲ್ಲ. ಹೀಗಾಗಿ ಕೆಲ ದಿನಗಳಿಂದ ಅತಿಸಾರ ಭೇದಿಯಿಂದ ಬಳಲುತ್ತಿದ್ದಾರೆ. ಜೈಲಿನ ಆರೋಗ್ಯಾಧಿಕಾರಿ ಪರಿಶೀಲನೆ ನಡೆಸಿದ್ದು, ಆಹಾರದಲ್ಲಿ ವಿಷಕಾರಿ ಸೂಕ್ಷ್ಮ ಜೀವಿಗಳು ಸೇರಿವೆ ಎಂದು ತಿಳಿಸಿದ್ದಾರೆ. ಜೊತೆಗೆ, ಅರ್ಜಿದಾರರು ತೂಕದಲ್ಲಿಯೂ ಕಡಿಮೆಯಾಗಿದ್ದಾರೆ. ಇದರಿಂದ ಕಾರಾಗೃಹದಲ್ಲಿ ವಿತರಣೆ ಮಾಡುತ್ತಿರುವ ಆಹಾರ ಸೇವನೆಗೆ ಸಾಧ್ಯವಾಗದ ಪರಿಸ್ಥಿತಿಗೆ ತಲುಪಿದ್ದಾರೆ. ಹೀಗಾಗಿ, ಮನೆ ಆಹಾರ ತರಿಸಿಕೊಳ್ಳುವುದಕ್ಕೆ ಅವಕಾಶ ನೀಡಬೇಕು ಎಂದು ಜೈಲು ಅಧಿಕಾರಿಗಳಿಗೆ ಈಗಾಗಲೇ ಮೌಖಿಕವಾಗಿ ಮನವಿ ಮಾಡಿದ್ದಾರೆ.
ಆದರೆ, ಅಧಿಕಾರಿಗಳು ಹೈಕೋರ್ಟ್ ಆದೇಶವಿಲ್ಲದೇ ಅರ್ಜಿದಾರರ ಕುಟುಂಬಸ್ಥರು ಮನೆಯಲ್ಲಿ ಸಿದ್ಧಪಡಿಸಿದ ಆಹಾರವನ್ನು ಒದಗಿಸಲು ಅನುಮತಿ ನೀಡಲಾಗುವುದಿಲ್ಲ ಎಂದು ತಿಳಿಸಿ ನಿರಾಕರಿಸಿದ್ದಾರೆ. ಅರ್ಜಿದಾರರು ದೊಡ್ಡ ಪ್ರಮಾಣದಲ್ಲಿ ತೂಕ ಕಳೆದುಕೊಳ್ಳುತ್ತಿದ್ದಾರೆ. ಇದೇ ರೀತಿ ಮುಂದುವರೆದಲ್ಲಿ ಆರೋಗ್ಯ ಹದಗೆಡುವ ಸಾಧ್ಯತೆಯಿದೆ ಎಂದು ಅರ್ಜಿಯಲ್ಲಿ ತಿಳಿಸಿದ್ದಾರೆ.