ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಎರಡನೇ ಆರೋಪಿ ನಟ ದರ್ಶನ್ ತೂಗುದೀಪ ಅವರು ಮನೆ ಊಟಕ್ಕೆ ವ್ಯವಸ್ಥೆ ಮಾಡುವುದಕ್ಕೆ ಅವಕಾಶ ಕಲ್ಪಿಸುವಂತೆ ಕೋರಿದ್ದ ಅರ್ಜಿಯನ್ನು ಹೈಕೋರ್ಟ್ ಶುಕ್ರವಾರ ಮಧ್ಯಾಹ್ನ 2:30ಕ್ಕೆ ಮುಂದೂಡಿದೆ. ದರ್ಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಆರ್.ಕೃಷ್ಣ ಕುಮಾರ್ ಅವರಿದ್ದ ನ್ಯಾಯಪೀಠ, ಅರ್ಜಿ ವಿಚಾರಣೆಯನ್ನು ಮುಂದೂಡಿದೆ.
ವಿಚಾರಣೆ ಪ್ರಾರಂಭವಾಗುತ್ತಿದ್ದಂತೆ ದರ್ಶನ್ ಪರ ವಕೀಲರು, ಅರ್ಜಿಯ ತುರ್ತು ವಿಚಾರಣೆ ನಡೆಸಬೇಕು ಎಂದು ಕೋರಿದರು. ಅರ್ಜಿ ಸಬಂಧ ಸರ್ಕಾರ ಮತ್ತು ತನಿಖಾಧಿಕಾರಿಗಳು ಆಕ್ಷೇಪಣೆ ಸಲ್ಲಿಸಿದ್ದಾರೆ. ಆದರೆ, ತನಿಖಾಧಿಕಾರಿ ಆಕ್ಷೇಪಣೆ ಸಲ್ಲಿಸುವುದಕ್ಕೆ ಅವಕಾಶವಿಲ್ಲ ಎಂದು ನ್ಯಾಯಪೀಠಕ್ಕೆ ತಿಳಿಸಿದರು.
ಈ ವೇಳೆ ಸರ್ಕಾರದ ಪರ ವಕೀಲರು, ಅರ್ಜಿಗೆ ಸಂಬಂಧಿಸಿದಂತೆ ವಾದ ಮಂಡಿಸಲು ಸೋಮವಾರದವರೆಗೆ ಕಾಲಾವಕಾಶ ನೀಡಬೇಕು ಎಂದು ಕೋರಿದರು. ಇದಕ್ಕೆ ಪೀಠ, ಮನೆ ಊಟದ ಬಗ್ಗೆ ಕಾನೂನು ಏನು ಹೇಳುತ್ತದೆ? ಮನೆ ಊಟ, ಹಾಸಿಗೆ, ಪುಸ್ತಕ ಪಡೆಯಬಹುದೇ? ಅವಕಾಶವಿದ್ದರೆ ಅರ್ಜಿದಾರರಿಗೆ ಒದಗಿಸಬಹುದೇ? ಎಂಬ ಪ್ರಶ್ನೆಗಳು ಉದ್ಭವಿಸಿವೆ ಎಂದು ತಿಳಿಸಿ ನಾಳೆ(ಶುಕ್ರವಾರ) ಮಧ್ಯಾಹ್ನಕ್ಕೆ ವಿಚಾರಣೆ ಮುಂದೂಡಿದೆ.
ಅರ್ಜಿಯಲ್ಲಿ ಏನಿತ್ತು?: ಕಾರಾಗೃಹದಲ್ಲಿ ನೀಡುತ್ತಿರುವ ಆಹಾರ ಅರ್ಜಿದಾರರಿಗೆ ಸೂಕ್ತರೀತಿಯಲ್ಲಿ ಜೀರ್ಣವಾಗುತ್ತಿಲ್ಲ. ಹೀಗಾಗಿ ಕೆಲ ದಿನಗಳಿಂದ ಅತಿಸಾರ(ಭೇದಿ)ದಿಂದ ಬಳಲುತ್ತಿದ್ದಾರೆ. ಜೈಲಿನ ಆರೋಗ್ಯಾಧಿಕಾರಿ ಪರಿಶೀಲನೆ ನಡೆಸಿದ್ದ ಆಹಾರದಲ್ಲಿ ವಿಷಕಾರಿ ಸೂಕ್ಷ್ಮ ಜೀವಿಗಳು ಸೇರಿವೆ ಎಂದು ತಿಳಿಸಿದ್ದಾರೆ. ಜತೆಗೆ, ಅರ್ಜಿದಾರರು ತೂಕ ಕಳೆದುಕೊಂಡಿದ್ದಾರೆ. ಇದರಿಂದ ಕಾರಾಗೃಹದಲ್ಲಿ ವಿತರಣೆ ಮಾಡುತ್ತಿರುವ ಆಹಾರ ಸೇವನೆ ಮಾಡುವುದಕ್ಕೆ ಸಾಧ್ಯವಾಗದ ಪರಿಸ್ಥಿತಿಗೆ ತಲುಪಿಸಿದ್ದಾರೆ. ಹೀಗಾಗಿ ಮನೆ ಆಹಾರ ತರಿಸಿಕೊಳ್ಳುವುದಕ್ಕೆ ಅವಕಾಶ ನೀಡಬೇಕು ಎಂದು ಜೈಲು ಅಧಿಕಾರಿಗಳಿಗೆ ಈಗಾಗಲೇ ಮೌಖಿಕವಾಗಿ ಮನವಿ ಮಾಡಿದ್ದಾರೆ. ಆದರೆ, ಅಧಿಕಾರಿಗಳು ಹೈಕೋರ್ಟ್ ಆದೇಶವಿಲ್ಲದೇ, ಅರ್ಜಿದಾರರ ಕುಟುಂಬಸ್ಥರು ಮನೆಯಲ್ಲಿ ಸಿದ್ಧಪಡಿಸಿದ ಆಹಾರವನ್ನು ಒದಗಿಸಲು ಅನುಮತಿ ನೀಡಲಾಗುವುದಿಲ್ಲ ಎಂದು ತಿಳಿಸಿ ನಿರಾಕರಿಸಿದ್ದಾರೆ. ಹಾಗಾಗಿ, ಅರ್ಜಿದಾರರು ದೊಡ್ಡ ಪ್ರಮಾಣವಾಗಿ ತೂಕ ಕಳೆದುಕೊಳ್ಳುತ್ತಿದ್ದಾರೆ. ಇದೇ ರೀತಿ ಮುಂದುವರೆದಲ್ಲಿ ಆರೋಗ್ಯ ಹದಗೆಡುವ ಸಾಧ್ಯತೆಯಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ:ಮನೆಯೂಟ, ಹಾಸಿಗೆ, ಪುಸ್ತಕಗಳಿಗೆ ದರ್ಶನ್ ಅರ್ಜಿ: ಜೈಲಧಿಕಾರಿಗಳಿಗೆ ಹೈಕೋರ್ಟ್ ನೋಟಿಸ್ - High Court