ಕರ್ನಾಟಕ

karnataka

ETV Bharat / entertainment

ಖ್ಯಾತ ನಿರೂಪಕಿ ಅಪರ್ಣಾ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸೇರಿ ಗಣ್ಯರ ಸಂತಾಪ - Condolences To Aparna - CONDOLENCES TO APARNA

ಕನ್ನಡದ ಹೆಸರಾಂತ ನಿರೂಪಕಿ, ನಟಿ ಅಪರ್ಣಾ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸೇರಿ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.

Anchor Aparna
ಅಪರ್ಣಾ (ETV Bharat)

By ETV Bharat Karnataka Team

Published : Jul 12, 2024, 7:25 AM IST

Updated : Jul 12, 2024, 7:37 AM IST

ಬೆಂಗಳೂರು: ಕ್ಯಾನ್ಸರ್​ ವಿರುದ್ಧ ಹೋರಾಡುತ್ತಿದ್ದ ಕನ್ನಡದ ಪ್ರಸಿದ್ಧ ನಿರೂಪಕಿ, ಕಿರುತೆರೆ ನಟಿ ಅಪರ್ಣಾ ತಮ್ಮ 57ನೇ ವಯಸ್ಸಿನಲ್ಲಿ ಗುರುವಾರ ನಿಧನರಾದರು. ಅಪರ್ಣಾ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಬಹುಮುಖ ಪ್ರತಿಭೆ- ಸಿಎಂ ಸಿದ್ದರಾಮಯ್ಯ: ''ನಟಿ, ಖ್ಯಾತ ನಿರೂಪಕಿ ಅಪರ್ಣಾ ಅವರ ನಿಧನದ ಸುದ್ದಿ ತಿಳಿದು ನೋವಾಯಿತು. ಸರ್ಕಾರಿ ಸಮಾರಂಭಗಳು ಸೇರಿದಂತೆ ಕನ್ನಡದ ಪ್ರಮುಖ ವಾಹಿನಿಗಳ ಕಾರ್ಯಕ್ರಮಗಳಲ್ಲಿ ಕನ್ನಡ ಭಾಷೆಯಲ್ಲಿ ಅತ್ಯಂತ ಸೊಗಸಾಗಿ ನಿರೂಪಣೆ ಮಾಡುತ್ತಾ ನಾಡಿನಲ್ಲಿ ಮನೆಮಾತಾಗಿದ್ದ ಬಹುಮುಖ ಪ್ರತಿಭೆಯೊಂದು ಬಹುಬೇಗ ನಮ್ಮನ್ನು ಅಗಲಿರುವುದು ದುಃಖದ ಸಂಗತಿ. ಅಪರ್ಣಾ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸುತ್ತೇನೆ'' ಎಂದು ತಮ್ಮ ಅಧಿಕೃತ ಎಕ್ಸ್​​ ಖಾತೆಯಲ್ಲಿ ಕಪ್ಪು ಬಿಳುಪಿನ​ ಫೋಟೋ ಹಂಚಿಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

ಸ್ಪಷ್ಟ ಕನ್ನಡದಲ್ಲಿ ಸೊಗಸಾದ ನಿರೂಪಣೆ- ಡಿಸಿಎಂ ಡಿ.ಕೆ.ಶಿವಕುಮಾರ್ ಸಂತಾಪ:''ಸ್ಪಷ್ಟ ಕನ್ನಡದ ಮೂಲಕ ನಿರೂಪಣೆ ಮಾಡಿ ಕನ್ನಡಿಗರ ಮನ ಗೆದ್ದ, ಖ್ಯಾತ ನಿರೂಪಕಿ, ನಟಿ ಶ್ರೀಮತಿ ಅಪರ್ಣ ಅವರ ಸಾವಿನಿಂದ ಮನಸ್ಸಿಗೆ ಅಪಾರ ನೋವುಂಟಾಗಿದೆ. ಅವರ ನಿಧನ ಕಲಾ ಲೋಕಕ್ಕೆ ತುಂಬಲಾರದ ನಷ್ಟ. ನಿರೂಪಕಿಯಾಗಿ, ನಟಿಯಾಗಿ ದಶಕಗಳಿಂದ ದುಡಿದ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಕುಟುಂಬ ಹಾಗೂ ಸ್ನೇಹಿತರಿಗೆ ನನ್ನ ಸಾಂತ್ವನಗಳು'' ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಇದನ್ನೂ ಓದಿ:ಕನ್ನಡದ ಜನಪ್ರಿಯ ನಿರೂಪಕಿ ಅಪರ್ಣಾ ನಿಧನ - Actress Aparna Dies

ಮನೆ ಮಾತಾಗಿದ್ದ ಕಲಾವಿದೆ- ಬಿ.ವೈ.ವಿಜಯೇಂದ್ರ ಸಂತಾಪ: ಅಪರ್ಣಾ ಕಾರ್ಯಕ್ರಮವೊಂದರಲ್ಲಿ ನಿರೂಪಣೆ ಮಾಡುತ್ತಿರುವ ಫೋಟೋ ಹಂಚಿಕೊಂಡ ಬಿಜೆಪಿ ರಾಜ್ಯಾಧ್ಯಕ್ಷ ಬಿವೈವಿ, ''ಕನ್ನಡ ಕಿರುತೆರೆಯ ಖ್ಯಾತ ನಿರೂಪಕಿ ಹಾಗೂ ಕಲಾವಿದೆ ಅಪರ್ಣಾ ಅವರು ನಿಧನರಾದ ಸುದ್ದಿ ತಿಳಿದು ದುಃಖವಾಯಿತು. ನಿರೂಪಕಿಯಾಗಿ ಮಾತ್ರವಲ್ಲದೇ ನಟಿಯಾಗಿ ಕೂಡ ಗುರುತಿಸಿಕೊಂಡು, ಕಿರುತೆರೆಯಲ್ಲಿ ಮೂಡಿಬಂದ ಮೂಡಲಮನೆ, ಮುಕ್ತ ಮುಕ್ತ ಮುಂತಾದ ಧಾರಾವಾಹಿಗಳಲ್ಲಿ ನಟಿಸಿ ಮನೆಮಾತಾಗಿದ್ದ ಕಲಾವಿದೆ ಅಪರ್ಣಾ ಬಹುಬೇಗ ಇಹಲೋಕ ತ್ಯಜಿಸಿರುವುದು ನೋವಿನ ಸಂಗತಿ. ಅವರ ಕುಟುಂಬ ವರ್ಗದವರಿಗೆ ಭಗವಂತ ಅಗಲಿಕೆಯ ನೋವು ಸಹಿಸುವ ಶಕ್ತಿ ಕರುಣಿಸಲಿ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ'' ಎಂದು ತಿಳಿಸಿದ್ದಾರೆ.

ಇದನ್ನೂ ಓದಿ:ನಟ ದರ್ಶನ್ ಪ್ರಕರಣದ ಬಗ್ಗೆ ನಿರ್ದೇಶಕ ತರುಣ್ ಸುಧೀರ್ ಹೇಳಿದ್ದೇನು ? - Tharun Sudhir

ನಾಡು ಸಜ್ಜನಿಕೆಯ ನಿರೂಪಕಿಯನ್ನು ಕಳೆದುಕೊಂಡಿದೆ- ಸಂಸದ ಬೊಮ್ಮಾಯಿ: ಮಾಜಿ ಸಿಎಂ ಮತ್ತು ಹಾವೇರಿ-ಗದಗ ಸಂಸದ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದು, ''ಕನ್ನಡದ ಖ್ಯಾತ‌ ನಿರೂಪಕಿ ಅಪರ್ಣಾ ಅವರ ನಿಧನದ ಸುದ್ದಿ ಕೇಳಿ ಮನಸಿಗೆ ಅತ್ಯಂತ ನೋವಾಯಿತು. ಸರಳ ಕನ್ನಡದಲ್ಲಿ ಸುಂದರವಾಗಿ ಕಾರ್ಯಕ್ರಮಗಳನ್ನು ನಿರೂಪಣೆ ಮಾಡುವ ಮೂಲಕ ಎಲ್ಲರ ಮನೆ ಮಾತಾಗಿದ್ದರು.‌ ಅವರ ಅಗಲಿಕೆಯಿಂದ ಕನ್ನಡ ನಾಡು ಒಬ್ಬ ಸಜ್ಜನಿಕೆಯ ನಿರೂಪಕಿಯನ್ನು ಕಳೆದುಕೊಂಡಂತಾಗಿದೆ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಅಗಲಿಕೆಯ ದುಖವನ್ನು ಭರಿಸುವ ಶಕ್ತಿಯನ್ನು ಅವರ ಅಭಿಮಾನಿಗಳು ಹಾಗೂ ಕುಟುಂಬ ವರ್ಗಕ್ಕೆ ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ'' ಎಂದು ಬರೆದುಕೊಂಡಿದ್ದಾರೆ.

Last Updated : Jul 12, 2024, 7:37 AM IST

ABOUT THE AUTHOR

...view details