ಸಿಡ್ನಿ (ಆಸ್ಟ್ರೇಲಿಯಾ): ನಗರದ ದೊಡ್ಡ ಶಾಪಿಂಗ್ ಕಾಂಪ್ಲೆಕ್ಸ್‌ನಲ್ಲಿ ಚಾಕು ದಾಳಿ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಈ ವೇಳೆ ದಾಳಿಕೋರರು ಹಲವರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾರೆ. ಘಟನೆಯ ನಂತರ ಖರೀದಿ ಕೇಂದ್ರದಲ್ಲಿ ಆತಂಕದ ವಾತಾವರಣ ಉಂಟಾಗಿದ್ದು, ಜನರನ್ನು ಕೂಡಲೇ ಶಾಪಿಂಗ್ ಕಾಂಪ್ಲೆಕ್ಸ್‌ನಿಂದ ಹೊರಹೋಗುವಂತೆ ಸೂಚಿಸಲಾಗಿತ್ತು. ಮಾಹಿತಿ ತಿಳಿದ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ಆರೋಪಿಗೆ ಗುಂಡು ಹಾರಿಸಿದ್ದರು. ಈ ದಾಳಿಯಲ್ಲಿ ಐವರು ಸಾವನ್ನಪ್ಪಿದ್ದು, ಮಗು ಸೇರಿದಂತೆ ಅನೇಕರು ಗಾಯಗೊಂಡಿದ್ದಾರೆ.
ಅಲ್ಲಿನ ಮಾಧ್ಯಮಗಳ ವರದಿಯ ಪ್ರಕಾರ, ಸಿಡ್ನಿಯ ವೆಸ್ಟ್‌ಫೀಲ್ಡ್ ಬೋಂಡಿ ಜಂಕ್ಷನ್ ಶಾಪಿಂಗ್ ಸೆಂಟರ್‌ನಲ್ಲಿ ಆರೋಪಿಗಳಿಬ್ಬರು ಚಾಕುವಿನಿಂದ 9 ಜನರ ಮೇಲೆ ದಾಳಿ ನಡೆಸಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಐವರು ಸಾವನ್ನಪ್ಪಿದ್ದಾರೆ. ಈ ದಾಳಿ ಬಗ್ಗೆ ತಿಳಿದ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಆರೋಪಿಗೆ ಗುಂಡು ಹಾರಿಸಿದ್ದು, ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಆದ್ರೆ ಮತ್ತೊಬ್ಬ ಆರೋಪಿ ಪರಾರಿಯಾಗಿದ್ದು, ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದು ಸಹಾಯಕ ಪೊಲೀಸ್ ಕಮಿಷನರ್ ಆಂಥೋನಿ ಕುಕ್ ಸುದ್ದಿಗಾರರಿಗೆ ತಿಳಿಸಿದರು.