ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮೂರನೇ ಬಾರಿಗೆ ಜಯಭೇರಿ ಬಾರಿಸಿದ್ದು ಶೀಘ್ರವೇ ಎನ್‌ಡಿಎ ಕೂಟ ಸರ್ಕಾರ ರಚನೆ ಮಾಡಲು ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸುವುದು ಬಹುತೇಕ ಖಚಿತವಾಗಿದೆ. ಈ ಶುಭ ಸಂದರ್ಭದಲ್ಲಿ ವಿಶ್ವದ ಪ್ರಮುಖ ನಾಯಕರು ಮೋದಿ ಅವರನ್ನು ಅಭಿನಂದಿಸಿದ್ದಾರೆ.
ಜೋ ಬೈಡನ್: ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರು ನರೇಂದ್ರ ಮೋದಿ ಮತ್ತು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ (ಎನ್‌ಡಿಎ) ಇತ್ತೀಚೆಗೆ ಮುಕ್ತಾಯಗೊಂಡ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಕ್ಕಾಗಿ ಬುಧವಾರ ಅಭಿನಂದನೆ ಸಲ್ಲಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಬೈಡನ್, "ಲೋಕಸಭೆಯಲ್ಲಿ ಜಯಭೇರಿ ಬಾರಿಸಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಎನ್‌ಡಿಎ ಮೈತ್ರಿಕೂಟಕ್ಕೆ ಅಭಿನಂದನೆಗಳು. ಸುಮಾರು 45 ದಿನಗಳ ಕಾಲ ನಡೆದ ಐತಿಹಾಸಿಕ ಚುನಾವಣೆಯಲ್ಲಿ ಭಾಗವಹಿಸಿದ ಎಲ್ಲ 650 ಮಿಲಿಯನ್ ಮತದಾರರಿಗೂ ಅಭಿನಂದನೆಗಳು. ನಮ್ಮ ಎರಡು ದೇಶಗಳ ನಡುವಿನ ಸ್ನೇಹ ಮತ್ತಷ್ಟು ಬೆಳೆಯುತ್ತಿದೆ. ನಾವು ಅನಿಯಮಿತ ಸಾಮರ್ಥ್ಯದ ಹಂಚಿಕೆಯ ಭವಿಷ್ಯವನ್ನು ಅನ್ಲಾಕ್ ಮಾಡಿಡುತ್ತಿದ್ದೇವೆ ಎಂದಿದ್ದಾರೆ.
ರಿಷಿ ಸುನಕ್:ಬ್ರಿಟನ್ ಪ್ರಧಾನಿ ರಿಷಿ ಸುನಕ್ ಕೂಡ ಪ್ರಧಾನಿ ಮೋದಿ ಅವರನ್ನು ಅಭಿನಂದಿಸಿದ್ದಾರೆ. "ನಾನು ಇಂದು ಪ್ರಧಾನಿ ಮೋದಿಯವರೊಂದಿಗೆ ಮಾತನಾಡಿ ಚುನಾವಣಾ ಗೆಲುವಿಗೆ ಅಭಿನಂದನೆ ಸಲ್ಲಿಸಿದ್ದೇನೆ. ಯುಕೆ ಮತ್ತು ಭಾರತ ಅತ್ಯಂತ ನಿಕಟ ಸ್ನೇಹವನ್ನು ಹೊಂದಿದ್ದು, ನಾವು ಒಟ್ಟಾಗಿ ನಮ್ಮ ನಡುವಿನ ಈ ಸ್ನೇಹ-ಸಂಬಂಧವನ್ನು ಮುಂದಕ್ಕೆ ಕೊಂಡೊಯ್ಯುತ್ತೇವೆ ಎಂದು ಟ್ವೀಟ್ ಮಾಡಿದ್ದಾರೆ.
ಪುಟಿನ್ ಟ್ವೀಟ್:ಭಾರತದ ಸ್ನೇಹಿ ರಾಷ್ಟ್ರವಾದ ರಷ್ಯಾದ ಅಧ್ಯಕ್ಷ ಪುಟಿನ್ ಕೂಡ ಪ್ರಧಾನಿ ಮೋದಿಯವರನ್ನು ಅಭಿನಂದನೆ ಸಲ್ಲಿಕೆ ಮಾಡಿದ್ದಾರೆ. ಸಾರ್ವತ್ರಿಕ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಿಜೆಪಿಗೆ ಅಭಿನಂದನೆಗಳು. ನಿಮ್ಮ ಸರ್ಕಾರಿ ಚಟುವಟಿಕೆಗಳಲ್ಲಿ ಹೊಸ ಯಶಸ್ಸಿನೊಂದಿಗೆ ಉತ್ತಮ ಆರೋಗ್ಯವನ್ನು ನಾನು ಬಯಸುತ್ತೇನೆ ಎಂದಿದ್ದಾರೆ.
ಫ್ರಾನ್ಸ್ ಅಧ್ಯಕ್ಷ:ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಮೋದಿ ಅವರಿಗೆ ಅಭಿನಂದಿಸಿದ್ದಾರೆ. ಸೋಷಿಯಲ್ ಮೀಡಿಯಾ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ, ಮೋದಿ ಅವರೊಂದಿಗಿ ಸೆಲ್ಫಿ ಚಿತ್ರವನ್ನು ಪೋಸ್ಟ್ ಮಾಡಿ ವಿಶ್ವದ ಅತಿದೊಡ್ಡ ಚುನಾವಣೆ ಭಾರತದಲ್ಲಿ ಪೂರ್ಣಗೊಂಡಿದೆ ಎಂದು ಬರೆದಿದ್ದಾರೆ. ನನ್ನ ಆತ್ಮೀಯ ಗೆಳೆಯ ನರೇಂದ್ರ ಮೋದಿಯವರಿಗೆ ಅಭಿನಂದನೆಗಳು. ಒಟ್ಟಾಗಿ ನಾವು ಭಾರತ ಮತ್ತು ಫ್ರಾನ್ಸ್ ಮತ್ತಷ್ಟು ಬಲಪಡಿಸುತ್ತೇವೆ ಎಂದು ಬರೆದಿದ್ದಾರೆ.
ಚೀನಾ ವಿದೇಶಾಂಗ ಸಚಿವಾಲಯ: ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಮಾವೋ ನಿಂಗ್ ಅವರು ಪ್ರಧಾನಿ ಮೋದಿಯವರಿಗೆ ಅಭಿನಂದನೆ, ಮೋದಿ ನೇತೃತ್ವದಲ್ಲಿ ಬಿಜೆಪಿ ಮತ್ತು ಎನ್‌ಡಿಎ ಗೆಲುವನ್ನು ನಾವು ಅಭಿನಂದಿಸುತ್ತೇವೆ ಎಂದು ಬರೆದಿದ್ದಾರೆ.
2024ರ ಲೋಕಸಭೆ ಚುನಾವಣೆಯ ಫಲಿತಾಂಶ ಪ್ರಕಟವಾದ ಒಂದು ದಿನದ ನಂತರ ಅಂದರೆ ನಿನ್ನೆ ದಿನ ಪ್ರಧಾನಿ ಮೋದಿ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ರಾಷ್ಟ್ರಪತಿಗಳು ರಾಜೀನಾಮೆಯನ್ನು ಅಂಗೀಕರಿಸಿ, ಹೊಸ ಸರ್ಕಾರ ರಚನೆಯಾಗುವವರೆಗೂ ಹಂಗಾಮಿಯಾಗಿ ಮುಂದುವರೆಯಲು ಸೂಚಿಸಿದ್ದಾರೆ. ಜೂ.8ರಂದು ಮೋದಿ ಅವರು ಮೂರನೇ ಅವಧಿಗೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ:ಮೋದಿ ರಾಜೀನಾಮೆ ಸಲ್ಲಿಕೆ; ಜೂ.8ಕ್ಕೆ ಮತ್ತೊಂದು ಅವಧಿಗೆ ಪ್ರಧಾನಿಯಾಗಿ ಪ್ರಮಾಣವಚನ? - PM MODI RESIGNS