ಜೆರುಸಲೇಂ: ಇರಾನ್ನೊಂದಿಗೆ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಸ್ರೇಲ್ ತನ್ನ ಮೀಸಲು ಯೋಧರನ್ನು ಯುದ್ಧಕ್ಕೆ ಕರೆಸಿಕೊಂಡಿದೆ. ತನ್ನ ವೈಮಾನಿಕ ರಕ್ಷಣಾ ವ್ಯವಸ್ಥೆಯನ್ನು ಬಲಪಡಿಸಲು ಈ ಮೀಸಲು ಯೋಧರನ್ನು ನಿಯೋಜಿಸಿರುವುದಾಗಿ ಇಸ್ರೇಲ್ ಸೇನೆ ಹೇಳಿದೆ. "ಮಾನವಶಕ್ತಿ ಹೆಚ್ಚಿಸಲು ಮತ್ತು ಮೀಸಲು ಸೈನಿಕರನ್ನು ಐಡಿಎಫ್ (ಇಸ್ರೇಲ್ ರಕ್ಷಣಾ ಪಡೆಗಳು) ವೈಮಾನಿಕ ರಕ್ಷಣಾ ವ್ಯವಸ್ಥೆಗೆ ನಿಯೋಜಿಸಲು ನಿರ್ಧರಿಸಲಾಗಿದೆ" ಎಂದು ಇಸ್ರೇಲ್ ಮಿಲಿಟರಿ ಬುಧವಾರ ಹೇಳಿಕೆಯಲ್ಲಿ ತಿಳಿಸಿದೆ.
ಸೋಮವಾರ ರಾತ್ರಿ ಸಿರಿಯಾದಲ್ಲಿನ ಇರಾನ್ ರಾಯಭಾರ ಕಚೇರಿಯ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಇರಾನ್ ಮಂಗಳವಾರ ಪ್ರತಿಜ್ಞೆ ಮಾಡಿರುವುದು ಗಮನಾರ್ಹ. ಸಿರಿಯಾದಲ್ಲಿನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ನ ಹಿರಿಯ ಕಮಾಂಡರ್ ಮೊಹಮ್ಮದ್ ರೆಜಾ ಜಹೇದಿ ಮತ್ತು ಅವರ ಡೆಪ್ಯೂಟಿ ಸೇರಿದಂತೆ ಏಳು ಇರಾನಿಯನ್ನರು ಈ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಕ್ಸಿನ್ಹುವಾ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಆದರೆ, ಸಿರಿಯಾದಲ್ಲಿನ ಇರಾನ್ ರಾಯಭಾರ ಕಚೇರಿ ಮೇಲೆ ನಡೆದ ದಾಳಿಗೆ ಈವರೆಗೂ ಇಸ್ರೇಲ್ ಹೊಣೆ ಹೊತ್ತುಕೊಂಡಿಲ್ಲ. ಈ ದಾಳಿಯಿಂದ ಮಧ್ಯಪ್ರಾಚ್ಯದಲ್ಲಿನ ಯುದ್ಧ ಉದ್ವಿಗ್ನತೆ ಮತ್ತಷ್ಟು ಉಲ್ಬಣಿಸಲು ಕಾರಣವಾಗಿದೆ.