ನ್ಯೂಯಾರ್ಕ್(ಅಮೆರಿಕ): ಪ್ರಧಾನಿ ನರೇಂದ್ರ ಮೋದಿ ಅವರು ಪ್ಯಾಲೆಸ್ತೀನ್ ಅಧ್ಯಕ್ಷ ಮಹಮೂದ್ ಅಬ್ಬಾಸ್ ಅವರನ್ನು ಭೇಟಿಯಾಗಿ ಗಾಜಾ ಪರಿಸ್ಥಿತಿಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದರು. ಈ ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಮರುಸ್ಥಾಪಿಸಲು ಭಾರತದ ಬೆಂಬಲವನ್ನು ಅವರು ಪುನರುಚ್ಚರಿಸಿದರು.
ಮೂರು ದಿನಗಳ ಅಮೆರಿಕ ಪ್ರವಾಸದಲ್ಲಿರುವ ಮೋದಿ ನ್ಯೂಯಾರ್ಕ್‌ನಲ್ಲಿ ಭಾನುವಾರ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ನೇಪಥ್ಯದಲ್ಲಿ ಪ್ಯಾಲೆಸ್ತೀನ್ ಅಧ್ಯಕ್ಷರೂ ಸೇರಿದಂತೆ ಜಾಗತಿಕ ನಾಯಕರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿರುವ ಅವರು, 'ನ್ಯೂಯಾರ್ಕ್‌ನಲ್ಲಿ ಪ್ಯಾಲೆಸ್ತೀನ್ ಅಧ್ಯಕ್ಷ ಮಹಮೂದ್ ಅಬ್ಬಾಸ್ ಅವರನ್ನು ಭೇಟಿಯಾದೆ. ಗಾಜಾದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಶೀಘ್ರವಾಗಿ ಪುನಃಸ್ಥಾಪಿಸಲು ಭಾರತದ ಬೆಂಬಲ ನೀಡಲಿದೆ. ಪ್ಯಾಲೆಸ್ತೀನ್ ಜನರೊಂದಿಗೆ ದೀರ್ಘಕಾಲೀನ ಸ್ನೇಹವನ್ನು ಮತ್ತಷ್ಟು ಬಲಪಡಿಸುವ ವಿಚಾರಗಳನ್ನು ವಿನಿಮಯ ಮಾಡಿಕೊಂಡೆ" ಎಂದು ತಿಳಿಸಿದ್ದಾರೆ.
'ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪ್ಯಾಲೆಸ್ತೀನ್ ಅಧ್ಯಕ್ಷ ಮಹಮೂದ್ ಅಬ್ಬಾಸ್ ಅವರನ್ನು ಭೇಟಿಯಾದರು' ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿದ್ದಾರೆ.