ವಾಷಿಂಗ್ಟನ್(ಅಮೆರಿಕ):ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಪ್ರಮಾಣ ವಚನ ಸ್ವೀಕರಿಸಿದ ಮರುದಿನ ಅಂದರೆ ಜ.21 ರಂದು ಕ್ವಾಡ್ ಸದಸ್ಯ ರಾಷ್ಟ್ರಗಳ ವಿದೇಶಾಂಗ ಸಚಿವರ ಸಭೆ ನಡೆಯಲಿದೆ. ಇದು ಹೊಸ ಸರ್ಕಾರದ ವಿದೇಶಾಂಗ ನೀತಿಯ ಪ್ರಮುಖ ಹೆಜ್ಜೆಯಾಗಿದೆ ಎಂದು ವರದಿಯಾಗಿದೆ. ಭಾರತ, ಆಸ್ಟ್ರೇಲಿಯಾ, ಜಪಾನ್ ಮತ್ತು ಅಮೆರಿಕ ಕ್ವಾಡ್ ಸದಸ್ಯ ರಾಷ್ಟ್ರಗಳಾಗಿವೆ.
ಸೋಮವಾರ (ಜನವರಿ 20ರಂದು) ಟ್ರಂಪ್ ಎರಡನೇ ಅವಧಿಗೆ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ವಿದೇಶಾಂಗ ಸಚಿವ ಎಸ್. ಜೈಶಂಕರ್, ಆಸ್ಟ್ರೇಲಿಯಾದ ವಿದೇಶಾಂಗ ಸಚಿವೆ ಪೆನ್ನಿ ವಾಂಗ್ ಮತ್ತು ಜಪಾನ್ ವಿದೇಶಾಂಗ ಸಚಿವ ತಕೇಶಿ ಇವಾಯಾ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ತಮ್ಮ ದೇಶಗಳನ್ನು ಪ್ರತಿನಿಧಿಸಲಿದ್ದಾರೆ.
'ಇಂಡೋ -ಪೆಸಿಫಿಕ್ ವಿಷಯದಲ್ಲಿ ಅಮೆರಿಕದ ಬದ್ಧತೆಯು ಹೊಸ ಆಡಳಿತದಲ್ಲಿ ಬದಲಾಗುವುದಿಲ್ಲ' ಎಂಬುದನ್ನು ಸಾರಲು ಕ್ವಾಡ್ ವಿದೇಶಾಂಗ ಸಚಿವರ ಸಭೆಗೆ ಉದ್ದೇಶಿಸಲಾಗಿದೆ ಎಂದು ತಿಳಿದು ಬಂದಿದೆ. ಇದು ವಿದೇಶಿ ನಾಯಕರೊಂದಿಗೆ ಹೊಸ ಆಡಳಿತದ ಮೊದಲ ಪ್ರಮುಖ ಸಂವಾದ ಮತ್ತು ಸಭೆಯಾಗಲಿದೆ ಎಂದು ನಿರೀಕ್ಷಿಸಲಾಗಿದೆ.