ಹೈದರಾಬಾದ್:ಮುಂದಿನ ವರ್ಷ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿ-2025ರ ಸಂಪೂರ್ಣ ವೇಳಾಪಟ್ಟಿಯನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ಇಂದು ಬಿಡುಗಡೆ ಮಾಡಿದೆ. ಮೆಗಾ ಟೂರ್ನಿ ಫೆಬ್ರವರಿ 19ರಿಂದ ಆರಂಭವಾಗಲಿದೆ. ಭಾರತದ ನಿರೀಕ್ಷೆಯಂತೆ ಚಾಂಪಿಯನ್ಸ್ ಟ್ರೋಫಿ ಹೈಬ್ರಿಡ್ ಮಾದರಿಯಲ್ಲೇ ನಡೆಯಲಿದೆ. ಭಾರತ ತನ್ನೆಲ್ಲಾ ಪಂದ್ಯಗಳನ್ನು ದುಬೈನಲ್ಲಿ ಆಡಲಿದೆ.
ಫೆಬ್ರವರಿ 19ರಿಂದ ಮಾರ್ಚ್ 9ರವರೆಗೆ ನಡೆಯಲಿರುವ ಈ ಟೂರ್ನಿಯಲ್ಲಿ ಒಟ್ಟು 8 ತಂಡಗಳು ಭಾಗಿಯಾಗುತ್ತಿವೆ. ಈ ಅವಧಿಯಲ್ಲಿ ಒಟ್ಟು 15 ಪಂದ್ಯಗಳು ನಡೆಯುತ್ತವೆ. ಎಲ್ಲಾ ತಂಡಗಳನ್ನು 2 ಗುಂಪುಗಳಾಗಿ ವಿಂಗಡಿಸಲಾಗಿದೆ.
ಐಸಿಸಿ ಬಿಡುಗಡೆ ಮಾಡಿರುವ ವೇಳಾಪಟ್ಟಿಯಂತೆ ಫೆಬ್ರವರಿ 19ರಂದು ಮೊದಲ ಪಂದ್ಯದಲ್ಲಿ ಕರಾಚಿಯಲ್ಲಿ ನ್ಯೂಜಿಲೆಂಡ್ ಮತ್ತು ಆತಿಥೇಯ ಪಾಕಿಸ್ತಾನ ಮುಖಾಮುಖಿಯಾಗುವ ಮೂಲಕ ಟೂರ್ನಿ ಆರಂಭವಾಗಲಿದೆ. ಮಾರ್ಚ್ 9ರಂದು ಫೈನಲ್ ಪಂದ್ಯ ನಡೆಯಲಿದೆ. ಮಾರ್ಚ್ 10 ಮೀಸಲು ದಿನವಾಗಿದೆ.
ಟೂರ್ನಿಯ ಅಂಗವಾಗಿ ಭಾರತ ಮತ್ತು ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಪಂದ್ಯ ಫೆಬ್ರವರಿ 23ರಂದು ದುಬೈನ ಅಂತಾರಾಷ್ಟ್ರೀಯ ಮೈದಾನದಲ್ಲಿ ನಡೆಯಲಿದೆ. ಲೀಗ್ ಸುತ್ತಿನ ಅಂತಿಮ ಪಂದ್ಯದಲ್ಲಿ ಭಾರತ ಮಾರ್ಚ್ 2ರಂದು ನ್ಯೂಜಿಲೆಂಡ್ ತಂಡವನ್ನು ಎದುರಿಸಲಿದೆ.
ಎ ಗುಂಪು: ಭಾರತ, ಪಾಕಿಸ್ತಾನ, ನ್ಯೂಜಿಲೆಂಡ್ ಮತ್ತು ಬಾಂಗ್ಲಾದೇಶ
ಬಿ ಗುಂಪು: ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ, ಅಫ್ಘಾನಿಸ್ತಾನ ಮತ್ತು ಇಂಗ್ಲೆಂಡ್