Ind vs Aus 2nd test: ಬಾರ್ಡರ್-ಗವಾಸ್ಕರ್ ಟ್ರೋಫಿಯ ಮೊದಲ ಪಂದ್ಯದಲ್ಲಿ ಗೆಲುವು ಸಾಧಿಸಿದ್ದ ಟೀಂ ಇಂಡಿಯಾ ಎರಡನೇ ಪಂದ್ಯದಲ್ಲಿ ಹೀನಾಯ ಸೋಲನುಭವಿಸಿದೆ.
ಅಡಿಲೇಡ್ನಲ್ಲಿ ನಡೆದ ಹಗಲು/ರಾತ್ರಿಯ ಪಿಂಕ್ ಬಾಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಮತ್ತೊಮ್ಮೆ ಪಾರಮ್ಯ ಸಾಧಿಸಿತು. ಮೊದಲ ಇನ್ನಿಂಗ್ಸ್‌ನಲ್ಲಿ 180 ರನ್ಗಳಿಗೆ ಸರ್ವಪತನ ಕಂಡಿದ್ದ ಭಾರತ 157 ರನ್‌ಗಳ ಹಿನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್ ಆರಂಭಿಸಿತು. ಇದರಲ್ಲೂ ಭಾರತೀಯ ಬ್ಯಾಟರ್ಗಳು ರನ್ ಗಳಿಸುವಲ್ಲಿ ವಿಫಲರಾದ ಕಾರಣ ಭಾರತ ಎರಡನೇ ಇನ್ನಿಂಗ್ಸ್‌ನಲ್ಲಿ ಕೇವಲ 175ರನ್ ಗಳಿಸಲಷ್ಟೇ ಶಕ್ತವಾಯಿತು. ಆಸ್ಟ್ರೇಲಿಯಾಗೆ ಕೇವಲ 19ರನ್‌ಗಳ ಗುರಿಯನ್ನು ನೀಡಿತು. ಈ ಗುರಿಯನ್ನು ಆತಿಥೇಯ ತಂಡ ಸುಲಭವಾಗಿ ಸಾಧಿಸಿ 10 ವಿಕೆಟ್‌ಗಳಿಂದ ಗೆಲುವು ಸಾಧಿಸಿತು. ಇದರೊಂದಿಗೆ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ 1-1 ಅಂತರದಿಂದ ಸಮಬಲ ಸಾಧಿಸಿತು.
ಎರಡನೇ ದಿನ 128ರನ್ಗಳಿಗೆ 5 ವಿಕೆಟ್ ಕಳೆದುಕೊಂಡಿದ್ದು ಭಾರತ, ಮೂರನೇ ದಿನದಾಟ ಆರಂಭಿಸಿತ್ತು. ರಿಷಬ್ ಪಂತ್ ಮತ್ತು ನಿತೀಶ್ ಕುಮಾರ್ ರೆಡ್ಡಿ ಕ್ರೀಸ್‌ನಲ್ಲಿದ್ದರು. ಈ ಇಬ್ಬರು ತಂಡದ ಸ್ಕೋರ್ ಹೆಚ್ಚಿಸುತ್ತಾರೆ ಎಂದೇ ನಂಬಲಾಗಿತ್ತು. ಆದರೆ ಸ್ಟಾರ್ಕ್ ಇದಕ್ಕೆ ಅವಕಾಶ ಮಾಡಿಕೊಡಲಿಲ್ಲ. ಪಂತ್ ಅವರ ವಿಕೆಟ್ ಉರುಳಿಸಿ ಭಾರತಕ್ಕೆ ಶಾಕ್ ನೀಡಿದರು. ಮತ್ತೊಂದೆಡೆ ನಿತೀಶ್ ಕುಮಾರ್ ರೆಡ್ಡಿ 42 ರನ್ ಗಳಿಸುತ್ತಿದ್ದಂತೆ ಕಮಿನ್ಸ್ ಎಸೆತದಲ್ಲಿ ವಿಕೆಟ್ ಒಪ್ಪಿಸಿ ಹೊರ ನಡೆದರು.