IND vs ENG 1st ODI: ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ ಇಂದಿನಿಂದ ಪ್ರಾರಂಭವಾಗಿದೆ. ಇದಕ್ಕೂ ಮೊದಲು ನಡೆದಿದ್ದ ಟಿ20 ಸರಣಿಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಟೀಂ ಇಂಡಿಯಾ ಇದೀಗ ಏಕದಿನ ಸರಣಿ ಮೇಲೆ ಕಣ್ಣಿಟ್ಟಿದೆ.
ಉಭಯ ತಂಡಗಳ ಮಧ್ಯೆ ನಡೆಯುತ್ತಿರುವ ಮೊದಲ ಪಂದ್ಯಕ್ಕೆ ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಮೈದಾನ ಆತಿಥ್ಯ ವಹಿಸಿಕೊಂಡಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಇಂಗ್ಲೆಂಡ್ ಮೊದಲಿಗೆ ಬ್ಯಾಟಿಂಗ್ ಆಯ್ದುಕೊಂಡಿದೆ. ಟಾಸ್ಗೂ ಮೊದಲು ರೋಹಿತ್ ಶರ್ಮಾ ಟೀಂ ಇಂಡಿಯಾದ ಪ್ಲೇಯಿಂಗ್ ಇಲೆವೆನ್ ಪ್ರಕಟಿಸಿದ್ದರು. ಆದರೆ, ಮೊದಲ ಪಂದ್ಯದಿಂದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಹೊರಗುಳಿದಿದ್ದು ಅಚ್ಚರಿಗೆ ಕಾರಣವಾಗಿದೆ. ಈ ಬಗ್ಗೆ ನಾಯಕ ರೋಹಿತ್ ಶರ್ಮಾ ಸ್ಪಷ್ಟನೆ ನೀಡಿದ್ದಾರೆ.
ರೋಹಿತ್ ಶರ್ಮಾ ಹೇಳಿದ್ದೇನು:ಮೊದಲ ಪಂದ್ಯದಿಂದ ವಿರಾಟ್ ಕೊಹ್ಲಿ ಹೊರಗುಳಿದಿದ್ದಾರೆ. ಕಾರಣ ಅಭ್ಯಾಸದ ವೇಳೆ ಕೊಹ್ಲಿ ಬಲ ಮೊಣಕಾಲಿಗೆ ಗಾಯ ಮಾಡಿಕೊಂಡಿದ್ದಾರೆ. ಚಾಂಪಿಯನ್ಸ್ ಟ್ರೋಫಿ ಸಮೀಪಿಸುತ್ತಿರುವ ಕಾರಣ ಮುನ್ನೆಚ್ಚರಿಕೆ ಕ್ರಮವಾಗಿ ಕೊಹ್ಲಿಗೆ ಮೊದಲ ಪಂದ್ಯದಿಂದ ವಿಶ್ರಾಂತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಕೊಹ್ಲಿಯ ಕಳೆದ 17 ವರ್ಷಗಳ ಏಕದಿನ ಕ್ರಿಕೆಟ್ ವೃತ್ತಿಜೀವನದಲ್ಲಿ ಗಾಯದಿಂದ ಪಂದ್ಯವನ್ನು ತಪ್ಪಿಸಿಕೊಂಡಿದ್ದು ಇದು ಎರಡನೇ ಬಾರಿಯಾಗಿದೆ. ಇದಕ್ಕೂ ಮೊದಲ 2022ರಲ್ಲಿ ಇಂಗ್ಲೆಂಡ್ ವಿರುದ್ಧ ನಡೆದಿದ್ದ ಏಕದಿನ ಪಂದ್ಯದಲ್ಲಿ ತೊಡೆಸಂದು ನೋವಿಗೆ ತುತ್ತಾಗಿ ಹೊರಗುಳಿದಿದ್ದರು.