ನವದೆಹಲಿ:ಈ ತಿಂಗಳಾಂತ್ಯದಲ್ಲಿ ಭಾರತ ತಂಡ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದೆ. ತಂಡ ಪ್ರಕಟ ಮಾಡುವ ಜೊತೆಗೆ ನಾಯಕರನ್ನೂ ಘೋಷಿಸುವ ಸವಾಲಿದೆ. ಹೊಸ ಮುಖ್ಯ ಕೋಚ್ ಗೌತಮ್ ಗಂಭೀರ್ ಈ ಬಗ್ಗೆ ರಾಷ್ಟ್ರೀಯ ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್ ಜೊತೆಗಿನ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿದ್ದಾರೆ.
ಕ್ರೀಡಾ ಮಾಧ್ಯಮವೊಂದರ ವರದಿಯ ಪ್ರಕಾರ, ನೂತನ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರು, ತಂಡದ ಆಯ್ಕೆ ಮತ್ತು ಮಂದಿನ ಯೋಜನೆಗಳ ಕುರಿತು ಬಿಸಿಸಿಐ ಮತ್ತು ಆಯ್ಕೆ ಸಮಿತಿಯೊಂದಿಗೆ ಚರ್ಚೆ ನಡೆಸಿದ್ದಾರೆ. ಮುಂಬರುವ ಟೂರ್ನಿ ಮತ್ತು ಭಾರತ ತಂಡದ ಭವಿಷ್ಯದ ಹಿನ್ನೆಲೆಯಲ್ಲಿಯೂ ಯೋಚನೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಮತ್ತು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರೊಂದಿಗೆ ವರ್ಚುಯಲ್ ಆಗಿ ಒಂದು ಗಂಟೆ ಕಾಲ ಸಭೆ ನಡೆಸಿದ್ದಾರೆ. ಶ್ರೀಲಂಕಾ ವಿರುದ್ಧದ ಸರಣಿಗೆ ವಿರಾಟ್ ಕೊಹ್ಲಿ ಮತ್ತು ಜಸ್ಪ್ರೀತ್ ಬುಮ್ರಾ ಅವರಂತಹ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡುವ ನಿರೀಕ್ಷೆಯಿದೆ. ಅವರ ಅನುಪಸ್ಥಿತಿಯಲ್ಲಿ ಟಿ-20 ವಿಶ್ವಕಪ್ ತಂಡಕ್ಕೆ ಆಯ್ಕೆಯಾಗದ ಆಟಗಾರರಾದ ಶ್ರೇಯಸ್ ಅಯ್ಯರ್ ಮತ್ತು ಕೆಎಲ್ ರಾಹುಲ್‌ಗೆ ಅವಕಾಶ ನೀಡುವ ಬಗ್ಗೆಯೂ ಪ್ರಸ್ತಾಪಿಸಲಾಗಿದೆ.