ಈ ತಿಂಗಳು 22ನೇ ತಾರೀಖಿನಿಂದ ಭಾರತ ಮತ್ತು ಇಂಗ್ಲೆಂಡ್ ನಡುವೆ 5 ಪಂದ್ಯಗಳ ಟಿ20 ಸರಣಿ ಪ್ರಾರಂಭವಾಗಲಿದೆ. ಇದು ಮುಗಿದ ಬೆನ್ನಲ್ಲೆ ಫೆ.6 ರಿಂದ 3 ಪಂದ್ಯಗಳ ಏಕದಿನ ಸರಣಿ ಪ್ರಾರಂಭವಾಗಲಿದೆ. ಏತನ್ಮಧ್ಯೆ, ಚಾಂಪಿಯನ್ಸ್ ಟ್ರೋಫಿ ಮತ್ತು ಇಂಗ್ಲೆಂಡ್ ವಿರುದ್ದದ ಏಕದಿನ ಸರಣಿಗಾಗಿ ಶನಿವಾರ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) 15 ಸದಸ್ಯರ ಬಲಿಷ್ಟ ತಂಡವನ್ನು ಪ್ರಕಟಿಸಿದೆ.
ಟೀಂ ಇಂಡಿಯಾದ ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಮತ್ತು ನಾಯಕ ರೋಹಿತ್ ಶರ್ಮಾ ಜಂಟಿ ಸುದ್ಧಿಗೋಷ್ಠಿ ನಡೆಸಿ ತಂಡವನ್ನು ಪ್ರಕಟಿಸಿದ್ದಾರೆ. ಬರೋಬ್ಬರಿ ಒಂದು ವರ್ಷದ ಬಳಿಕ ಮೊಹಮ್ಮದ್ ಶಮಿ ಅಂತಾರಾಷ್ಟ್ರೀಯ ಪಂದ್ಯಕ್ಕೆ ಕಮ್ಬ್ಯಾಕ್ ಮಾಡಲು ಸಜ್ಜಾಗಿದ್ದಾರೆ. ಜೊತೆಗೆ ಯುವ ದಾಂಡಿಗ ಯಶಸ್ವಿ ಜೈಸ್ವಾಲ್ ಕೂಡ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದು, ಇದು ಅವರ ಚೊಚ್ಚಲ ಏಕದಿನ ಸರಣಿ ಆಗಲಿದೆ. ಆದರೆ ಇಂಗ್ಲೆಂಡ್ ವಿರುದ್ಧ ಟಿ20 ಮತ್ತು ಏಕದಿನ ಸರಣಿ ಎರಡರಿಂದಲೂ ವೇಗಿ ಜಸ್ಪ್ರೀತ್ ಬುಮ್ರಾ ಹೊರಗುಳಿಯಲಿದ್ದಾರೆ.
ಇತ್ತೀಚೆಗಷ್ಟೇ ಆಸ್ಟ್ರೇಲಿಯಾ ವಿರುದ್ಧ ನಡೆದಿದ್ದ ಐದು ಪಂದ್ಯಗಳ ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಭಾಗವಾಗಿದ್ದ ಟೀಂ ಇಂಡಿಯಾದ ಸ್ಟಾರ್ ಬೌಲರ್ ಜಸ್ಪ್ರೀತ್ ಬುಮ್ರಾ ಸರಣಿ ಉದ್ದಕ್ಕೂ ಭರ್ಜರಿ ಪ್ರದರ್ಶನ ತೋರಿದ್ದರು. ಎಲ್ಲ 5 ಪಂದ್ಯಗಳಲ್ಲಿ ಕಾಂಗರೂ ಪಡೆ ಕಾಡಿದ್ದ ಬುಮ್ರಾ ಸರಣಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡದ ಬೌಲರ್ ಎನಿಸಿಕೊಂಡರು.
ಆದರೆ, ಸರಣಿಯ 5ನೇ ಮತ್ತು ಅಂತಿಮ ಪಂದ್ಯದಲ್ಲಿ ಬೆನ್ನು ನೋವಿಗೆ ತುತ್ತಾದ ಬುಮ್ರಾ ಪಂದ್ಯದ ನಡುವೆಯೇ ಆಸ್ಪತ್ರೆಗೆ ತೆರಳಿದ್ದರು. ಇದಾದ ಬಳಿಕ ಎರಡನೇ ಇನ್ನಿಂಗ್ಸ್ನಲ್ಲಿ ಅವರಿಗೆ ಬೌಲಿಂಗ್ ಮಾಡಲು ಸಾಧ್ಯವಾಗಿರಲಿಲ್ಲ. ಸದ್ಯ ಅವರು ಗಾಯದಿಂದ ಚೇತರಿಸಿಕೊಂಡಿದ್ದರು ಮುಂದಿನ ತಿಂಗಳು ಆರಂಭವಾಗಲಿರುವ ಚಾಂಪಿಯನ್ಸ್ ಟ್ರೋಫಿ ದೃಷ್ಟಿಯಿಂದ ತಂಡದಿಂದ ಹೊರಗಿಡಲಾಗಿದೆ.