ಹೈದರಾಬಾದ್: ಭಾರತದ ಕ್ರಿಕೆಟ್ ನಿಯಂತ್ರಣ ಮಂಡಳಿಯ ಕಾರ್ಯದರ್ಶಿ (BCCI) ಜಯ್ ಶಾ ಮೂರನೇ ಬಾರಿಗೆ ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ACC)ನ ಅಧ್ಯಕ್ಷರಾಗಿ ಮರು ನೇಮಕಗೊಂಡಿದ್ದಾರೆ. ಬುಧವಾರ ಇಂಡೋನೇಷ್ಯಾದ ಬಾಲಿಯಲ್ಲಿ ನಡೆದ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಸರ್ವಾನುಮತದಿಂದ ಈ ನಿರ್ಣಯ ಕೈಗೊಳ್ಳಲಾಗಿದೆ. ಮುಂದಿನ ಒಂದು ವರ್ಷದ ವರೆಗೆ ಎಸಿಸಿ ಅಧ್ಯಕ್ಷ ಸ್ಥಾನದಲ್ಲಿ ಮುಂದುವರೆಯಲಿದ್ದಾರೆ.
ಶ್ರೀಲಂಕಾ ಕ್ರಿಕೆಟ್ ಅಧ್ಯಕ್ಷ ಶಮ್ಮಿ ಸಿಲ್ವಾ ಅವರು ಎರಡನೇ ಬಾರಿಗೆ ಜಯ್ ಶಾ ಅವರ ಅಧಿಕಾರಾವಧಿಯ ವಿಸ್ತರಣೆಯನ್ನು ಪ್ರಸ್ತಾಪಿಸಿದರು. ನಾಮ ನಿರ್ದೇಶನವನ್ನು ಏಷ್ಯನ್ ಕ್ರಿಕೆಟ್ ಕೌನ್ಸಿಲ್ನ ಎಲ್ಲಾ ಸದಸ್ಯರು ಸರ್ವಾನುಮತದಿಂದ ಬೆಂಬಲಿಸಿದರು. ಜನವರಿ 2021ರಲ್ಲಿ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯ ಅಧ್ಯಕ್ಷರಾದ ನಜ್ಮುಲ್ ಹಸನ್ ಅವರ ನಂತರ ಶಾ ಎಸಿಸಿಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು. ಎಸಿಸಿ ಅಧ್ಯಕ್ಷರಾಗಿ ನೇಮಕಗೊಂಡ ಅತ್ಯಂತ ಕಿರಿಯ ಆಡಳಿತಗಾರ ಎಂಬ ಹೆಗ್ಗಳಿಕೆಗೂ ಜಯ್ ಶಾ ಪಾತ್ರರಾಗಿದ್ದಾರೆ. ಶಾ ಅವರ ಅಧಿಕಾರವಧಿಯಲ್ಲಿ ACC ಏಷ್ಯಾದ ಪ್ರದೇಶದಾದ್ಯಂತ ಕ್ರಿಕೆಟ್ ಅನ್ನು ಉತ್ತೇಜಿಸುವಲ್ಲಿ ಮತ್ತು ಅಭಿವೃದ್ಧಿಪಡಿಸುವಲ್ಲಿ ಗಮನಾರ್ಹ ಪ್ರಗತಿಯನ್ನು ಸಾಧಿಸಿದೆ. ಅಲ್ಲದೇ 2022ರಲ್ಲಿ ಟಿ20 ಮಾದರಿಯಲ್ಲಿ ಮತ್ತು 2023 ರಲ್ಲಿ ODI ಮಾದರಿಯಲ್ಲಿ ಏಷ್ಯಾಕಪ್ ಯಶಸ್ವಿಯಾಗಿ ಆಯೋಜಿಸಲಾಗಿತ್ತು.
ಧನ್ಯವಾದ ತಿಳಿಸಿದ ಜಯ್ ಶಾ: ಬಳಿಕ ಈ ಕುರಿತು ಪ್ರತಿಕ್ರಿಯಿಸಿದ ಜಯ್ ಶಾ, ನನ್ನ ಮೇಲೆ ನಂಬಿಕೆ ಇಟ್ಟಿದ್ದಕ್ಕಾಗಿ ಎಸಿಸಿ ಮಂಡಳಿಗೆ ನಾನು ಆಭಾರಿಯಾಗಿದ್ದೇನೆ. ಕ್ರಿಕೆಟ್ ಆರಂಭಿಕ ಹಂತದಲ್ಲಿರುವ ಪ್ರದೇಶಗಳಿಗೆ ವಿಶೇಷ ಗಮನವನ್ನು ನೀಡುವಾಗ ನಾವು ಆಟದ ಸರ್ವತೋಮುಖ ಅಭಿವೃದ್ಧಿಯನ್ನು ಖಚಿತಪಡಿಸಿಕೊಳ್ಳಲು ಗಮನಹರಿಸಬೇಕು. ಏಷ್ಯಾದಾದ್ಯಂತ ಕ್ರಿಕೆಟ್ ಅನ್ನು ಉತ್ತೇಜಿಸಲು ಎಸಿಸಿ ಬದ್ಧವಾಗಿದೆ ಎಂದು ಅವರು ತಿಳಿಸಿದರು.