ಮುಂಬೈ (ಮಹಾರಾಷ್ಟ್ರ): ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಬಾಲ್ಯದ ಕೋಚ್ ರಮಾಕಾಂತ್ ಅಚ್ರೇಕರ್ ಅವರ ಪ್ರತಿಮೆ ಸ್ಥಾಪಿಸುವ ಪ್ರಸ್ತಾವನೆಗೆ ಮಹಾರಾಷ್ಟ್ರ ಸರ್ಕಾರ ಹಸಿರು ನಿಶಾನೆ ತೋರಿದೆ. ಮುಂಬೈನ ಶಿವಾಜಿ ಪಾರ್ಕ್ನ ಗೇಟ್ ನಂ.5ರ ಬಳಿ ಪ್ರತಿಮೆ ಸ್ಥಾಪಿಸಲು ಸರ್ಕಾರ ನಿರ್ಧರಿಸಿದೆ. ವಿ ಕಾಮತ್ ಮೆಮೋರಿಯಲ್ ಕ್ರಿಕೆಟ್ ಕ್ಲಬ್ ಪ್ರತಿಮೆ ಸ್ಥಾಪಿಸುವ ಜವಾಬ್ದಾರಿಯನ್ನು ವಹಿಸಿಕೊಂಡಿದೆ. ಆದರೆ ನಿರ್ವಹಣಾ ವೆಚ್ಚವನ್ನು ಸರ್ಕಾರ ಭರಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ.
ಮುಂಬೈನ ಗಾರ್ಡಿಯನ್ ಮಿನಿಸ್ಟರ್ ನೇತೃತ್ವದ ಸಮಿತಿಯು ಸ್ಮಾರಕ ನಿರ್ಮಾಣಕ್ಕೆ ಶಿಫಾರಸು ಮಾಡಿತ್ತು. ಈ ಸ್ಮಾರಕದ ನಿರ್ಮಾಣವನ್ನು ಸಕಾಲದಲ್ಲಿ ಪೂರ್ಣಗೊಳಿಸುವ ಜವಾಬ್ದಾರಿಯನ್ನು ಬೃಹತ್ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಎಂಸಿಜಿಎಂ) ಆಯುಕ್ತರು ವಹಿಸಲಿದ್ದಾರೆ.
ಮಹಾರಾಷ್ಟ್ರ ಸರ್ಕಾರದ ಈ ನಿರ್ಧಾರಕ್ಕೆ ಸಚಿನ್ ತೆಂಡೂಲ್ಕರ್ ಸಂತಸ ವ್ಯಕ್ತಪಡಿಸಿದ್ದಾರೆ. 'ನಾನು ಸೇರಿದಂತೆ ಹಲವು ಕ್ರಿಕೆಟಿಗರ ಜೀವನದ ಮೇಲೆ ಅಚ್ರೇಕರ್ ಸರ್ ಅಗಾಧ ಪ್ರಭಾವ ಬೀರಿದ್ದಾರೆ. ಅವರ ಬಳಿ ತರಬೇತಿ ಪಡೆದ ಎಲ್ಲ ವಿದ್ಯಾರ್ಥಿಗಳ ಪರವಾಗಿ ನಾನು ಮಾತನಾಡುತ್ತಿದ್ದೇನೆ. ಅಚ್ರೇಕರ್ ಅವರ ಜೀವನವು ಶಿವಾಜಿ ಪಾರ್ಕ್‌ನಲ್ಲಿ ಕ್ರಿಕೆಟ್‌ನ ಸುತ್ತ ಸುತ್ತುತ್ತದೆ. ಆ ಉದ್ಯಾನವನದಲ್ಲಿ ಶಾಶ್ವತವಾಗಿ ಉಳಿಯಬೇಕೆಂಬುದು ಅವರ ಮಹದಾಸೆಯಾಗಿತ್ತು. ಅಚ್ರೇಕರ್ ಸರ್ ತರಬೇತಿ ನೀಡುತ್ತಿದ್ದ ಸ್ಥಳದಲ್ಲಿಯೇ ಅವರ ಪ್ರತಿಮೆಯನ್ನು ಸ್ಥಾಪಿಸಲು ಸರ್ಕಾರ ನಿರ್ಧರಿಸಿರುವುದು ತುಂಬಾ ಸಂತೋಷದ ವಿಷಯವಾಗಿದೆ ಎಂದು ಸಚಿನ್ ಎಕ್ಸ್ ಖಾತೆಯಲ್ಲಿ ಬರೆದಿದ್ದಾರೆ.