ಎರಡನೇ ಬಾರಿಗೆ ಟಿ-20 ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ರಾಜ್ಯ ನಾಯಕರು ಅಭಿನಂದನೆ ಸಲ್ಲಿಸಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಫೈನಲ್ ಪಂದ್ಯದಲ್ಲಿ 7 ರನ್ಗಳ ಜಯ ಸಾಧಿಸಿದ ಭಾರತ, 11 ವರ್ಷಗಳ ಬಳಿಕ ಐಸಿಸಿ ಟ್ರೋಫಿ ಗೆದ್ದಿತು.
ಐತಿಹಾಸಿಕ ಕ್ಷಣ- ಸಿದ್ದರಾಮಯ್ಯ:'ಕ್ರಿಕೆಟ್ ಪ್ರೇಮಿಯಾದ ನನಗೆ ನಮ್ಮವರ ಗೆಲುವು ಅತ್ಯಂತ ಖುಷಿ ಕೊಟ್ಟಿದೆ. ಕೋಟ್ಯಂತರ ಜನರ ಹರಕೆ, ಹಾರೈಕೆಗಳು ಕಡೆಗೂ ಫಲಕೊಟ್ಟಿದೆ. ವಿಶ್ವಕಪ್ ಮರಳಿ ಭಾರತದ ಮಡಿಲು ಸೇರಿದೆ. ನಿರ್ಣಾಯಕ ಹಂತದಲ್ಲಿ ತಂಡ ತೋರಿದ ಸಂಘಟಿತ ಪ್ರದರ್ಶನ ಪಂದ್ಯದ ದಿಕ್ಕನ್ನೇ ಬದಲಿಸಿತು. ಇಡೀ ಪಂದ್ಯಾವಳಿಯಲ್ಲಿ ಒಂದೂ ಸೋಲದೆ ಕಾಣದೆ ಅಜೇಯರಾಗುಳಿದು ವಿಶ್ವಕಪ್ ಟಿ20 ಜಯಿಸಿದ ಭಾರತ ತಂಡದ ಸಾಧನೆ ನಿಜಕ್ಕೂ ಶ್ಲಾಘನೀಯ' ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
'ಒಂದು ಹಂತದಲ್ಲಿ ಗೆಲುವಿನ ಸನಿಹಕ್ಕೆ ಬಂದು ಕಡೇ ಕ್ಷಣದಲ್ಲಿ ಪಂದ್ಯ ಸೋತ ದಕ್ಷಿಣ ಆಫ್ರಿಕಾ ತಂಡದ ಆಟವೂ ಮೆಚ್ಚುಗೆಗೆ ಅರ್ಹವಾಗಿದೆ' ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.