Urvil Patel: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಹರಾಜಿನಲ್ಲಿ ಅನ್ಸೋಲ್ಡ್ ಆಗಿದ್ದ ಯುವ ಬ್ಯಾಟರ್‌ವೊಬ್ಬರು ಟಿ20ಯಲ್ಲಿ ಹೊಸ ಚರಿತ್ರೆ ಸೃಷ್ಟಿಸಿದ್ದಾರೆ. ಗುಜರಾತ್ ತಂಡದ ವಿಕೆಟ್ ಕೀಪರ್ ಮತ್ತು ಬ್ಯಾಟರ್ ಆಗಿರುವ ಉರ್ವಿಲ್ ಪಟೇಲ್, ಸ್ಫೋಟಕ ಬ್ಯಾಟಿಂಗ್ ಮೂಲಕ ಕೇವಲ 28 ಎಸೆತಗಳಲ್ಲೇ ಶತಕ ಸಿಡಿಸಿ ಹೊಸ ದಾಖಲೆ ಬರೆದಿದ್ದಾರೆ.
ಸೈಯದ್ ಮುಷ್ತಾಕ್ ಅಲಿ ಟ್ರೋಫಿ-2024ರ ಅಂಗವಾಗಿ ಇಂದೋರ್‌ನ ಎಮರಾಲ್ಡ್ ಹೈಟ್ಸ್ ಇಂಟರ್‌ನ್ಯಾಶನಲ್ ಸ್ಕೂಲ್ ಗ್ರೌಂಡ್‌ನಲ್ಲಿ ಬುಧವಾರ ತ್ರಿಪುರಾ ವಿರುದ್ಧ ನಡೆದ ಪಂದ್ಯದಲ್ಲಿ ಉರ್ವಿಲ್ 35 ಎಸೆತಗಳಲ್ಲಿ 7 ಬೌಂಡರಿ ಮತ್ತು 12 ಸಿಕ್ಸರ್‌ಗಳೊಂದಿಗೆ ಅಜೇಯ 113 ರನ್ ಗಳಿಸಿದರು. ಅಲ್ಲದೇ, ಕೇವಲ 28 ಎಸೆತಗಳಲ್ಲಿ ಶತಕ ಸಿಡಿಸುವ ಮೂಲಕ ಟೀಂ ಇಂಡಿಯಾದ ಸ್ಟಾರ್ ಆಟಗಾರ ರಿಷಬ್ ಪಂತ್ ದಾಖಲೆ ಮುರಿದರು. ಅಷ್ಟೇ ಅಲ್ಲದೇ, ಭಾರತ ಪರ ಅತ್ಯಂತ ವೇಗದ ಶತಕ ಸಿಡಿಸಿದ ಆಟಗಾರ ಎಂಬ ಹೆಗ್ಗಳಿಕೆಗೂ ಪಾತ್ರರಾದರು.
ಟಿ20ಯಲ್ಲಿ ವೇಗದ ಶತಕ ಸಿಡಿಸಿದ ಭಾರತೀಯ ಬ್ಯಾಟರ್ ಎಂಬ ದಾಖಲೆ ರಿಷಬ್ ಪಂತ್ ಹೆಸರಲ್ಲಿತ್ತು. ಪಂತ್ 32 ಎಸೆತಗಳಲ್ಲಿ ಶತಕ ದಾಖಲಿಸಿದ್ದರು. 2018ರಲ್ಲಿ ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದಿದ್ದ ಹಿಮಾಚಲ ಪ್ರದೇಶ ವಿರುದ್ಧದ ಟಿ20 ಪಂದ್ಯದಲ್ಲಿ ಪಂತ್ ಶತಕ ಬಾರಿಸಿದ್ದರು.