ಬೆಂಗಳೂರು:WPL ಇತಿಹಾಸದಲ್ಲೇ ಮೊದಲ ಸೂಪರ್ ಓವರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಯುಪಿ ವಾರಿಯರ್ಸ್ ತಂಡ ಜಯ ದಾಖಲಿಸಿದೆ. ಸೋಮವಾರ ನಡೆದ ರಣರೋಚಕ ಪಂದ್ಯಕ್ಕೆ ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣ ಸಾಕ್ಷಿಯಾಯಿತು.
ಡಬ್ಲ್ಯುಪಿಎಲ್‌ನಲ್ಲಿ ಇದೇ ಮೊದಲ ಬಾರಿಗೆ ಸೂಪರ್ ಓವರ್ ಹಂತ ತಲುಪಿದ ಪಂದ್ಯವನ್ನ ಅಂತಿಮವಾಗಿ ಯುಪಿ ವಾರಿಯರ್ಸ್ ತಂಡ 4 ರನ್‌ಗಳಿಂದ ಗೆದ್ದು ಬೀಗಿತು. ಸೂಪರ್ ಓವರ್‌ನಲ್ಲಿ ಮೊದಲು ಬ್ಯಾಟ್ ಮಾಡಿದ ಯುಪಿ ವಾರಿಯರ್ಸ್ ತಂಡ 8 ರನ್ ಗಳಿಸಿತ್ತು. ಗುರಿ ಬೆನ್ನಟ್ಟಿದ ಆರ್‌ಸಿಬಿ ಕೇವಲ 4 ರನ್ ಗಳಿಸಲಷ್ಟೇ ಶಕ್ತವಾಯಿತು.
ಇದಕ್ಕೂ ಮೊದಲು ಟಾಸ್ ಸೋತ ಆರ್‌ಸಿಬಿ ತಂಡ ಮೊದಲು ಬ್ಯಾಟಿಂಗ್ ಆರಂಭಿಸಿತು. ಆರ್‌ಸಿಬಿ ಪರ ಎಲ್ಲಿಸ್ ಪೆರ್ರಿ 56 ಎಸೆತಗಳಲ್ಲಿ 9 ಬೌಂಡರಿ ಮತ್ತು 3 ಸಿಕ್ಸರ್‌ಗಳ ನೆರವಿನಿಂದ ಅಜೇಯ 90 ರನ್ ಗಳಿಸಿದರು. ಮತ್ತೊಂದೆಡೆ ಆರಂಭಿಕ ಆಟಗಾರ್ತಿ ಡೇನಿಯಲ್ ವ್ಯಾಟ್-ಹಾಡ್ಜ್ 57 ರನ್ ಗಳಿಸಿದರು. ಇಬ್ಬರ ಅರ್ಧಶತಕಗಳ ನೆರವಿನಿಂದ ಆರ್‌ಸಿಬಿ ತಂಡ 20 ಓವರ್‌ಗಳಲ್ಲಿ 6 ವಿಕೆಟ್‌ಗಳ ನಷ್ಟಕ್ಕೆ 180 ರನ್ ಗಳಿಸಿತು.
ಗುರಿ ಬೆನ್ನಟ್ಟಿದ ಯುಪಿ ವಾರಿಯರ್ಸ್ ಪರ ಶ್ವೇತಾ ಸೆಹ್ರಾವತ್ 31 ರನ್, ದೀಪ್ತಿ ಶರ್ಮಾ 25 ರನ್ ಮತ್ತು ಸೋಫಿ ಎಕಲ್ಸ್ಟನ್ ಅಜೇಯ 33 ರನ್ ಗಳಿಸಿದರು. ಕೊನೆಯ ಓವರ್‌ನಲ್ಲಿ ಯುಪಿ ತಂಡದ ಗೆಲುವಿಗೆ 18 ರನ್‌ಗಳ ಅಗತ್ಯವಿತ್ತು. ರೇಣುಕಾ ಸಿಂಗ್ ಎಸೆದ ಈ ಓವರ್‌ನಲ್ಲಿ ಸೋಫಿ ಎಕಲ್ಸ್ಟನ್ 2 ಸಿಕ್ಸರ್ ಮತ್ತು 1 ಬೌಂಡರಿ ಬಾರಿಸುವ ಮೂಲಕ ಪಂದ್ಯದ ಗತಿ ಬದಲಿಸಿದರು. ಆದರೆ, ಕೊನೆಯ ಎಸೆತದಲ್ಲಿ ಗೆಲುವಿಗೆ 1 ರನ್ ಅಗತ್ಯವಿದ್ದಾಗ ಸೋಫಿ ಎಕಲ್ಸ್ಟನ್ ರನ್ ಔಟ್ ಆಗುವ ಮೂಲಕ ಯುಪಿ ತಂಡ 20 ಓವರ್‌ಗಳಲ್ಲಿ 180 ರನ್‌ಗಳಿಗೆ ಆಲ್ ಔಟ್ ಆಯಿತು.