ಬೆಂಗಳೂರು: 2024ರ ಲೋಕಸಭಾ ಚುನಾವಣೆ ರಾಜ್ಯದಲ್ಲಿ ಜಿದ್ದಾಜಿದ್ದಿನ ಕಣವಾಗಿ ಮಾರ್ಪಟ್ಟಿತ್ತು. ಅಂತಿಮವಾಗಿ ಬಿಜೆಪಿ ಹೆಚ್ಚಿನ ಸ್ಥಾನಗಳನ್ನು ಗೆದ್ದಿದೆ. ಆದರೆ ಕಳೆದ ಬಾರಿಯ ಚುನಾವಣೆಗೆ ಹೋಲಿಸಿದರೆ ಬಿಜೆಪಿ ಈ ಬಾರಿ ಕಳೆದುಕೊಂಡಿದ್ದೇ ಹೆಚ್ಚು. ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಕಳೆದ ಲೋಕಸಭಾ ಚುನಾವಣೆಗಿಂತ ಈ ಬಾರಿಯ ಚುನಾವಣೆಯಲ್ಲಿ ಹೆಚ್ಚಿನ ಸೀಟ್ಗಳನ್ನು ಗೆದ್ದು ತೃಪ್ತಿಪಟ್ಟಿವೆ.
2019ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 28 ಕ್ಷೇತ್ರಗಳ ಪೈಕಿ 25 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುಮಲತಾ ಅಂಬರೀಷ್ ಪಕ್ಷೇತರ ಅಭ್ಯರ್ಥಿಯಾಗಿ ಜಯಗಳಿಸಿ ಬಿಜೆಪಿ ಪಾಳಯದಲ್ಲಿ ಗುರುತಿಸಿಕೊಂಡಿದ್ದರು.
ಈ ಬಾರಿಯ ಚುನಾವಣೆಯಲ್ಲಿ 28 ಕ್ಷೇತ್ರಗಳ ಪೈಕಿ ಭಾರತೀಯ ಜನತಾ ಪಕ್ಷ 17 ಕ್ಷೇತ್ರಗಳಲ್ಲಿ ಗೆದ್ದು, ಎಂಟು ಕ್ಷೇತ್ರಗಳನ್ನು ಕಳೆದುಕೊಂಡಿದೆ. ಎನ್‌ಡಿಎ ಮೈತ್ರಿಕೂಟದ ಲೆಕ್ಕಾಚಾರದ ಪ್ರಕಾರ ಬಿಜೆಪಿ ಮತ್ತು ಜೆಡಿಎಸ್ 19 ಕ್ಷೇತ್ರಗಳನ್ನು ಗೆದ್ದಿದ್ದು, ಕಳೆದ ಬಾರಿ ಚುನಾವಣ ಫಲಿತಾಂಶಕ್ಕೆ ಹೋಲಿಸಿದರೆ ಬಿಜೆಪಿ 6 ಕ್ಷೇತ್ರಗಳನ್ನು ಕಳೆದುಕೊಂಡಂತಾಗಿದೆ.
ಕಳೆದ ಬಾರಿಯ ಚುನಾವಣೆಯಲ್ಲಿ ಕೇವಲ ಒಂದು ಕ್ಷೇತ್ರ ಗೆದ್ದಿದ್ದ ಕಾಂಗ್ರೆಸ್ ಈ ಬಾರಿ 9 ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ ಚುನಾವಣಾ ಗೆಲುವಿನ ಪ್ರಮಾಣವನ್ನು ದೊಡ್ಡ ಮಟ್ಟದಲ್ಲಿ ಹೆಚ್ಚಿಸಿಕೊಂಡಿದೆ. ಆದರೆ ಪ್ರತಿಷ್ಠಿತ ಕ್ಷೇತ್ರವಾಗಿದ್ದ ಬೆಂಗಳೂರು ಗ್ರಾಮಾಂತರ ಕ್ಷೇತ್ರ ಉಳಿಸಿಕೊಳ್ಳಲು ಅದು ವಿಫಲವಾಗಿದೆ.
ಜೆಡಿಎಸ್ ಕಳೆದ ಬಾರಿ ಒಂದು ಕ್ಷೇತ್ರ ಮಾತ್ರ ಗೆದ್ದಿತ್ತು. ಈ ಬಾರಿ ಎರಡು ಕ್ಷೇತ್ರದಲ್ಲಿ ಗೆಲವು ಸಾಧಿಸುವ ಮೂಲಕ ಗೆಲುವಿನ ಪ್ರಮಾಣವನ್ನು ದ್ವಿಗುಣಗೊಳಿಸಿಕೊಂಡಿದೆ. ಆದರೆ ಕಳೆದ ಬಾರಿ ಗೆದ್ದ ಹಾಸನ ಕ್ಷೇತ್ರ ಉಳಿಸಿಕೊಳ್ಳಲು ಜೆಡಿಎಸ್ ವಿಫಲವಾಗಿದ್ದು, ಹೊಸತಾಗಿ ಮಂಡ್ಯ ಮತ್ತು ಕೋಲಾರ ಕ್ಷೇತ್ರಗಳಲ್ಲಿ ಗೆಲುವಿನ ರುಚಿ ಸವಿದಿದೆ.