ಬೆಂಗಳೂರು:ರಾಜ್ಯದಲ್ಲಿ ಇತ್ತೀಚೆಗೆ ಸುರಿದ ಹಿಂಗಾರು ಮಳೆ ಅನಾಹುತಕ್ಕೆ 25 ಜನರು ಸಾವಿಗೀಡಾಗಿದ್ದಾರೆ. ಹಿಂಗಾರು ಮಳೆ ವಾಡಿಕೆಗಿಂತ 58% ಹೆಚ್ಚು ಸುರಿದಿದೆ. ಹೀಗಾಗಿ, ದೊಡ್ಡ ಪ್ರಮಾಣದಲ್ಲಿ ಜೀವ ಹಾನಿ ಸಂಭವಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಪ್ರಸಕ್ತ ಸಾಲಿನ ಹಿಂಗಾರು ಅವಧಿಯಲ್ಲಿ ಉಂಟಾದ ಮಳೆಹಾನಿ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಬಳಿಕ ಮಾಧ್ಯಮಗೋಷ್ಟಿ ಉದ್ದೇಶಿಸಿ ಅವರು ಮಾತನಾಡಿದರು.
ಹಿಂಗಾರು ಅವಧಿಯಲ್ಲಿ ಅತಿವೃಷ್ಟಿಯಿಂದಾಗಿ ಒಟ್ಟು 25 ಸಾವು ಸಂಭವಿಸಿದ್ದು, ತುರ್ತು ಪರಿಹಾರ ಪಾವತಿಸಲಾಗಿದೆ. ಮಳೆಯಿಂದಾಗಿ 84 ಮನೆಗಳು ಸಂಪೂರ್ಣ ಹಾನಿಗೀಡಾಗಿದ್ದು, 2,077ಮನೆಗಳು ಭಾಗಶಃ ಹಾನಿಗೀಡಾಗಿವೆ. ಪೂರ್ತಿ ಮನೆಗೆ 1.20ಲಕ್ಷ ರೂ. ಪರಿಹಾರ ಹಾಗೂ ಮನೆ ನಿರ್ಮಿಸಿ ಕೊಡಲು ಈಗಾಗಲೇ ಆದೇಶಿಸಲಾಗಿದೆ. ಭಾಗಶಃ ಹಾನಿಗೀಡಾದ ಮನೆಗಳಿಗೆ ಮುಂಗಾರು ಹಂಗಾಮಿನಲ್ಲಿ ಸೂಚಿಸಿರುವಂತೆ ರೂ.50 ಸಾವಿರದವರೆಗೆ ಪರಿಹಾರ ಒದಗಿಸಲು ಆದೇಶಿಸಲಾಗಿದೆ ಎಂದು ತಿಳಿಸಿದರು.
ಈ ಬಾರಿ ಹಿಂಗಾರು ಹಂಗಾಮಿನಲ್ಲಿ ಅಕ್ಟೋಬರ್ 1ರಿಂದ 25ರ ವರೆಗೆ ರಾಜ್ಯದಲ್ಲಿ ಸರಾಸರಿ 181 ಮಿ.ಮೀ ಮಳೆಯಾಗಿದೆ. ಈ ಅವಧಿಯ ವಾಸ್ತವಿಕ ಸರಾಸರಿ ಮಳೆ ಪ್ರಮಾಣ 114 ಮಿ.ಮೀ ಆಗಿದ್ದು, ಶೇ.58 ರಷ್ಟು ಹೆಚ್ಚುವರಿ ಮಳೆ ದಾಖಲಾಗಿದೆ. ಮುಂಗಾರು ಅವಧಿಯಲ್ಲಿ ಅಂದರೆ ಜೂನ್ 1ರಿಂದ ಸೆಪ್ಟಂಬರ್ 30ರ ಅವಧಿಯಲ್ಲಿ ರಾಜ್ಯದಲ್ಲಿ ವಾಡಿಕೆ ಮಳೆ 852 ಮಿ.ಮೀ ಆಗಿದ್ದು, ಈ ಬಾರಿ 978 ಮಿ.ಮೀ ಮಳೆ ದಾಖಲಾಗಿದೆ ಎಂದರು.
ಮುಂಗಾರು ಅವಧಿಯಲ್ಲೂ ಶೇ.15ರಷ್ಟು ಹೆಚ್ಚುವರಿ ಮಳೆಯಾಗಿತ್ತು. ಹಿಂಗಾರು ಅವಧಿಯಲ್ಲಿ ಅಂದರೆ ಅಕ್ಟೋಬರ್‌ನಿಂದ ಡಿಸೆಂಬರ್ ತಿಂಗಳಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಲಿದೆ ಎಂದು ಈಗಾಗಲೇ ಮುನ್ಸೂಚನೆ ನೀಡಲಾಗಿದೆ. ರಾಜ್ಯದ ಪ್ರಮುಖ ಜಲಾಶಯಗಳ ಒಟ್ಟು ಸಂಗ್ರಹಣಾ ಸಾಮರ್ಥ್ಯ 895.62 ಟಿಎಂಸಿ ಆಗಿದ್ದು, ಪ್ರಸ್ತುತ 871.26 ಟಿಎಂಸಿ ನೀರು ಸಂಗ್ರಹವಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಇದು 505.81 ಟಿಎಂಸಿ ಇತ್ತು ಎಂದು ಮಾಹಿತಿ ನೀಡಿದರು.
ಬೆಳೆ ಹಾನಿ ಕುರಿತು ಸ್ಥಳ ಪರಿಶೀಲನೆ ನಡೆಸಿದ ಆಧಾರದಲ್ಲಿ ಪ್ರಾಥಮಿಕ ವರದಿಯನ್ನು ಪಡೆಯಲಾಗಿದೆ. ಅತಿವೃಷ್ಟಿಯಿಂದಾಗಿ ಒಟ್ಟು 74,993 ಹೆಕ್ಟೇರ್ ಪ್ರದೇಶದಲ್ಲಿ ಅಂದಾಜು ಕೃಷಿ ಬೆಳೆ ಹಾನಿ, 30,941 ಹೆಕ್ಟೇರ್ ಪ್ರದೇಶದಲ್ಲಿ ತೋಟಗಾರಿಕಾ ಬೆಳೆ ಹಾನಿ ಅಂದಾಜಿಸಲಾಗಿದೆ. ಒಟ್ಟು 1,05,937 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ ಅಂದಾಜಿಸಲಾಗಿದೆ ಎಂದು ಹೇಳಿದರು.
ಬೆಳೆ ಹಾನಿಯ ಕುರಿತು ಜಂಟಿ ಸಮೀಕ್ಷೆ ನಡೆಯುತ್ತಿದ್ದು, 3-4ದಿನಗಳಲ್ಲಿ ಸಮೀಕ್ಷೆ ಕಾರ್ಯ ಪೂರ್ಣಗೊಳ್ಳಲಿದೆ. ಜಂಟಿ ಸಮೀಕ್ಷೆ ಕಾರ್ಯವನ್ನು ಒಂದು ವಾರದ ಒಳಗಾಗಿ ಪೂರ್ಣಗೊಳಿಸಿ ವರದಿಯನ್ನು ಸಲ್ಲಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಮನೆ ಹಾನಿ ಮತ್ತು ಪ್ರಾಣ ಹಾನಿ ಪ್ರಕರಣಗಳಲ್ಲಿ 48 ಗಂಟೆಗಳ ಒಳಗಾಗಿ ಪರಿಹಾರವನ್ನು ಒದಗಿಸಬೇಕು ಎಂದು ಸೂಚಿಸಿದರು.
ಅತಿವೃಷ್ಟಿ ಪರಿಹಾರ ಕಾರ್ಯಗಳಿಗೆ ಸಾಕಷ್ಟು ಪ್ರಮಾಣದಲ್ಲಿ ಅನುದಾನ ಲಭ್ಯವಿದ್ದು, ಅನುದಾನ ಕೊರತೆ ಇಲ್ಲ. ಜಿಲ್ಲಾಧಿಕಾರಿಗಳ ಖಾತೆಯಲ್ಲಿ 551.25ಕೋಟಿ ರೂ. ಹಾಗೂ ತಹಶೀಲ್ದಾರ್ ಅವರ ಖಾತೆಯಲ್ಲಿ 115.71 ಕೋಟಿ ರೂ. ಸೇರಿದಂತೆ ಒಟ್ಟು 666.96 ಕೋಟಿ ರೂ. ಹಣ ಲಭ್ಯವಿದೆ. ಮುಂಗಾರಿನಲ್ಲಿ 80 ಸಾವಿರ ಹೆಕ್ಟೇರ್ ಬೆಳೆ ಹಾನಿಯಾಗಿದ್ದು, ಬೆಳೆ ಪರಿಹಾರ ನೀಡಲಾಗುತ್ತಿದೆ ಎಂದು ಸಿಎಂ ತಿಳಿಸಿದರು.
ಇದನ್ನೂ ಓದಿ:ಬೆಂಗಳೂರಲ್ಲಿ ಅಕ್ರಮ ಕಟ್ಟಡ ನಿರ್ಮಾಣ ನಿಯಂತ್ರಣಕ್ಕಾಗಿ ಕಾನೂನು ತರಲು ತೀರ್ಮಾನ : ಸಿಎಂ ಸಿದ್ದರಾಮಯ್ಯ