ಬೆಂಗಳೂರು:ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ ಇತರ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ 2ನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಇಂದಿನಿಂದ ಆರಂಭಿಸಲಾಗಿದೆ. ಮಂಗಳವಾರದವರೆಗೂ ಆಯ್ಕೆ ಬದಲಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.
ಭಾನುವಾರ ಬೆಳಗ್ಗೆ 11ಕ್ಕೆ ಹಂಚಿಕೆಗೆ ಲಭ್ಯ ಇರುವ ಸೀಟುಗಳ ವಿವರವನ್ನು ಪ್ರಕಟಿಸಲಾಗಿದೆ. ಮಧ್ಯಾಹ್ನ 2ಗಂಟೆಯಿಂದ ಸೆ.11ರವರೆಗೆ 'ಆಯ್ಕೆ' (Options) ಗಳನ್ನು ಬದಲಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ರಾಷ್ಟೀಯ ಮಟ್ಟದ ನೀಟ್ ಫಲಿತಾಂಶ ನೋಡಿಕೊಂಡು ಎರಡನೇ ಸುತ್ತಿನ ಫಲಿತಾಂಶ ದಿನಾಂಕವನ್ನು ಪ್ರಕಟಿಸಲಾಗುತ್ತದೆ.
ನೀಟ್ಗೆ ಸಂಬಂಧಿಸಿದಂತೆ ಎರಡನೇ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟಣೆ ನಂತರ ಅಭ್ಯರ್ಥಿಗಳಿಗೆ ಯಾವುದೇ ಛಾಯ್ಸ್ಗಳನ್ನು ಆಯ್ಕೆ ಮಾಡಲು ಅವಕಾಶ ಇರುವುದಿಲ್ಲ. ಈ ಹಂತದಲ್ಲಿ ಹಂಚಿಕೆಯಾದ ಸೀಟಿಗೆ ಪ್ರವೇಶ ಪಡೆಯುವುದು ಕಡ್ಡಾಯವಾಗಿರುತ್ತದೆ. ಒಂದು ವೇಳೆ ಶುಲ್ಕ ಪಾವತಿಸಿ, ಕಾಲೇಜಿಗೆ ಪ್ರವೇಶ ಪಡೆಯದಿದ್ದರೆ ಅಂತಹವರು ಕಾನೂನು ಕ್ರಮ ಎದುರಿಸಬೇಕಾಗುತ್ತದೆ. ಹೀಗಾಗಿ, ಅಭ್ಯರ್ಥಿಗಳು ಇಷ್ಟ ಇರುವ ಕಾಲೇಜುಗಳನ್ನು ಮಾತ್ರ ದಾಖಲಿಸಬೇಕು ಎಂದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.