ಬೆಂಗಳೂರು: ರಾಜ್ಯದ ಖಾಸಗಿ ವಲಯದಲ್ಲಿ ಕನ್ನಡಗರಿಗೆ ಉದ್ಯೋಗ ನೀಡುವ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿದ್ದ ಎಕ್ಸ್ ಪೋಸ್ಟ್ ಗೊಂದಲ ಮೂಡಿಸಿದ್ದು, ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಹಳೇ ಟ್ವೀಟ್ ಡಿಲೀಟ್ ಮಾಡಿ ಹೊಸ ಪೋಸ್ಟ್ ಹಾಕಿದ್ದಾರೆ.
ರಾಜ್ಯದ ಖಾಸಗಿ ಕೈಗಾರಿಕೆಗಳು ಹಾಗೂ ಇತರ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಆಡಳಿತಾತ್ಮಕ ಹುದ್ದೆಗಳಿಗೆ ಶೇ. 50 ಹಾಗೂ ಆಡಳಿತಾತ್ಮಕವಲ್ಲದ ಹುದ್ದೆಗಳಿಗೆ ಶೇ.75 ಮೀಸಲಾತಿ ನಿಗದಿಪಡಿಸುವ ವಿಧೇಯಕಕ್ಕೆ ಸೋಮವಾರ ನಡೆದ ಸಚಿವ ಸಂಪುಟ ಸಭೆಯು ಒಪ್ಪಿಗೆ ನೀಡಿದೆ ಎಂದು ಸಿಎಂ ಮಾಹಿತಿ ಹಂಚಿಕೊಂಡಿದ್ದಾರೆ. ಈ ಮೂಲಕ ಕರ್ನಾಟಕದ ಖಾಸಗಿ ಉದ್ಯಮಗಳಲ್ಲಿ ಕನ್ನಡಗರಿಗೆ ಹೆಚ್ಚಿನ ಉದ್ಯೋಗ ನೀಡುವ ಮಸೂದೆ ವಿಚಾರವಾಗಿ ಉಂಟಾಗಿದ್ದ ಗೊಂದಲಕ್ಕೆ ಸಿಎಂ ಸಿದ್ದರಾಮಯ್ಯ ಎಕ್ಸ್ ಪೋಸ್ಟ್ ಮೂಲಕ ಸ್ಪಷ್ಟನೆ ನೀಡಿದ್ದಾರೆ.
ಎಷ್ಟು ಪ್ರಮಾಣದಲ್ಲಿ ಮೀಸಲು ನೀಡಬೇಕು ಎನ್ನುವ ವಿಚಾರದಲ್ಲಿ ಗೊಂದಲವಾಗಿತ್ತು. ಸಚಿವ ಸಂತೋಷ್ ಲಾಡ್ ಅವರು ಶೇ. 75 ರವರೆಗೆ ಮೀಸಲು ಎಂದು ಹೇಳಿದ್ದರೆ, ಸಿಎಂ ಸಿದ್ದರಾಮಯ್ಯ ಶೇ. 100 ರಷ್ಟು ಖಾಸಗಿ ವಲಯಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲು ನೀಡಲಾಗುವುದು ಎಂದು ಎಕ್ಸ್‌ನಲ್ಲಿ ಈ ಮೊದಲು ಪೋಸ್ಟ್ ಮಾಡಿದ್ದರು. ಇದಕ್ಕೆ ಉದ್ಯಮಿಗಳು ವಿರೋಧ ವ್ಯಕ್ತಪಡಿಸಿದ್ದರು. ಗೊಂದಲ ಕೂಡ ಉಂಟಾಗಿತ್ತು. ಈ ಕಾರಣಕ್ಕೆ ಸಿಎಂ ಸಿದ್ದರಾಮಯ್ಯ ಹಳೆ ಟ್ವೀಟ್ ಅನ್ನು ಡಿಲೀಟ್ ಮಾಡಿ ಹೊಸ ಪೋಸ್ಟ್ ಹಾಕುವ ಮೂಲಕ ಸ್ಪಷ್ಟನೆ ಕೊಟ್ಟಿದ್ದಾರೆ.
ಸಿಎಂ ಹೊಸ ಎಕ್ಸ್ ಪೋಸ್ಟ್ ನಲ್ಲೇನಿದೆ? : ರಾಜ್ಯದ ಖಾಸಗಿ ಕೈಗಾರಿಕೆಗಳು ಹಾಗೂ ಇತರ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಆಡಳಿತಾತ್ಮಕ ಹುದ್ದೆಗಳಿಗೆ ಶೇ.50 ಹಾಗೂ ಆಡಳಿತಾತ್ಮಕವಲ್ಲದ ಹುದ್ದೆಗಳಿಗೆ ಶೇ.75 ಮೀಸಲಾತಿ ನಿಗದಿಪಡಿಸುವ ವಿಧೇಯಕಕ್ಕೆ ಸೋಮವಾರ ನಡೆದ ಸಚಿವ ಸಂಪುಟ ಸಭೆಯು ಒಪ್ಪಿಗೆ ನೀಡಿದೆ. ಕನ್ನಡಿಗರು ಕನ್ನಡದ ನೆಲದಲ್ಲಿ ಉದ್ಯೋಗ ವಂಚಿತರಾಗುವುದನ್ನು ತಪ್ಪಿಸಿ, ತಾಯ್ನಾಡಿನಲ್ಲಿ ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ಅವಕಾಶ ಕಲ್ಪಿಸಬೇಕು ಎಂಬುದು ನಮ್ಮ ಸರ್ಕಾರದ ಆಶಯ. ನಮ್ಮದು ಕನ್ನಡಪರವಾದ ಸರ್ಕಾರ. ಕನ್ನಡಿಗರ ಹಿತ ಕಾಯುವುದು ನಮ್ಮ ಆದ್ಯತೆಯಾಗಿದೆ ಎನ್ನುವುದು ಸಿದ್ದರಾಮಯ್ಯ ಅವರು ಎಕ್ಸ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.
ಹಳೇ ಎಕ್ಸ್ ಪೋಸ್ಟ್ ನಲ್ಲೇನಿತ್ತು ? : ರಾಜ್ಯದ ಖಾಸಗಿ ವಲಯದಲ್ಲಿ ಸಿ ಮತ್ತು ಡಿ ದರ್ಜೆಯ ಹುದ್ದೆಗಳಿಗೆ ನೂರರಷ್ಟು ಕನ್ನಡಿಗರ ನೇಮಕಾತಿಯನ್ನು ಕಡ್ಡಾಯಗೊಳಿಸುವ ವಿಧೇಯಕಕ್ಕೆ ಸೋಮವಾರ ನಡೆದ ಸಚಿವ ಸಂಪುಟ ಸಭೆಯು ಒಪ್ಪಿಗೆ ನೀಡಿದೆ. ಕನ್ನಡಿಗರು ಕನ್ನಡದ ನೆಲದಲ್ಲಿ ಉದ್ಯೋಗ ವಂಚಿತರಾಗುವುದನ್ನು ತಪ್ಪಿಸಿ, ತಾಯ್ನಾಡಿನಲ್ಲಿ ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ಅವಕಾಶ ಕಲ್ಪಿಸಬೇಕು ಎಂಬುದು ನಮ್ಮ ಸರ್ಕಾರದ ಆಶಯ. ನಮ್ಮದು ಕನ್ನಡಪರವಾದ ಸರ್ಕಾರ. ಕನ್ನಡಿಗರ ಹಿತ ಕಾಯುವುದು ನಮ್ಮ ಆದ್ಯತೆಯಾಗಿದೆ ಎಂದು ಸಿಎಂ ಎಕ್ಸ್ ಪೋಸ್ಟ್ ಮಾಡಿದ್ದರು.
ಕನ್ನಡಿಗರ ಸ್ವಾಭಿಮಾನ ಎತ್ತಿ ಹಿಡಿಯಲು ನಮ್ಮ ಸರ್ಕಾರ ಬದ್ಧ: ಕರ್ನಾಟಕದ ಖಾಸಗಿ ಕಂಪನಿಗಳಲ್ಲೂ ಕನ್ನಡಿಗರಿಗೆ ಉದ್ಯೋಗಗಳ ಮೀಸಲಾತಿ ಕುರಿತ ಮಸೂದೆ ಬಗ್ಗೆ ಡಿಸಿಎಂ ಡಿ. ಕೆ ಶಿವಕುಮಾರ್ ಅವರನ್ನು ಕೇಳಿದಾಗ, “ಕರ್ನಾಟಕದಲ್ಲಿ ಕನ್ನಡಿಗರ ಸ್ವಾಭಿಮಾನವನ್ನು ಎತ್ತಿ ಹಿಡಿಯಲು ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ. ಖಾಸಗಿ ಮಳಿಗೆಗಳಲ್ಲಿ ಕನ್ನಡ ನಾಮಫಲಕ ವಿಚಾರ ಹಾಗೂ ನಮ್ಮ ಧ್ವಜ, ಭಾಷೆ, ಸಂಸ್ಕೃತಿ, ಕಡತಗಳಲ್ಲಿ ಕನ್ನಡ ಬಳಕೆ ಸೇರಿದಂತೆ ರಾಜ್ಯದಲ್ಲಿ ಮುಂದೆ ಸೃಷ್ಟಿಯಾಗುವ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಇಂತಿಷ್ಟು ಉದ್ಯೋಗ ಮೀಸಲಿಡುವವರೆಗೂ ನಮ್ಮ ಸರ್ಕಾರ ಕೆಲಸ ಮಾಡುತ್ತದೆ. ಈ ನಿಟ್ಟಿನಲ್ಲಿ ಈ ಮಸೂದೆ ಜಾರಿಗೆ ತರಲು ನಿರ್ಧರಿಸಲಾಗಿದೆ ಎಂದು ಹೇಳಿದರು.
ಕಿರಣ್ ಮಜುಂದಾರ್ ಹಾಗೂ ಮೋಹನ್ ದಾಸ್ ಪೈ ಅವರಂತಹ ಉದ್ಯಮಿಗಳು ವಿರೋಧ ವ್ಯಕ್ತಪಡಿಸಿರುವ ಬಗ್ಗೆ ಕೇಳಿದಾಗ, “ತಂತ್ರಜ್ಞಾನ ಆಧರಿತ ಉದ್ಯೋಗಗಳ ವಿಚಾರದಲ್ಲಿ ನಾವು ಹಸ್ತಕ್ಷೇಪ ಮಾಡುವುದಿಲ್ಲ. ಈ ವಿಚಾರ ನಮಗೆ ಅರ್ಥವಾಗುತ್ತದೆ. ಇಂತಹ ವಿಚಾರದಲ್ಲಿ ನಾವು ವಿನಾಯಿತಿ ನೀಡುತ್ತೇವೆ. ಈ ಬಗ್ಗೆ ಅವರು ಸರ್ಕಾರದ ಗಮನಕ್ಕೆ ತರಬೇಕು. ಸದನ ನಡೆಯುತ್ತಿರುವ ಸಮಯದಲ್ಲಿ ಮಸೂದೆಯ ಇತರ ಮಾಹಿತಿಯನ್ನು ನಾನು ಸದನದ ಹೊರಗೆ ಬಹಿರಂಗಪಡಿಸಲು ಆಗುವುದಿಲ್ಲ. ಸದನದಲ್ಲಿ ಎಲ್ಲ ಅಂಶಗಳು ಚರ್ಚೆಯಾಗಲಿ'' ಎಂದರು.