ಕರ್ನಾಟಕ

karnataka

ETV Bharat / state

ಶೇ.60ರಷ್ಟು ಕನ್ನಡ ನಾಮಫಲಕ ಅಳವಡಿಸಲು ಮಾರ್ಚ್ 13ರವರೆಗೆ ಗಡುವು ವಿಸ್ತರಣೆ - BBMP

ಶೇ.60ರಷ್ಟು ಕನ್ನಡದಲ್ಲಿ ನಾಮಫಲಕ ಅಳವಡಿಸಲು ನೀಡಿದ್ದ ಗಡುವು ಸಡಿಲಗೊಳಿಸಲಾಗಿದೆ ಎಂದು ಬಿಬಿಎಂಪಿ ಪ್ರಕಟಣೆಯಲ್ಲಿ ತಿಳಿಸಿದೆ.

bbmp
ಬಿಬಿಎಂಪಿ

By ETV Bharat Karnataka Team

Published : Feb 29, 2024, 9:36 PM IST

ಬೆಂಗಳೂರು:ನಗರಾಭಿವೃದ್ಧಿ ಸಚಿವರ ನಿರ್ದೇಶನದ ಮೇರೆಗೆ ಶೇ.60ರಷ್ಟು ಕನ್ನಡ ನಾಮಫಲಕ ಅಳವಡಿಕೆಗೆ ನೀಡಿದ್ದ ಗಡುವನ್ನು ಸಡಿಲಗೊಳಿಸಿ ಮಾರ್ಚ್ 13ರವರೆಗೆ (2 ವಾರಗಳ ಕಾಲ) ವಿಸ್ತರಿಸಲಾಗಿದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆರೋಗ್ಯ ವಿಭಾಗದ ವಿಶೇಷ ಆಯುಕ್ತ ಸುರಾಳ್ಕರ್ ವಿಕಾಸ್ ಕಿಶೋರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸರ್ಕಾರ ಅಥವಾ ಸ್ಥಳೀಯ ಪ್ರಾಧಿಕಾರಗಳಿಂದ ಅನುಮತಿ ಮತ್ತು ಮಂಜೂರಾತಿ ಪಡೆದು ಕಾರ್ಯನಿರ್ವಹಿಸುತ್ತಿರುವ ವಾಣಿಜ್ಯ, ಕೈಗಾರಿಕೆ ಮತ್ತು ವ್ಯವಹಾರ ಅಥವಾ ಉದ್ಯಮಗಳು, ಟ್ರಸ್ಟ್‌ಗಳು, ಸಮಾಲೋಚನಾ ಕೇಂದ್ರಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನೋರಂಜನಾ ಕೇಂದ್ರಗಳು ಮತ್ತು ಹೋಟೆಲ್‌ಗಳು ಮುಂತಾದವುಗಳು ನಾಮಫಲಕಗಳಲ್ಲಿ ಕನ್ನಡ ಭಾಷೆಯನ್ನು ಶೇ.60ರಷ್ಟು ಬರೆಸಲು ಸೂಚಿಸಲಾಗಿದೆ. ಕನ್ನಡ ಭಾಷೆಯು ನಾಮಫಲಕದ ಮೇಲ್ಬಾಗದಲ್ಲಿ ಪ್ರದರ್ಶಿತವಾಗಿರುವ ಎಂಬುದನ್ನು ಖಚಿತಪಡಿಸಿಕೊಳ್ಳುವಂತೆ ವಿಶೇಷ ರಾಜ್ಯ ಪತ್ರಿಕಾ ಅಧಿಸೂಚನಾ ಪತ್ರದಲ್ಲಿ ಮಾಹಿತಿ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಈ ಹಿಂದೆ ಪಾಲಿಕೆ ಮುಖ್ಯ ಆಯುಕ್ತರ ಅಧ್ಯಕ್ಷತೆಯಲ್ಲಿ ಫೆ.2 ಹಾಗೂ 12ರಂದು ನಡೆದ ಸಭೆಯಲ್ಲಿ ಪಾಲಿಕೆ ವ್ಯಾಪ್ತಿಯಲ್ಲಿರುವ ಎಲ್ಲಾ ವಾಣಿಜ್ಯ ಉದ್ದಿಮೆಗಳಿಗೆ ಫೆಬ್ರವರಿ 28ರೊಳಗೆ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆ ಕಡ್ಡಾಯವಾಗಿ ಪ್ರದರ್ಶಿಸುವಂತೆ ಸೂಚನೆ ನೀಡಲಾಗಿತ್ತು ಎಂದು ಮಾಹಿತಿ ನೀಡಿದ್ದಾರೆ.

ಈ ಹಿನ್ನೆಲೆಯಲ್ಲಿ ಇಂದು ಪಾಲಿಕೆ ವ್ಯಾಪ್ತಿಯ ವಾಣಿಜ್ಯ ಉದ್ದಿಮೆಗಳ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆಯನ್ನು ಪ್ರದರ್ಶಿಸದೇ ಇರುವ ವಾಣಿಜ್ಯ ಉದ್ದಿಮೆಗಳನ್ನು ಇಲಾಖೆಯಿಂದ ನೀಡಿರುವ ಉದ್ದಿಮೆ ಪರವಾನಿಗೆಗಳನ್ನು ಅಮಾನತುಗೊಳಿಸಲು ಹಾಗೂ ಅಂತಹ ವಾಣಿಜ್ಯ ಉದ್ದಿಮೆಗಳನ್ನು ಬೀಗಮುದ್ರೆ ಹಾಕಲು ಅಗತ್ಯಕ್ರಮ ಕೈಗೊಳ್ಳಲು ಸುತ್ತೋಲೆ ಹೊರಡಿಸಲಾಗಿದೆ ಎಂದು ತಿಳಿಸಿದ್ದಾರೆ.

ಈಗ ಬೆಂಗಳೂರಿನ ಎಲ್ಲ ಅಂಗಡಿ-ಮುಂಗಟ್ಟುಗಳು, ವಾಣಿಜ್ಯ ಮಳಿಗೆಗಳು ಮೊದಲಾದ ಕಡೆ ಶೇ.60ರಷ್ಟು ಕನ್ನಡ ನಾಮಫಲಕಗಳನ್ನು ಅಳವಡಿಸಲು ಹೆಚ್ಚಿನ ಸಮಯವಕಾಶ ಬೇಕೆಂಬುದನ್ನು ಪರಿಗಣಿಸಿ ಡಿಸಿಎಂ ಹಾಗೂ ಸಚಿವರಿಗೆ ಮನವಿ ಮಾಡಿಕೊಂಡಿದ್ದವು. ಹೀಗಾಗಿ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರ ನಿರ್ದೇಶನ ಬಂದ ಹಿನ್ನೆಲೆಯಲ್ಲಿ ಈಗಾಗಲೇ ಫೆಬ್ರವರಿ 29ರವರೆಗಿನ ಗಡುವನ್ನು ಸಡಿಲಗೊಳಿಸಿ ಮಾರ್ಚ್ 13ರವರೆಗೆ ವಿಸ್ತರಿಸಲಾಗಿದೆ ಎಂದು ಸುರಾಳ್ಕರ್ ವಿಕಾಸ್ ಕಿಶೋರ್ ಮಾಹಿತಿ ನೀಡಿದ್ದಾರೆ.

ಇದನ್ನೂಓದಿ:ಜಾತಿ ಗಣತಿ ವರದಿ ಬಿಡುಗಡೆ ಮಾಡದಂತೆ ಹೈಕೋರ್ಟ್​ಗೆ ಅರ್ಜಿ: ನಾಳೆ ವಿಚಾರಣೆ

ABOUT THE AUTHOR

...view details