ಮೈಸೂರು:"ಭಾಷೆ, ಬದುಕು, ಸಾಹಿತ್ಯ, ಸಂಸ್ಕೃತಿ ಬೆಳವಣಿಗೆಯಲ್ಲಿ ಕನ್ನಡಕ್ಕೆ ತನ್ನದೇ ಆದ ಅಸ್ಮಿತೆ ಇದೆ" ಎಂದು ಸಚಿವ ಡಾ.ಹೆಚ್.ಸಿ. ಮಹದೇವಪ್ಪ ಅವರು 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು. ಜಿಲ್ಲಾಡಳಿತದ ವತಿಯಿಂದ ಓವಲ್ ಮೈದಾನದಲ್ಲಿ 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ. ಮಹದೇವಪ್ಪ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿ "ಕನ್ನಡ ಭಾಷೆಗೆ ಸುಮಾರು 2 ಸಾವಿರಕ್ಕೂ ಹೆಚ್ಚು ವರ್ಷಗಳ ಇತಿಹಾಸವಿದ್ದು, ಭಾಷೆ, ಬದುಕು, ಸಾಹಿತ್ಯ, ಸಂಸ್ಕೃತಿ ಬೆಳವಣಿಗೆಯಲ್ಲಿ ಕನ್ನಡ ಭಾಷೆಯು ತನ್ನದೇ ಅಸ್ಮಿತೆಯನ್ನು ಒಳಗೊಂಡಿದೆ. ಪ್ರಾಚೀನ ಕಾಲದಿಂದಲೂ ಶಾಸನಗಳಲ್ಲಿ ಕನ್ನಡ ಭಾಷೆ ಬಳಕೆಯಾಗಿರುವುದು ಕಂಡು ಬರುತ್ತದೆ. ಕನ್ನಡ ಭಾಷೆ ಮಾತನಾಡುವವರು ಕಾವೇರಿಯಿಂದ ಗೋದಾವರಿಯವರೆಗೆ ಇರುವುದನ್ನು ಕಾಣುತ್ತೇವೆ" ಎಂದರು.
ಕಾರ್ಯಕ್ರಮದಲ್ಲಿ ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ತನ್ವೀರ್ ಸೇಠ್, ವಿಧಾನ ಪರಿಷತ್ ಸದಸ್ಯರಾದ ಸಿ.ಎನ್.ಮಂಜೇಗೌಡ, ದಸರಾ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾದ ಅಯೂಬ್ ಖಾನ್, ಜಿಲ್ಲಾಧಿಕಾರಿಗಳಾದ ಜಿ.ಲಕ್ಷ್ಮಿಕಾಂತ ರೆಡ್ಡಿ, ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ಜಿಲ್ಲಾ ಪಂಚಾಯತ್ ಸಿಇಓ ಕೆ.ಎಂ. ಗಾಯಿತ್ರಿ, ಎಸ್ಪಿ ವಿಷ್ಣುವರ್ಧನ್, ಉಪ ವಿಭಾಗಾಧಿಕಾರಿ ರಕ್ಷಿತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಸುದರ್ಶನ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾದ ಟಿ.ಕೆ. ಹರೀಶ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.