ಕರ್ನಾಟಕ

karnataka

ETV Bharat / state

ಬೆಳಗಾವಿಯಲ್ಲಿ‌ 69ನೇ ಕರ್ನಾಟಕ ರಾಜ್ಯೋತ್ಸವ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ಸತೀಶ ಜಾರಕಿಹೊಳಿ

69ನೇ ಕರ್ನಾಟಕ ರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿದ ಸಚಿವ ಸತೀಶ ಜಾರಕಿಹೊಳಿ, 'ವೇಣುಗ್ರಾಮ' ಎಂದೇ ಹೆಸರುವಾಸಿಯಾಗಿದ್ದ ನಮ್ಮ ಬೆಳಗಾವಿಯು ತನ್ನ ವಿಶಿಷ್ಟ ಮತ್ತು ವಾತಾನುಕೂಲ ಪರಿಸರದಿಂದಾಗಿ ಎಲ್ಲರಿಗೂ ಪ್ರಿಯ ಎಂದರು.

KARNATAKA RAJYOTSAVA IN BELAGAVI
ಬೆಳಗಾವಿಯಲ್ಲಿ‌ 69ನೇ ಕರ್ನಾಟಕ ರಾಜ್ಯೋತ್ಸವ ಸಂಭ್ರಮ (ETV Bharat)

By ETV Bharat Karnataka Team

Published : Nov 1, 2024, 12:41 PM IST

Updated : Nov 1, 2024, 1:33 PM IST

ಬೆಳಗಾವಿ:ಬೆಳಗಾವಿ ಜಿಲ್ಲಾ ಕ್ರೀಡಾಂಗಣದಲ್ಲಿ 69ನೇ ಕರ್ನಾಟಕ ರಾಜ್ಯೋತ್ಸವದ ನಿಮಿತ್ತ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಧ್ವಜಾರೋಹಣ ನೆರವೇರಿಸಿದರು.

ಇದಕ್ಕೂ‌ ಮೊದಲು ಭುವನೇಶ್ವರಿ ದೇವಿ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು. ಪೊಲೀಸ್, ವಿವಿಧ ಶಾಲಾ ಕಾಲೇಜುಗಳ ತಂಡಗಳು, ಎನ್.ಸಿ.ಸಿ., ಎನ್.ಎಸ್.ಎಸ್, ಸ್ಕೌಟ್ ಆಂಡ್ ಗೈಡ್ಸ್ ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ ನಡೆಯಿತು.

ನಂತರ ಮಾತನಾಡಿದ ಸತೀಶ ಜಾರಕಿಹೊಳಿ, “ವೇಣುಗ್ರಾಮ” ಎಂದೇ ಹೆಸರುವಾಸಿಯಾಗಿದ್ದ ನಮ್ಮ ಬೆಳಗಾವಿಯು ತನ್ನ ವಿಶಿಷ್ಟ ಮತ್ತು ವಾತಾನುಕೂಲ ಪರಿಸರದಿಂದಾಗಿ ಎಲ್ಲರಿಗೂ ಪ್ರಿಯವಾಗಿದೆ. ಐತಿಹಾಸಿಕವಾಗಿ ಜಿಲ್ಲೆಯ ಹಲಸಿ ಗ್ರಾಮವು ಕದಂಬ ಅರಸರ ರಾಜಧಾನಿಯಾಗಿದ್ದ ಸಂಗತಿಯು ಶಾಸನಗಳು ಮತ್ತು ತಾಮ್ರ ಪತ್ರಗಳ ಆಧಾರದಿಂದ ತಿಳಿದುಬರುತ್ತದೆ. 6ನೇ ಶತಮಾನದಿಂದ ಕ್ರಿ.ಶ 760ರ ವರೆಗೂ ಬೆಳಗಾವಿಯು ಚಾಲುಕ್ಯ ಸಾಮ್ರಾಜ್ಯದ ಭಾಗವಾಗಿತ್ತು. ಕ್ರಿ.ಶ 875ರ ಅವಧಿಯಲ್ಲಿ ರಾಷ್ಟ್ರಕೂಟರ ಆಳ್ವಿಕೆಯಲ್ಲಿ ಸಾಂಸ್ಕೃತಿಕವಾಗಿ ಬೆಳೆದುಬಂದ ಬೆಳಗಾವಿ, ನಂತರ ರಟ್ಟ ವಂಶದ ಅರಸರ ರಾಜಧಾನಿಯಾಗಿತ್ತು. ದೆಹಲಿಯ ಸುಲ್ತಾನರ ಹಾಗೂ ವಿಜಯನಗರ ಸಾಮ್ರಾಜ್ಯದ ಆಳ್ವಿಕೆಗೆ ಒಳಪಟ್ಟಿದ್ದ ಬೆಳಗಾವಿ, ಕ್ರಿ.ಶ 1347ರಲ್ಲಿ ಬಹುಮನಿ ಸುಲ್ತಾನರ ಆಳ್ವಿಕೆಯ ಭಾಗವಾಗಿದ್ದ ಕುರಿತಂತೆ ಜಿಲ್ಲೆಯಾದ್ಯಂತ ಅನೇಕ ಸ್ಮಾರಕಗಳನ್ನು ನಾವು ಇಂದಿಗೂ ಕಾಣಬಹುದಾಗಿದೆ. ಚಾರಿತ್ರಿಕವಾಗಿ ಪಾರತಂತ್ರ್ಯವನ್ನು ವಿರೋಧಿಸಿ ಬ್ರಿಟಿಷರೊಡನೆ ಸ್ವಾತಂತ್ರ್ಯ ಹೋರಾಟಕ್ಕೆ ನಾಂದಿ ಹಾಡಿದ ಕಿತ್ತೂರಿನ ರಾಣಿ ಚೆನ್ನಮ್ಮ; ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹಾಗೂ ಪ್ರಪ್ರಥಮ ಮಹಿಳಾ ಸೈನ್ಯವನ್ನು ಕಟ್ಟಿದ ಬೆಳವಡಿ ಮಲ್ಲಮ್ಮ ನಮ್ಮ ನಾಡಿನ ಧೀಮಂತ ಶಕ್ತಿಯಾಗಿದ್ದಾರೆ ಎಂದರು.

ಬೆಳಗಾವಿಯಲ್ಲಿ‌ 69ನೇ ಕರ್ನಾಟಕ ರಾಜ್ಯೋತ್ಸವ ಸಂಭ್ರಮ (ETV Bharat)

ಏಕೀಕರಣಕ್ಕೆ ಹಲವು ಮಹನಿಯರು ದುಡಿದಿದ್ದಾರೆ:ಕರ್ನಾಟಕ ಏಕೀಕರಣ ಚಳವಳಿಯಲ್ಲಿ ಬೆಳಗಾವಿ ಜಿಲ್ಲೆಯಿಂದ ಹಲವಾರು ಮಹನೀಯರು ಕ್ರಿಯಾಶೀಲರಾಗಿ ಹೋರಾಡಿದ್ದು, ಬೈಲಹೊಂಗಲದ ಗಂಗಾಧರ ತುರಮುರಿ, ಹುದಲಿಯ ಸ್ವಾತಂತ್ರ್ಯ ಯೋಧರಾದ ಗಂಗಾಧರರಾವ್ ದೇಶಪಾಂಡೆ, ಚಿಂಚಲಿಯ ರಾಷ್ಟ್ರೀಯವಾದಿ ಆರ್.ಎಸ್.ಹುಕ್ಕೇರಿ, ತ್ರಿವಿಧ ದಾಸೋಹಿ ನಾಗನೂರ ಶಿವಬಸವ ಮಹಾಸ್ವಾಮಿಗಳು, ಗೋಕಾವಿ ನಾಡಿನ ಬೆಟಗೇರಿ ಕೃಷ್ಣಶರ್ಮ, ಸವದತ್ತಿಯ ಶಂ.ಬಾ.ಜೋಶಿ, ಅಂಕಲಿಯ ಬಸವಪ್ರಭು ಕೋರೆ, ಅಥಣಿಯ ಬಿ.ಎನ್.ದಾತಾರ, ಕುಂದರನಾಡಿನ ಅಣ್ಣೂ ಗುರೂಜಿ, ದತ್ತೋಪಂತ ಬೆಳವಿ, ಸಂಪಗಾವಿಯ ಚನ್ನಪ್ಪ ವಾಲಿ ಮೊದಲಾದವರ ಕೊಡುಗೆ ಅವಿಸ್ಮರಣೀಯ. ಇನ್ನು ಚಂಪಾಬಾಯಿ ಭೋಗಲೆ, ಅಕ್ಕನ ಬಳಗದ ಬಸಲಿಂಗಮ್ಮ ಬಾಳೇಕುಂದ್ರಿ, ಕೃಷ್ಣಾಬಾಯಿ ಪಣಜೀಕರ್ ಸೇರಿ ಮೊದಲಾದ ಮಹಿಳೆಯರೂ ಕರ್ನಾಟಕ ಏಕೀಕರಣಕ್ಕಾಗಿ ಹೋರಾಡಿರುವುದು ನಾಡು-ನುಡಿ ಹೋರಾಟದಲ್ಲಿ ಬೆಳಗಾವಿ ಜಿಲ್ಲೆಯ ಮಹಿಳೆಯರ ಕೊಡುಗೆ ಅಪಾರ ಎಂಬುದಕ್ಕೆ ಸಾಕ್ಷಿಯಾಗಿದೆ ಎಂದು ಸತೀಶ ಜಾರಕಿಹೊಳಿ ಹರ್ಷ ವ್ಯಕ್ತಪಡಿಸಿದರು.

ಆಕರ್ಷಕ ಪಥಸಂಚಲನ (ETV Bharat)

ಈ ವೇಳೆ ಶಾಸಕ ಆಸೀಫ್ ಸೇಠ್, ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಸಂಸದ ಜಗದೀಶ ಶೆಟ್ಟರ್, ವಿಧಾನಪರಿಷತ್ ಸದಸ್ಯ ಸಾಬಣ್ಣ ತಳವಾರ ಸೇರಿ ಮತ್ತಿತರರು ಇದ್ದರು. ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ಹಲ್ಮಿಡಿ ಶಾಸನದ ಪ್ರತಿಕೃತಿಯನ್ನು ಸಚಿವ ಸತೀಶ ಜಾರಕಿಹೊಳಿ ಅನಾವರಣಗೊಳಿಸಿದರು. ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಜಿಪಂ ಸಿಇಒ ರಾಹುಲ್‌ ಶಿಂಧೆ, ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ ಮತ್ತಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ: ಕನ್ನಡ, ಕನ್ನಡಿಗರ ಹೀಯಾಳಿಸುವ ಪ್ರವೃತ್ತಿ ಹೆಚ್ಚುತ್ತಿದೆ, ಅಂತಹವರ ವಿರುದ್ಧ ಮುಲಾಜಿಲ್ಲದೇ ಕಠಿಣ ಕ್ರಮ: ಸಿಎಂ ಎಚ್ಚರಿಕೆ

Last Updated : Nov 1, 2024, 1:33 PM IST

ABOUT THE AUTHOR

...view details