ಹುಬ್ಬಳ್ಳಿ :ಉತ್ತರ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದ ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ (ಹೆಸ್ಕಾಂ)ಗೆ ಅಂದಾಜು 9.82 ಕೋಟಿ ರೂ. ನಷ್ಟವುಂಟಾಗಿದೆ ಎಂದು ಹೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ.
ವಿಪರೀತ ಮಳೆ ಮತ್ತು ಗಾಳಿಯಿಂದ ಜಿಲ್ಲೆಯ ಹಲವೆಡೆ ಗುಡ್ಡ ಕುಸಿತ, ಮರ - ಗಿಡಗಳು ಧರೆಗುರುಳುತ್ತಿವೆ. ಈ ಮಧ್ಯೆ ಇದುವರೆಗೆ 5,404 ವಿದ್ಯುತ್ ಕಂಬಗಳು, 536 ವಿದ್ಯುತ್ ಪರಿವರ್ತಕಗಳು, 184.43 ಕಿ.ಮೀ ಉದ್ದದ ವಿದ್ಯುತ್ ತಂತಿಗಳು ಹಾನಿಗೊಳಗಾಗಿವೆ. ಬಿಡುವು ನೀಡದೇ ಸುರಿಯುತ್ತಿರುವ ಮಳೆಯ ನಡುವೆಯೇ ವಿದ್ಯುತ್ ಕಂಬಗಳು, ವಿದ್ಯುತ್ ಪರಿವರ್ತಕಗಳು ಹಾಗೂ ವಿದ್ಯುತ್ ತಂತಿಗಳ ದುರಸ್ತಿ ಕಾರ್ಯವನ್ನು ಹೆಸ್ಕಾಂ ಸಿಬ್ಬಂದಿ ಯಶಸ್ವಿಯಾಗಿ ಮಾಡುತ್ತಿದ್ದಾರೆ.
ಜಿಲ್ಲೆಯ ಶಿರಸಿ, ಸಿದ್ದಾಪುರ, ಯಲ್ಲಾಪುರ, ಮುಂಡಗೋಡ, ಹಳಿಯಾಳ, ಜೋಯಿಡಾ, ದಾಂಡೇಲಿ, ಅಂಕೋಲಾ, ಕಾರವಾರ, ಕುಮಟಾ, ಹೊನ್ನಾವರ ಹಾಗೂ ಭಟ್ಕಳ ಸೇರಿದಂತೆ ಎಲ್ಲ ತಾಲೂಕುಗಳಲ್ಲಿ ಒಟ್ಟು 5,402 ವಿದ್ಯುತ್ ಕಂಬಗಳು ಹಾನಿಯಾಗಿದ್ದು, ಅವುಗಳ ಪೈಕಿ 5,215 ವಿದ್ಯುತ್ ಕಂಬಗಳನ್ನು ದುರಸ್ತಿ ಮಾಡಲಾಗಿದೆ. ಇನ್ನುಳಿದ 187 ವಿದ್ಯುತ್ ಕಂಬಗಳ ದುರಸ್ತಿ ಕಾರ್ಯ ನಡೆಯುತ್ತಿದೆ.