ಚಿಕ್ಕಬಳ್ಳಾಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ಕಂದಕಕ್ಕೆ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಗೌರಿಬಿದನೂರು ತಾಲೂಕು, ವಾಟದಹೊಸಹಳ್ಳಿ ಬೆಸ್ಕಾಂ ಶಾಖೆಯಲ್ಲಿ ಕೆಲಸ ಮಾಡುತ್ತಿದ್ದ ಬೆಸ್ಕಾಂ ಲೈನ್ ಮ್ಯಾನ್ಗಳಾದ ಶ್ರೀಧರ, ವೇಣುಗೋಪಾಲ, ಮಂಜುನಾಥ, ಶಿವಕುಮಾರ್ ಎಂಬುವರುಗಳು ಗುರುವಾರ ರಾತ್ರಿ ವೇಣುಗೋಪಾಲ ಅವರ ಬ್ರಿಸ್ಝಾ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಅಪಘಾತ ಸಂಭವಿಸಿದೆ. ನಗರಗೆರೆ - ವಾಟದಹೊಸಹಳ್ಳಿ ರಸ್ತೆಯಲ್ಲಿ ಸಾಗುತ್ತಿದ್ದಾಗ ಕಾರು ಆಯತಪ್ಪಿ ರಸ್ತೆಯ ಪಕ್ಕದ ಕಂದಕಕ್ಕೆ ಉರುಳಿ ಬಿದ್ದಿದೆ. ಪರಿಣಾಮ ಸ್ಥಳದಲ್ಲಿಯೇ ಶ್ರೀಧರ್ (28), ವೇಣುಗೋಪಾಲ (38), ಮಂಜುನಾಥ (37) ಸ್ಥಳದಲ್ಲಿಯೇ ಮೃತಪಟ್ಟಿದ್ದು, ಶಿವಕುಮಾರ್ ಎಂಬುವವರಿಗೆ ಗಂಭೀರ ಗಾಯಗಳಾಗಿವೆ. ಅವರನ್ನು ಬೆಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.