ಬೆಂಗಳೂರು:ಉಪ ಮುಖ್ಯಮಂತ್ರಿ ಹಾಗೂ ಸಚಿವರ ಅಪ್ತ ಕಾರ್ಯದರ್ಶಿಗಳ ಸೋಗಿನಲ್ಲಿ ಸರ್ಕಾರಿ ಅಧಿಕಾರಿಗಳಿಗೆ ಕರೆ ಮಾಡಿ ವರ್ಗಾವಣೆ ಮಾಡಿಸಿಕೊಡುವುದಾಗಿ ನಂಬಿಸಿ ಹಣ ವಸೂಲಿ ಮಾಡುತ್ತಿದ್ದ ಆರೋಪಿಯನ್ನು ನಗರದ ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ಧಾರೆ.
ರಘುನಾಥ್ (35) ಬಂಧಿತ ಆರೋಪಿ. ತುಮಕೂರು ಮೂಲದ ಈತ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಅವರ ಕಾರ್ಯದರ್ಶಿಗಳಿಗೆ ಆಪ್ತ ಎಂದು ಹೇಳಿಕೊಂಡು ವಂಚಿಸಿದ್ದಾನೆ. ಸರ್ಕಾರಿ ಅಧಿಕಾರಿ ಹಾಗೂ ಸಿಬ್ಬಂದಿಗೆ ಕರೆ ಮಾಡಿ ವರ್ಗ ಮಾಡಿಸಿಕೊಡುವುದಾಗಿ ನಂಬಿಸಿ ಹಣ ಪಡೆದು ವಂಚಿಸುತ್ತಿದ್ದ. ಈ ಸಂಬಂಧ ಎರಡು ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಹಿಂದೆಯೂ ಬಂಧಿತನಾಗಿದ್ದ ಆರೋಪಿ:ಎಂಬಿಎ ವ್ಯಾಸಂಗ ಮಾಡಿಕೊಂಡಿದ್ದ ರಘುನಾಥ್ ಕೆಲಸಕ್ಕೆ ಹೋಗದೆ ಓಡಾಡುತ್ತಿದ್ದ. ಸರ್ಕಾರಿ ಕಚೇರಿಗಳಿಗೆ ತೆರಳಿ ಅಧಿಕಾರಿಗಳ ವರ್ಗಾವಣೆಯಾಗುವ ಬಗ್ಗೆ ತಿಳಿದುಕೊಳ್ಳುತ್ತಿದ್ದ. ಅವರ ಮೊಬೈಲ್ ನಂಬರ್ ಸಂಗ್ರಹಿಸಿಕೊಂಡು ಕರೆ ಮಾಡಿ, ಸಚಿವರ ಆಪ್ತ ಕಾರ್ಯದರ್ಶಿ ಹೆಸರಿನಲ್ಲಿ ಸರ್ಕಾರಿ ನೌಕರರಿಗೆ ವಂಚಿಸುತ್ತಿದ್ದ. ವಂಚನೆ ಪ್ರಕರಣದಲ್ಲಿ ಈ ಹಿಂದೆ ಬಂಧಿತನಾಗಿ ಜಾಮೀನು ಪಡೆದು ಹೊರಬಂದು ಮತ್ತೆ ವಂಚನೆ ಕೃತ್ಯದಲ್ಲಿ ತೊಡಗಿಸಿಕೊಂಡಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.