ಬೆಂಗಳೂರು:ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ಎಲ್ಲ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಇಂದು ಅಂತ್ಯವಾಗಲಿದೆ. ದರ್ಶನ್ ಮತ್ತು ಸಂಗಡಿಗರನ್ನು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ 24ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಪೊಲೀಸರು ಹಾಜರುಪಡಿಸಲಿದ್ದಾರೆ.
ಬಳಿಕ ಆರೋಪಿಗಳನ್ನು ನ್ಯಾಯಾಲಯದ ಆದೇಶದಂತೆ ರಾಜ್ಯದ ವಿವಿಧ ಕಾರಾಗೃಹಗಳಿಗೆ ಸ್ಥಳಾಂತರಿಸಲು ಜೈಲಧಿಕಾರಿಗಳು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.
ಮಧ್ಯಾಹ್ನದ ಬಳಿಕ ಸ್ಥಳಾಂತರ:ಕಾರಾಗೃಹದಲ್ಲಿ ವಿಶೇಷ ಆತಿಥ್ಯ ಪಡೆದ ಆರೋಪ ಕಾರಣಕ್ಕೆ ದರ್ಶನ್ ಮತ್ತು ಸಹಚರರನ್ನು ಬೇರೆ ಬೇರೆ ಕಾರಾಗೃಹಗಳಿಗೆ ಸ್ಥಳಾಂತರ ಮಾಡಲು ಅನುಮತಿ ಕೋರಿ ಪರಪ್ಪನ ಅಗ್ರಹಾರ ಜೈಲಿನ ಮುಖ್ಯ ಅಧೀಕ್ಷಕರು ನಗರದ 24ನೇ ಎಸಿಎಂಎಂ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಮನವಿ ಪುರಸ್ಕರಿಸಿದ್ದ ನ್ಯಾಯಾಲಯ ಆರೋಪಿಗಳ ಸ್ಥಳಾಂತರ ಮಾಡಲು ಅನುಮತಿ ನೀಡಿತ್ತು.