ಬೆಂಗಳೂರು:ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಪ್ರಕರಣದಲ್ಲಿ ಜಾಮೀನು ಕೋರಿ ನಟ ದರ್ಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು 57ನೇ ಸಿಟಿ ಸಿವಿಲ್ ನ್ಯಾಯಾಲಯ ಸೋಮವಾರಕ್ಕೆ ಮುಂದೂಡಿದೆ. ಪ್ರಕರಣದ ಕುರಿತು ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿ ಎರಡು ವಾರದ ಬಳಿಕ ದರ್ಶನ್ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು.
ದರ್ಶನ್ ಸಲ್ಲಿಸಿದ್ದ ಅರ್ಜಿಗೆ ಪ್ರತಿಯಾಗಿ ಆಕ್ಷೇಪಣೆ ಸಲ್ಲಿಸುವಂತೆ ಸರ್ಕಾರಿ ವಿಶೇಷ ಅಭಿಯೋಜಕರಿಗೆ ನೋಟಿಸ್ ಜಾರಿಗೊಳಿಸಿರುವ ಸಿಟಿ ಸಿವಿಲ್ ಕೋರ್ಟ್ 57ರ ನ್ಯಾಯಾಧೀಶರಾದ ಜೈಶಂಕರ್, ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದರು.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನವಾಗಿ 100 ದಿನಗಳ ಬಳಿಕ ಜಾಮೀನು ಕೋರಿ ನಟ ದರ್ಶನ್ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದರು. ಹತ್ಯೆ ಪ್ರಕರಣದಲ್ಲಿ ಬಳ್ಳಾರಿ ಜೈಲಿನಲ್ಲಿರುವ ದರ್ಶನ್ ಇತ್ತೀಚೆಗೆ ವಕೀಲರೊಂದಿಗೆ ಚರ್ಚೆ ನಡೆಸಿದ್ದರು. ಪ್ರಕರಣ ಸಂಬಂಧ ದರ್ಶನ್ ಒಳಗೊಂಡಂತೆ 17 ಮಂದಿ ಆರೋಪಿಗಳ ವಿರುದ್ಧ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು 3,991 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದರು. ದೋಷಾರೋಪ ಪಟ್ಟಿ ಸಲ್ಲಿಕೆಯಾದ ಬೆನ್ನಲ್ಲೇ ನ್ಯಾಯಾಲಯಕ್ಕೆ ದರ್ಶನ್ ಜಾಮೀನು ಅರ್ಜಿ ಸಲ್ಲಿಸುವ ಸಾಧ್ಯತೆಗಳಿದ್ದವು. ಇದೀಗ ವಕೀಲರೊಂದಿಗೆ ಚರ್ಚಿಸಿದ ಬಳಿಕ ಅಂತಿಮವಾಗಿ ನ್ಯಾಯಾಲಯಕ್ಕೆ ಇಂದು ಜಾಮೀನು ಅರ್ಜಿ ಸಲ್ಲಿಸಿದ್ದಾರೆ.